ಬೆಂಗಳೂರು: ಐಟಿ ವೃತ್ತಿಪರರು ಮುಂದಿನ ಜುಲೈ 31ರವರೆಗೆ ಮನೆಯಿಂದಲೇ ಕೆಲಸ ಮಾಡಲು ಕೇಂದ್ರ ಸರ್ಕಾರ ಅನುಮತಿ ನೀಡಿದೆ. ಲಾಕ್ಡೌನ್ ನಿರ್ಬಂಧದಿಂದ ಮಾಹಿತಿ ತಂತ್ರಜ್ಞಾನ ಕ್ಷೇತ್ರದಲ್ಲಾಗಿರುವ ಸಮಸ್ಯೆಗಳ ಕುರಿತಂತೆ ಕೇಂದ್ರ ಐಟಿ ಮತ್ತು ದೂರಸಂಪರ್ಕ ಖಾತೆ ಸಚಿವ ರವಿಶಂಕರ್ ಪ್ರಸಾದ್ ಅವರು, ಎಲ್ಲಾ ರಾಜ್ಯಗಳ ಮಾಹಿತಿ ತಂತ್ರಜ್ಞಾನ ಸಚಿವರ ಜತೆ ವಿಡಿಯೋ ಕಾನ್ಫರೆನ್ಸ್ ನಡೆಸಿದ ವೇಳೆ ಈ ವಿಷಯ ಪ್ರಕಟಿಸಿದ್ದಾರೆ.
ಲಾಕ್ಡೌನ್ ಬಳಿಕ ರಾಜ್ಯ ಐಟಿ ವಲಯ ಎದುರಿಸುತ್ತಿರುವ ಸವಾಲುಗಳು, ಕಂಡುಕೊಂಡಿರುವ ಪರಿಹಾರಗಳು ಹಾಗೂ ರಾಜ್ಯ ಸರ್ಕಾರ ಕೈಗೊಂಡಿರುವ ಪರಿಹಾರ ಕ್ರಮಗಳ ಕುರಿತು ಕೇಂದ್ರ ಸಚಿವರಿಗೆ ವಿವರಿಸಿದ ಐಟಿಬಿಟಿ ಸಚಿವರಾಗಿರುವ ಡಿಸಿಎಂ ಡಾ. ಅಶ್ವತ್ಥ್ ನಾರಾಯಣ, ರಾಜ್ಯದ ಐಟಿ ವೃತ್ತಿ ಪರರಿಗೆ ಮುಂದಿನ ವರ್ಷ ಮಾರ್ಚ್ವರೆಗೂ ಮನೆಯಿಂದಲೇ ಕೆಲಸ ಮಾಡಲು ಅವಕಾಶ ಕಲ್ಪಿಸಬೇಕೆಂದು ಕೋರಿದರು.
ಈ ಮನವಿಗೆ ಸ್ಪಂದಿಸಿದ ಕೇಂದ್ರ ಸಚಿವರು, ಸದ್ಯ ಜುಲೈ 31ರವರೆಗೆ ವರ್ಕ್ ಫ್ರಾಮ್ ಹೋಂ ಸೌಲಭ್ಯ ವಿಸ್ತರಣೆ ಮಾಡಲಾಗುವುದು. ಪರಿಸ್ಥಿತಿ ನೋಡಿಕೊಂಡು ನಂತರ ಮುಂದಿನ ನಿರ್ಧಾರ ಕೈಗೊಳ್ಳಲಾಗುವುದು ಎಂದು ಹೇಳಿದರು. ಐಟಿ ವಲಯ ಸದ್ಯ ಹಲವಾರು ಸಂಕಷ್ಟಗಳನ್ನು ಎದುರಿಸುತ್ತಿದ್ದು, ರಾಜ್ಯದ ಐಟಿ ವೃತ್ತಿಪರರ ಜತೆ ಪ್ರತ್ಯೇಕ ವಿಡಿಯೋ ಕಾನ್ಫರೆನ್ಸ್ ನಡೆಸಬೇಕೆಂಬ ಅಶ್ವತ್ಥ್ ನಾರಾಯಣ ಕೋರಿಕೆಗೂ ಸಕಾರಾತ್ಮಕವಾಗಿ ಸ್ಪಂದಿಸಿದ ರವಿ ಶಂಕರ್ ಪ್ರಸಾದ್, ಶೀಘ್ರದಲ್ಲೇ ವೀಡಿಯೋ ಕಾನ್ಫರೆನ್ಸ್ ನಡೆಸುವ ಭರವಸೆ ನೀಡಿದ್ರು.
