ಬೆಂಗಳೂರು :ಭದ್ರಾವತಿಯಲ್ಲಿ ಶನಿವಾರ RAF ಘಟಕಕ್ಕೆ ಕೇಂದ್ರ ಗೃಹಸಚಿವರಾದ ಅಮಿತ್ ಶಾ ಅವರು ಶಂಕುಸ್ಥಾಪನೆ ನೆರವೇರಿಸಿದ್ರು. ಈ ಸಮಾರಂಭದಲ್ಲಿ ಕನ್ನಡಕ್ಕೆ ಅವಮಾನ ಮಾಡಲಾಗಿದೆ ಎಂದು ಮಾಜಿ ಸಿಎಂ ಎಚ್.ಡಿ. ಕುಮಾರಸ್ವಾಮಿ ಕಿಡಿಕಾರಿದ್ದಾರೆ.
ಇದಕ್ಕೆ ಸಂಬಂಧಿಸಿದಂತೆ ಸರಣಿ ಟ್ವೀಟ್ ಮಾಡಿರುವ ಅವರು, ಅಡಿಗಲ್ಲು ಫಲಕಗಳು ಹಿಂದಿ ಮತ್ತು ಆಂಗ್ಲಭಾಷೆಯಲ್ಲಿವೆ. ಇಲ್ಲಿ ಕನ್ನಡದ ಅವಗಣನೆ ನಿಚ್ಚಳವಾಗಿ ಕಾಣುತ್ತದೆ. ಗೃಹ ಸಚಿವರೆ ತ್ರಿಭಾಷಾ ಸೂತ್ರವನ್ನು ಧಿಕ್ಕರಿಸಿರುವುದು ಕನ್ನಡಕ್ಕೆ, ಕನ್ನಡಿಗರಿಗೆ ಮಾಡಿದ ಅಗೌರವ.
ಈ ಸಂದರ್ಭದಲ್ಲಿ ರಾಜ್ಯದ ಮುಖ್ಯಮಂತ್ರಿಗಳು, ಉಪಮುಖ್ಯಮಂತ್ರಿಗಳು, ನಾಡು-ನುಡಿಯ ಘನತೆ ಮರೆತದ್ದು ಅತ್ಯಂತ ಖಂಡನೀಯ ಎಂದಿದ್ದಾರೆ. ಹಿಂದಿ-ಆಂಗ್ಲ ಭಾಷೆಯ ನಿಷ್ಠ ಧೋರಣೆಯಲ್ಲಿ ಕನ್ನಡ ಭಾಷೆ ಅವಗಣನೆ ಮಾಡಿರುವ ಅಮಿತ್ ಶಾ ಅವರ ಧೋರಣೆ ಕನ್ನಡ ವಿರೋಧಿತನ ತೋರಿಸುತ್ತದೆ. ಇದು ಕನ್ನಡಿಗರ ಸ್ವಾಭಿಮಾನಕ್ಕೆ ಮಾಡಿದ ಅವಮಾನ ಎಂದು ಹೆಚ್‌ಡಿಕೆ ಟ್ವೀಟ್ ಮಾಡಿದ್ದಾರೆ.
ಓದಿ:ಕೆಲ ಹೊತ್ತಲ್ಲೇ ಪ್ರವಾಸಿ ಮಂದಿರಕ್ಕೆ ಅಮಿತ್ ಶಾ ಆಗಮನ : ಅತೃಪ್ತರ ದೌಡು
ನಾಡು-ನುಡಿಯ ಘನತೆಗೆ ಚ್ಯುತಿ ಬಂದಾಗ ಸಹಿಸಿಕೊಳ್ಳುವವರಿಗೆ ಈ ರಾಜ್ಯದ ಆಡಳಿತ ನಡೆಸುವ ಅರ್ಹತೆ ಇಲ್ಲ. ಕೇಂದ್ರದ ಗೃಹಸಚಿವರು, ಮುಖ್ಯಮಂತ್ರಿ, ಉಪಮುಖ್ಯಮಂತ್ರಿಗಳ ನಡೆ ಕನ್ನಡಕ್ಕೆ ಬಗೆದ ದ್ರೋಹ ಎಂದು ಹೆಚ್‌ಡಿಕೆ ಟ್ವೀಟ್ ಮಾಡಿದ್ದಾರೆ.