ಕರ್ನಾಟಕ

karnataka

ETV Bharat / state

ಯಾವ ಕಾನೂನಿನಡಿ ಕೇರಳ ಗಡಿ ನಿರ್ಬಂಧಿಸಿದ್ದೀರಿ: ಸರ್ಕಾರದ ವಿರುದ್ಧ ಹೈಕೋರ್ಟ್ ಅಸಮಾಧಾನ - ಕರ್ನಾಟಕ ಕೇರಳ ಗಡಿ ನಿರ್ಬಂಧ ವಿಚಾರ,

ಕಾಸರಗೋಡು ಹಾಗೂ ರಾಜ್ಯದ ದಕ್ಷಿಣ ಕನ್ನಡ ಜಿಲ್ಲೆ ನಡುವಿನ ಸಂಚಾರವನ್ನು ನಿರ್ಬಂಧಿಸಿ ಜಿಲ್ಲಾಧಿಕಾರಿ ಫೆ.18ರಂದು ಹೊರಡಿಸಿರುವ ಆದೇಶ ಪ್ರಶ್ನಿಸಿ, ಕಾಸರಗೋಡಿನ ವಕೀಲ ಬಿ. ಸುಬ್ಬಯ್ಯ ಅವರು ಪಿಐಎಲ್​ ಸಲ್ಲಿಸಿದ್ದರು. ಈ ಅರ್ಜಿ ವಿಚಾರಣೆ ನಡೆಸಿರುವ ಹೈಕೋರ್ಟ್​ ಯಾವ ಕಾನೂನಿನ ಅಡಿ ನಿರ್ಬಂಧಿಸಿದ್ದೀರಿ ಎಂದು ಪ್ರಶ್ನಿಸುವ ಮೂಲಕ ರಾಜ್ಯ ಸರ್ಕಾರದ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿತು.

High Court ask state government
ಸರ್ಕಾರದ ವಿರುದ್ಧ ಹೈಕೋರ್ಟ್ ಅಸಮಾಧಾನ

By

Published : Mar 9, 2021, 6:41 PM IST

ಬೆಂಗಳೂರು:ಕೇರಳದ ಕಾಸರಗೋಡು ಹಾಗೂ ರಾಜ್ಯದ ದಕ್ಷಿಣ ಕನ್ನಡ ಜಿಲ್ಲೆ ನಡುವಿನ ಸಂಚಾರವನ್ನು ಯಾವ ಕಾನೂನಿನಡಿ ನಿರ್ಬಂಧಿಸಿದ್ದೀರಿ ಎಂದು ಪ್ರಶ್ನಿಸುವ ಮೂಲಕ ರಾಜ್ಯ ಸರ್ಕಾರದ ವಿರುದ್ಧ ಹೈಕೋರ್ಟ್​ ಅಸಮಾಧಾನ ವ್ಯಕ್ತಪಡಿಸಿದೆ. ಅಲ್ಲದೇ ಗಡಿಯಲ್ಲಿ ಆರ್​ಟಿಪಿಸಿಆರ್ ಪರೀಕ್ಷಾ ವರದಿ ಪರಿಶೀಲಿಸಿ ಸಂಚಾರಕ್ಕೆ ಅನುವು ಮಾಡಿಕೊಡಲು ಸೂಕ್ತ ಕ್ರಮ ಜರುಗಿಸುವಂತೆ ನಿರ್ದೇಶಿಸಿದೆ.

ಗಡಿ ಸಂಚಾರ ನಿರ್ಬಂಧಿಸಿ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಫೆ.18ರಂದು ಹೊರಡಿಸಿರುವ ಆದೇಶ ಪ್ರಶ್ನಿಸಿ ಕಾಸರಗೋಡಿನ ವಕೀಲ ಬಿ. ಸುಬ್ಬಯ್ಯ ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಇಂದು ಮುಖ್ಯ ನ್ಯಾಯಮೂರ್ತಿ ಎ.ಎಸ್ ಓಕಾ ನೇತೃತ್ವದ ವಿಭಾಗೀಯ ಪೀಠ ವಿಚಾರಣೆ ನಡೆಸಿತು.

ಈ ವೇಳೆ ಸರ್ಕಾರದ ಪರ ವಕೀಲರು ಪೀಠಕ್ಕೆ ಮಾಹಿತಿ ನೀಡಿ, ಗಡಿ ಸಂಚಾರಕ್ಕೆ ಸಂಬಂಧಿಸಿದಂತೆ ಹೊರಡಿಸಿರುವ ಆದೇಶದಲ್ಲಿ ಯಾವುದೇ ಬದಲಾವಣೆ ಮಾಡಿಲ್ಲ ಎಂದು ತಿಳಿಸಿದರು. ಇದಕ್ಕೆ ತೀವ್ರ ಅಸಮಾಧಾನ ವ್ಯಕ್ತಪಡಿಸಿದ ಪೀಠ, ಯಾವ ಕಾನೂನಿನ ಅಡಿಯಲ್ಲಿ ಇಂತಹ ನಿರ್ಬಂಧ ವಿಧಿಸಿದ್ದೀರಿ. ನಿಮ್ಮ ನಿರ್ಬಂಧ ಕೇಂದ್ರದ ಕೋವಿಡ್ ಮಾರ್ಗಸೂಚಿಗಳಿಗೆ ವಿರುದ್ಧವಾಗಿದೆ ಎಂದು ಬೇಸರ ವ್ಯಕ್ತಪಡಿಸಿತು.

