ಬೆಂಗಳೂರು: ದ್ವಿಚಕ್ರ ವಾಹನಗಳ ಹ್ಯಾಂಡಲ್ ಲಾಕ್ ಮುರಿದು ಕದ್ದು, ನಂತರ ಗಾಡಿಯನ್ನು ಕಡಿಮೆ ಬೆಲೆಗೆ ಮಾರಾಟ ಮಾಡುತ್ತಿದ್ದ ಇಬ್ಬರು ಕಳ್ಳ ಸಹೋದರರನ್ನು ಬೈಯ್ಯಪ್ಪನಹಳ್ಳಿ ಠಾಣಾ ಪೊಲೀಸರು ಬಂಧಿಸಿದ್ದಾರೆ. ಆಂಧ್ರ ಪ್ರದೇಶ ಮೂಲದ ಉದಯ್ ಕುಮಾರ್ (26) ಹಾಗೂ ಶ್ರೀನಿವಾಸುಲು (23) ಬಂಧಿತ ಸಹೋದರರು. ಬಂಧಿತರಿಂದ 5 ರಾಯಲ್ ಎನ್ ಫೀಲ್ಡ್ ಸೇರಿದಂತೆ 16 ಲಕ್ಷ ಮೌಲ್ಯದ 9 ದ್ವಿಚಕ್ರ ವಾಹನಗಳನ್ನ ವಶಕ್ಕೆ ಪಡೆಯಲಾಗಿದೆ.
ಆಂಧ್ರಪ್ರದೇಶ ಮೂಲದವರಾಗಿರುವ ಆರೋಪಿಗಳು ಕಳೆದ ಕೆಲ ವರ್ಷಗಳಿಂದ ಬೆಂಗಳೂರಿನಲ್ಲಿ ಪೇಂಟಿಂಗ್ ಕೆಲಸ ಮಾಡಿಕೊಂಡಿದ್ದರು. ಆದರೆ ರಾತ್ರಿ ವೇಳೆ ದ್ವಿಚಕ್ರ ವಾಹನಗಳ ಹ್ಯಾಂಡಲ್ ಲಾಕ್ ಮುರಿದು ಕಳ್ಳತನ ಮಾಡುತ್ತಿದ್ದರು. 2018 ರಿಂದಲೂ ಕಳ್ಳತನದಲ್ಲಿ ಭಾಗಿಯಾಗಿದ್ದ ಆರೋಪಿಗಳು ಕೆ.ಆರ್.ಪುರಂ, ಮಹಾದೇವಪುರ, ಚೆನ್ನಮ್ಮನ ಕೆರೆ ಅಚ್ಚುಕಟ್ಟು ಠಾಣಾ ವ್ಯಾಪ್ತಿಗಳಲ್ಲಿ ಕಳ್ಳತನ ಮಾಡಿದ್ದರು.
ಬಳಿಕ ಅವುಗಳನ್ನು ಕಡಿಮೆ ಬೆಲೆಗೆ ಮಾರಾಟ ಮಾಡಿ, ದಾಖಲೆಗಳನ್ನು ಕೊಡದೇ ವಂಚಿಸುತ್ತಿದ್ದರು. ಸದ್ಯ ಇಬ್ಬರೂ ಆರೋಪಿಗಳನ್ನು ಬಂಧಿಸಲಾಗಿದ್ದು ನ್ಯಾಯಾಂಗ ಬಂಧನಕ್ಕೊಪ್ಪಿಸಲಾಗಿದೆ. ಬಂಧಿತರ ವಿರುದ್ಧ ವಿವಿಧ ಠಾಣೆಗಳಲ್ಲಿ ದಾಖಲಾಗಿದ್ದ 6 ದ್ವಿಚಕ್ರ ವಾಹನ ಕಳ್ಳತನ ಪ್ರಕರಣ ಬೆಳಕಿಗೆ ಬಂದಂತಾಗಿದೆ.
ಆರೋಪಿಗಳ ಬಂಧನದ ಕುರಿತು ಪ್ರತಿಕ್ರಿಯಿಸಿದ ಪೂರ್ವ ವಿಭಾಗದ ಡಿಸಿಪಿ ಡಾ.ಭೀಮಾಶಂಕರ್ ಗುಳೇದ್, "ಸೆಕೆಂಡ್ ಹ್ಯಾಂಡ್ ವಾಹನಗಳನ್ನು ಖರೀದಿಸುವಾಗ ಅದರ ಮೂಲ ದಾಖಲೆಗಳಿಲ್ಲದೇ, ಅಥವಾ ಪರಿಶೀಲಿಸದೇ ಖರೀದಿಸಬಾರದು. ಇಂತಹ ಸಂದರ್ಭಗಳಲ್ಲಿ ಕಳ್ಳರ ಬಂಧನವಾದರೂ ಸಹ ವಂಚಿಸಿದ ಹಣವನ್ನು ಅವರಿಂದ ವಶಕ್ಕೆ ಪಡೆಯುವುದು ಕಷ್ಟವಾಗುತ್ತದೆ" ಎಂದು ಸಾರ್ವಜನಿಕರಿಗೆ ಸೂಚನೆ ನೀಡಿದ್ದಾರೆ.