ಬೆಂಗಳೂರು :ರಾಜ್ಯದಲ್ಲಿ ಮೈತ್ರಿ ಸರಕಾರ ಅಸ್ಥಿರಗೊಳಿಸುವ ಮೂಲಕ ಬಿಜೆಪಿಯು ದೇಶದಲ್ಲಿ ಅನೈತಿಕ ರಾಜಕಾರಣಕ್ಕೆ ಹೊಸ ಭಾಷ್ಯ ಬರೆದಿರುವುದು ಅತ್ಯಂತ ನೋವಿನ ಹಾಗೂ ಜಿಗುಪ್ಸೆ ತರುವ ಸಂಗತಿ ಎಂದು ಮುಖ್ಯಮಂತ್ರಿ ಕುಮಾರಸ್ವಾಮಿ ತಿಳಿಸಿದ್ದಾರೆ.
ಆಡಳಿತದಲ್ಲಿರುವ ಜೆಡಿಎಸ್ - ಕಾಂಗ್ರೆಸ್ ಸಮ್ಮಿಶ್ರ ಸರಕಾರ ಉರುಳಿಸಲು ಬಿಜೆಪಿ ನಡೆಸುತ್ತಿರುವ ರಾಜಕೀಯ ಚಟುವಟಿಕೆಗಳನ್ನು ಖಂಡಿಸಿ ಮಾಧ್ಯಮಗಳಿಗೆ ಬಿಡುಗಡೆ ಮಾಡಿರುವ ಹೇಳಿಕೆಯಲ್ಲಿ ಬಿಜೆಪಿ ವಿರುದ್ಧ ಸಿಎಂ ಹರಿಹಾಯ್ದಿದ್ದಾರೆ. ಆಡಳಿತಾರೂಢ ಜೆಡಿಎಸ್ ಮತ್ತು ಕಾಂಗ್ರೆಸ್ ಪಕ್ಷಗಳ ಶಾಸಕರನ್ನು ಕರೆದೊಯ್ದು ಬಿಜೆಪಿಯು ಪ್ರಜಾಪ್ರಭುತ್ವದ ಅಣಕವಾಡಿದೆ. ಬಿಜೆಪಿ ಮುಖಂಡರು, ಕಾರ್ಯಕರ್ತರು ವಿಶೇಷ ವಿಮಾನಗಳಲ್ಲಿ ನಮ್ಮ ಶಾಸಕರೊಂದಿಗೆ ತೆರಳಿರುವುದು ಮಾಧ್ಯಮಗಳಿಂದ ಸ್ಪಷ್ಟವಾಗಿದೆ. ಅನೈತಿಕ ಹಾಗೂ ಕಾನೂನು ಬಾಹಿರ ವಿಧಾನಗಳಿಂದ ಅಧಿಕಾರಕ್ಕೆ ಬರಲು ಹಾತೊರೆಯುತ್ತಿರುವ ಬಿಜೆಪಿಯು, ಈ ಎಲ್ಲ ಬೆಳವಣಿಗೆಗಳ ನಡುವೆ, ನಾನು ಕೂಡಲೇ ರಾಜೀನಾಮೆ ನೀಡಬೇಕೆಂದು ಒತ್ತಾಯಿಸುತ್ತಿದೆ.ವಿಶ್ವಾಸ ನಿಲುವಳಿಯನ್ನು ಮತಕ್ಕೆ ಹಾಕುವಂತೆ ರಾಜಭವನದ ಮೂಲಕ ಗಡುವುಗಳನ್ನೂ ನೀಡಿದೆ ಎಂದು ಆರೋಪಿಸಿದ್ದಾರೆ.
ಅಧಿಕಾರಕ್ಕೆ ಅಂಟಿಕೊಳ್ಳುವ ಉದ್ದೇಶ ನಾನು ಹೊಂದಿಲ್ಲ ಎಂಬುದನ್ನು ಮತ್ತೊಮ್ಮೆ ಸ್ಪಷ್ಟಪಡಿಸ ಬಯಸುತ್ತೇನೆ. ವಿಶ್ವಾಸಮತ ಕುರಿತು ಸುದೀರ್ಘ ಚರ್ಚೆಗೆ ಸಮಯ ಕೋರಿರುವುದರ ಹಿಂದೆ ನನ್ನ ಉದ್ದೇಶವಿರುವುದು ಒಂದೇ- ಬಿಜೆಪಿಯು ನೈತಿಕತೆಯ ಕುರಿತು ಮಾತನಾಡುತ್ತಲೇ, ಪ್ರಜಾಪ್ರಭುತ್ವ ಹಾಗೂ ಸಂವಿಧಾನದ ಮೂಲತತ್ವ, ಆಶಯಗಳನ್ನೇ ಬುಡಮೇಲು ಮಾಡಲು ಹೊರಟಿರುವುದರ ಬಗ್ಗೆ ಇಡೀ ದೇಶಕ್ಕೆ ಅರಿವಾಗಬೇಕು ಎಂದು ಹೇಳಿದ್ದಾರೆ
ಈ ಸಂದರ್ಭದಲ್ಲಿ, ನಮ್ಮಿಂದ ದೂರ ಹೋಗಿರುವ ಶಾಸಕರು ಹಿಂದಿರುಗಿ, ಅಧಿವೇಶನದಲ್ಲಿ ಪಾಲ್ಗೊಳ್ಳುವಂತೆ ಮನವಿ ಮಾಡುತ್ತೇನೆ. ಬಿಜೆಪಿಯು ಪ್ರಜಾಪ್ರಭುತ್ವದ ಪಾವಿತ್ರ್ಯತೆಯನ್ನು ಹೇಗೆ ಹಾಳುಗೆಡವಿದೆ ಎಂಬುದರ ಕುರಿತು ಸದನದಲ್ಲಿ ವಿವರವಾಗಿ ಚರ್ಚಿಸೋಣ ಎಂದು ಭಿನ್ನಮತೀಯ ಶಾಸಕರಿಗೆ ಕರೆ ನೀಡಿದ್ದಾರೆ.