ಓದಿ:ಯಲಹಂಕ ವಿಭಾಗದ ಜ್ಯೂ.ಇಂಜಿನಿಯರ್ ಮನೆ ಮೇಲೆ ಎಸಿಬಿ ದಾಳಿ: ಮುಂದುವರೆದ ಶೋಧ

ಅರ್ಜಿದಾರರ ಪರ ವಕೀಲರು ಪೀಠಕ್ಕೆ ಮಾಹಿತಿ ನೀಡಿ, ಕೇರಳದಿಂದ ಕರ್ನಾಟಕದ ಜಿಲ್ಲೆಗಳನ್ನು ಪ್ರವೇಶಿಸಲು ಒಟ್ಟು 25 ರಸ್ತೆಗಳಿವೆ. ಇತರೆ ಜಿಲ್ಲೆಗಳ ನಡುವೆ ಸಂಚಾರಕ್ಕೆ ಯಾವುದೇ ಅಡ್ಡಿಯಿಲ್ಲ. ಆದರೆ ಕಾಸರಗೋಡಿನಿಂದ ದಕ್ಷಿಣ ಕನ್ನಡಕ್ಕೆ ಸಂಪರ್ಕ ಕಲ್ಪಿಸುವ ನಾಲ್ಕು ರಸ್ತೆಗಳಲ್ಲಿ ಇಂತಹ ನಿರ್ಬಂಧ ವಿಧಿಸಲಾಗಿದೆ. ಇದರಿಂದಾಗಿ ಜನರ ಸಂಚಾರಕ್ಕೆ ಭಾರಿ ತೊಂದರೆಯಾಗುತ್ತಿದೆ ಎಂದು ವಿವರಿಸಿದರು.

ಇದಕ್ಕೆ ಪ್ರತಿಕ್ರಿಯಿಸಿದ ಪೀಠ, ರಾಜ್ಯದ ಇತರೆ ಜಿಲ್ಲೆಗಳಲ್ಲಿ ಇಲ್ಲದ ಸಂಚಾರ ನಿರ್ಬಂಧವನ್ನು ಒಂದು ಜಿಲ್ಲೆಯ ಕೆಲವೇ ರಸ್ತೆಗಳಲ್ಲಿ ಜಾರಿ ಮಾಡಿರುವುದು ಹಾಸ್ಯಾಸ್ಪದವಾಗಿ ಕಾಣುತ್ತದೆ. ಹೀಗಾಗಿ ಯಾವ ನಿಯಮಗಳ ಅಡಿ ಇಂತಹ ನಿರ್ಬಂಧ ವಿಧಿಸಿದ್ದೀರಿ ಎಂಬುದನ್ನು ಸ್ಪಷ್ಟಪಡಿಸಿ ಪ್ರಮಾಣ ಪತ್ರ ಸಲ್ಲಿಸಿ ಎಂದು ದಕ್ಷಿಣ ಕನ್ನಡ ಜಿಲ್ಲಾಧಿಕಾರಿಗೆ ತಾಕೀತು ಮಾಡಿ, ವಿಚಾರಣೆಯನ್ನು ಮಾ.18ಕ್ಕೆ ಮುಂದೂಡಿತು.

ಪ್ರಕರಣದ ಹಿನ್ನೆಲೆ:ಕೋವಿಡ್ ಹಿನ್ನೆಲೆ ಕೇರಳದ ಕಾಸರಗೋಡು ಜಿಲ್ಲೆಯಿಂದ ದಕ್ಷಿಣ ಕನ್ನಡ ಜಿಲ್ಲೆಗೆ ಸಾರ್ವಜನಿಕರ ಸಂಚಾರ ನಿರ್ಬಂಧಿಸಿ ಫೆ.18ರಂದು ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದಾರೆ. ಇದರಿಂದ ಕಾಲೇಜು-ಶಾಲೆ, ವೈದ್ಯಕೀಯ ಸೇವೆಗಳು ಮತ್ತು ವಾಣಿಜ್ಯ ಉದ್ದೇಶಗಳಿಗೆ ನಿತ್ಯ ದಕ್ಷಿಣ ಕನ್ನಡದ ಜಿಲ್ಲೆಯ ಸುಳ್ಯ, ಪುತ್ತೂರು, ಮಂಗಳೂರು ಮತ್ತು ಕೊಡಗು ಮತ್ತಿತರ ಪ್ರದೇಶಗಳಲ್ಲಿ ಸಂಚಾರ ಮಾಡುವ ಕೇರಳ-ಕರ್ನಾಟಕ ಗಡಿಭಾಗದ 80 ಸಾವಿರಕ್ಕೂ ಅಧಿಕ ಜನರಿಗೆ ತೊಂದರೆಯಾಗುತ್ತಿದೆ. ಆದ್ದರಿಂದ ಜಿಲ್ಲಾಧಿಕಾರಿ ಆದೇಶ ರದ್ದುಪಡಿಸಬೇಕು ಎಂದು ಅರ್ಜಿದಾರರು ಕೋರಿದ್ದಾರೆ.

ABOUT THE AUTHOR

...view details