ನವದೆಹಲಿ :ಕೊರೊನಾದಂತಹ ಸಾಂಕ್ರಾಮಿಕ ರೋಗವು ತಂದೊಡ್ಡಿರುವ ಆರ್ಥಿಕ ಸಂಕಷ್ಟದ ಮಧ್ಯೆಯೂ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಅತ್ಯುತ್ತಮ ಬಜೆಟ್ ಮಂಡಿಸಿದ್ದಾರೆ ಎಂದು ಕೇಂದ್ರ ರಾಸಾಯನಿಕ ಹಾಗೂ ರಸಗೊಬ್ಬರ ಸಚಿವ ಡಿ ವಿ ಸದಾನಂದಗೌಡ ಅವರು ತಿಳಿಸಿದ್ದಾರೆ.
ಬಜೆಟ್ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಆಯವ್ಯಯವು ತಾತ್ಕಾಲಿಕ ಅವಶ್ಯಕತೆಗಳ ಜೊತೆಗೇ ದೇಶವನ್ನು ಅಭಿವೃದ್ಧಿ ಪಥದ ಮೇಲೆ ಕೊಂಡೊಯ್ಯುವ ದೂರದೃಷ್ಟಿ ಪ್ರಸ್ತಾವನೆಗಳನ್ನು ಒಳಗೊಂಡಿದೆ.
ಕೈಗಾರಿಕೆ ಸೇರಿದಂತೆ ಎಲ್ಲ ವಲಯಗಳನ್ನೂ ಸ್ವಾವಲಂಬಿಯಾಗಿ ರೂಪಿಸುವ “ಆತ್ಮನಿರ್ಭರ್ ಬಜೆಟ್” ಇದಾಗಿದೆ. ಹಣಕಾಸು ಸಚಿವರಿಗೂ ಮತ್ತು ಅವರಿಗೆ ಮಾರ್ಗದರ್ಶನ ಮಾಡಿದ ಪ್ರಧಾನ ಮಂತ್ರಿ ನರೇಂದ್ರ ಮೋದಿಯವರಿಗೆ ಅಭಿನಂದನೆಗಳನ್ನ ಸಲ್ಲಿಸುತ್ತೇನೆ ಎಂದರು.
ಮೂಲಸೌಕರ್ಯಗಳಿಗೆ ಹೆಚ್ಚಿನ ಆದ್ಯತೆ ನೀಡಲಾಗಿದೆ. 5.54 ಲಕ್ಷ ಕೋಟಿ ರೂಪಾಯಿ ಕ್ಯಾಪಿಟಲ್ ಎಕ್ಸ್ಪೆಂಡಿಚರ್ ಮಾಡಲಾಗುತ್ತಿದೆ. ಕಳೆದ ವರ್ಷಕ್ಕೆ ಹೋಲಿಸಿದರೆ ಇದು ಶೇಕಡಾ 34ರಷ್ಟು ಜಾಸ್ತಿ. ಯಾವುದೇ ಒಂದು ದೇಶದ ಅಭಿವೃದ್ಧಿಯಲ್ಲಿ ರಸ್ತೆ ಹಾಗೂ ರೈಲ್ವೆ ಸಂಪರ್ಕ ಮಹತ್ವದ ಪಾತ್ರ ವಹಿಸುತ್ತದೆ.
ಹಾಗಾಗಿ, ಈ ಇಲಾಖೆಗೆ ಹೆಚ್ಚಿನ ಅನುದಾನ ನೀಡಲಾಗಿದೆ. ಭೂಸಾರಿಗೆ ಇಲಾಖೆಗೆ 1.18 ಲಕ್ಷ ಕೋಟಿ ರೂಪಾಯಿ ಒದಗಿಸಲಾಗಿದೆ. ಹಾಗೆಯೇ ರೈಲ್ವೆ ಇಲಾಖೆಗೆ 1.10 ಲಕ್ಷ ಕೋಟಿ ರೂಪಾಯಿ ಅನುದಾನ ನೀಡಲಾಗಿದೆ. ಪ್ರತ್ಯೇಕ ಸರಕು ಸಾಗಣೆ ಕಾರಿಡಾರುಗಳ ಅಭಿವೃದ್ಧಿ ಪಡಿಸಲಾಗುತ್ತಿದೆ. ಹಾಗೆಯೇ, ಎಲ್ಲ ರೈಲು ಮಾರ್ಗಗಳನ್ನು ವಿದ್ಯುದ್ಧೀಕರಣ ಮಾಡಲು ಆಯವ್ಯಯದಲ್ಲಿ ಪ್ರಸ್ತಾವನೆಗಳು ಇವೆ ಎಂದು ಸದಾನಂದ ಗೌಡ ತಿಳಿಸಿದರು.
ದೇಶದ 13 ಉತ್ಪಾದನಾ ವಲಯದಲ್ಲಿ ಸ್ವಾವಲಂಬನೆ ಸಾಧಿಸಲು 1.97 ಕೋಟಿ ರೂಪಾಯಿ ಉತ್ಪಾದನಾ ಆಧಾರಿತ ಪ್ರೋತ್ಸಾಹಧನ ಘೋಷಿಸಲಾಗಿದೆ. ಆರೋಗ್ಯ ಕ್ಷೇತ್ರದಲ್ಲಿ ಕೂಡ ಸಂಪೂರ್ಣ ಸ್ವಾವಲಂಬನೆ ಸಾಧಿಸಲು ಅನೇಕ ಯೋಜನೆಗಳನ್ನು ಘೋಷಿಸಲಾಗಿದೆ.
ಈ ಸಲ ಆರೋಗ್ಯ ಇಲಾಖೆಯ ಅನುದಾನ 2.24 ಕೋಟಿ ರೂಪಾಯಿ. ಕಳೆದ ವರ್ಷಕ್ಕೆ ಹೋಲಿಸಿದ್ರೆ ಇದು ಶೇ.137ರಷ್ಟು ಹೆಚ್ಚು. ಆರೋಗ್ಯ ವಲಯದ ವಿಶೇಷ ಯೋಜನೆಗಳಿಗಾಗಿ 64,180 ಕೋಟಿ ರೂ ಒದಗಿಸಲಾಗಿದೆ ಎಂದರು. ಎಲ್ಲರಿಗೂ ಕೋವಿಡ್ ಲಸಿಕೆ ಒದಗಿಸಲು ಮೋದಿ ನೇತೃತ್ವದ ನಮ್ಮ ಸರ್ಕಾರವು ಕಟಿ ಬದ್ಧವಾಗಿದೆ. ಕೋವಿಡ್ ಲಸಿಕಾ ಅಭಿಯಾನಕ್ಕಾಗಿ ಈ ವರ್ಷ 35,000 ಕೋಟಿ ರೂಪಾಯಿ ಒದಗಿಸಲಾಗಿದೆ. ಇನ್ನೂ ಹೆಚ್ಚಿನ ಅನುದಾನದ ಅವಶ್ಯಕತೆ ಉಂಟಾದ್ರೆ ಅದನ್ನೂ ಒದಗಿಸಲಾಗುವುದು ಎಂದು ಹಣಕಾಸು ಸಚಿವರು ಭರವಸೆ ನೀಡಿದ್ದಾರೆ ಎಂದರು.