ಬೆಂಗಳೂರು:ಎಐಸಿಸಿ ಪ್ರಧಾನ ಕಾರ್ಯದರ್ಶಿ ಹಾಗೂ ಕರ್ನಾಟಕ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲ ಸೆಪ್ಟಂಬರ್ 27ರಿಂದ ಎರಡು ದಿನ ರಾಜ್ಯ ಪ್ರವಾಸ ಕೈಗೊಳ್ಳಲಿದ್ದಾರೆ.
ಸೆ.27ರಂದು ಮಧ್ಯಾಹ್ನ 2 ಗಂಟೆಗೆ ಬೆಂಗಳೂರಿನ ಅರಮನೆ ಮೈದಾನದಲ್ಲಿರುವ ವೈಟ್ ಪೆಟೆಲ್ನಲ್ಲಿ (ಗೇಟ್ ನಂ. 03) ಕೆಪಿಸಿಸಿ ವತಿಯಿಂದ ಹಿರಿಯ ನಾಯಕರ ಸಭೆ ಹಮ್ಮಿಕೊಳ್ಳಲಾಗಿದ್ದು, ಈ ಸಭೆಯಲ್ಲಿ ರಣದೀಪ್ ಭಾಗವಹಿಸಲಿದ್ದಾರೆ.
ಸಭೆಯ ಅಧ್ಯಕ್ಷತೆಯನ್ನು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ವಹಿಸಲಿದ್ದಾರೆ. ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ, ವಿಧಾನ ಪರಿಷತ್ತ ಪ್ರತಿಪಕ್ಷ ನಾಯಕ ಎಸ್.ಆರ್.ಪಾಟೀಲ್, ಕೆಪಿಸಿಸಿ ಕಾರ್ಯಾಧ್ಯಕ್ಷರು, ಸಿಡಬ್ಲ್ಯುಸಿ ಸದಸ್ಯರು ಸೇರಿದಂತೆ ಇನ್ನಿತರ ಹಿರಿಯ ನಾಯಕರು ಪಾಲ್ಗೊಳ್ಳಲಿದ್ದಾರೆ.
ಕರ್ನಾಟಕ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲ ಈ ಸಭೆಯಲ್ಲಿ ಎಲ್ಲಾ ಶಾಸಕರು, ವಿಧಾನಪರಿಷತ್ ಸದಸ್ಯರು, ರಾಜ್ಯಸಭಾ ಸದಸ್ಯರು, ಲೋಕಸಭಾ ಸದಸ್ಯರು, 2019ರ ಲೋಕಸಭಾ ಅಭ್ಯರ್ಥಿಗಳು, 2018ರ ವಿಧಾನಸಭಾ ಅಭ್ಯರ್ಥಿಗಳು, ಎಐಸಿಸಿ ಸದಸ್ಯರು, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರು, ಮಾಜಿ ಕೆಪಿಸಿಸಿ ಪದಾಧಿಕಾರಿಗಳು, ಎಲ್ಲಾ ಮುಂಚೂಣಿ ಘಟಕಗಳು, ಸೆಲ್ ಮತ್ತು ವಿಭಾಗಗಳ ರಾಜ್ಯಾಧ್ಯಕ್ಷರು, ಮಾಚಿ ನಿಗಮ ಮಂಡಳಿಗಳ ಅಧ್ಯಕ್ಷರು ಭಾಗವಹಿಸಲಿದ್ದಾರೆ.
ಸೆ.28ರಂದು ರಣದೀಪ್ ಸಿಂಗ್ ಸುರ್ಜೇವಾಲ ಅವರು ಪಕ್ಷದ ಹಿರಿಯ ನಾಯಕರು ಹಾಗೂ ಕಾರ್ಯಕರ್ತರನ್ನು ಕೆಪಿಸಿಸಿ ಕಚೇರಿಯಲ್ಲಿ ಭೇಟಿ ಮಾಡಲಿದ್ದಾರೆ. ಈ ವೇಳೆ ಪಕ್ಷ ಸಂಘಟನೆ ಹಾಗೂ ಇತರೆ ಪ್ರಮುಖ ವಿಚಾರಗಳ ಕುರಿತು ಚರ್ಚಿಸಲಿದ್ದಾರೆ.