ಕಾರ್ಯತಂತ್ರ ಸಮಿತಿ
ಕೋವಿಡ್ನಂಥ ಪರಿಸ್ಥಿತಿ ಎದುರಾದಾಗ ಐಟಿ ಹಾಗೂ ಸಂಬಂಧಿತ ವಲಯಗಳು ಯಾವ ರೀತಿ ಕಾರ್ಯ ನಿರ್ವಹಿಸಬೇಕು. ವಿಪತ್ತಿನ ಸಂದರ್ಭದಲ್ಲಿ ಅನುಸರಿಸಬೇಕಾದ ಮಾರ್ಗಸೂಚಿ, ಪರಿಹಾರ ಕ್ರಮಗಳ ಬಗ್ಗೆ ರೂಪುರೇಷೆ ಸಿದ್ಧಪಡಿಸಲು ರಾಷ್ಟ್ರ ಮಟ್ಟದ ಕಾರ್ಯತಂತ್ರ ಸಮಿತಿ ರಚಿಸಲಾಗುವುದು ಎಂದು ಕೇಂದ್ರ ಸಚಿವರು ತಿಳಿಸಿದರು.
ಐಟಿ ವಲಯ ಮಾತ್ರವಲ್ಲದೆ, ಎಲ್ಲಾ ರಾಜ್ಯಗಳು ಅನ್ವೇಷಣೆ, ಸ್ಟಾರ್ಟ್ಅಪ್ಗಳ ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ ನೀಡಬೇಕು. ಇ-ಆಡಳಿತ, ಇ-ಪಾಸ್ಗಳ ಪರಿಣಾಮಕಾರಿ ಜಾರಿಗೆ ಗಮನ ಹರಿಸಲಾಗುವುದು. ಜತೆಗೆ ಕೋವಿಡ್ ಸಮಸ್ಯೆ ಎದುರಾದಾಗಿನಿಂದ ಬಹುತೇಕ ಎಲ್ಲಾ ವಲಯಗಳ ಕೆಲಸದ ರೀತಿ ನೀತಿ ಬದಲಾಗಿದ್ದು, ಶೇ.80ರಷ್ಟು ಐಟಿ ವೃತ್ತಿಪರರು ಮನೆಯಿಂದಲೇ ಕೆಲಸ ಮಾಡುತ್ತಿದ್ದಾರೆ. ಬಹುತೇಕ ಎಲ್ಲ ಕೆಲಸ ಕಾರ್ಯಗಳು ಆನ್ಲೈನ್ ಮೂಲಕವೇ ನಡೆಯುತ್ತಿವೆ. ಇದಕ್ಕೆ ಅನುಕೂಲವಾಗುವಂತೆ ಭಾರತ್ ನೆಟ್ ಯೋಜನೆ ಮೂಲಕ ದೇಶದ ಮೂಲೆಮೂಲೆಗೂ ಇಂಟರ್ನೆಟ್ ಸಂಪರ್ಕ ಜಾಲ ಬಲಪಡಿಸಲಾಗುತ್ತದೆ ಎಂದು ಸಚಿವ ರವಿ ಶಂಕರ್ ಪ್ರಸಾದ್ ಹೇಳಿದರು.