ಬೆಂಗಳೂರು : ನಾಡಪ್ರಭು ಕೆಂಪೇಗೌಡರ ನಂತರ ಬೆಂಗಳೂರು ಅಭಿವೃದ್ಧಿಗೆ ಮಹತ್ತರ ಕೊಡುಗೆ ನೀಡಿದ, ಕನ್ನಡ ನೆಲದ ಪ್ರಧಾನಿ ಆಗಿದ್ದ ಏಕೈಕ ಕನ್ನಡಿಗ ಹೆಚ್.ಡಿ.ದೇವೇಗೌಡ ಅವರನ್ನು ಕೆಂಪೇಗೌಡರ ಪ್ರತಿಮೆ ಲೋಕಾರ್ಪಣೆ ಕಾರ್ಯಕ್ರಮಕ್ಕೆ ರಾಜ್ಯ ಬಿಜೆಪಿ ಸರಕಾರವು ಆಹ್ವಾನಿಸದಿರುವುದು ಕನ್ನಡಿಗರಿಗೆ ಮಾಡಿದ ಅಪಮಾನ ಎಂದು ಜೆಡಿಎಸ್ ಆಕ್ರೋಶ ವ್ಯಕ್ತಪಡಿಸಿದೆ.
ದೇವೆಗೌಡರನ್ನುಆಹ್ವಾನಿಸದಿದ್ದಕ್ಕೆ ಆಕ್ಷೇಪ:ನಾಡಪ್ರಭುಗಳ ಪ್ರತಿಮೆ ಸ್ಥಾಪನೆಯ ಕಾಮಗಾರಿಗೆ ಅಡಿಗಲ್ಲು ಹಾಕುವ ಕಾರ್ಯಕ್ರಮಕ್ಕೆ ಮಾಜಿ ಪ್ರಧಾನಿಗಳನ್ನು ಆಹ್ವಾನಿಸಿದ ಬಿಜೆಪಿ ಸರಕಾರ, ಪ್ರತಿಮೆ ಲೋಕಾರ್ಪಣೆ ಸಮಾರಂಭಕ್ಕೆ ಅದೇ ಪ್ರಧಾನಿಗಳಿಗೆ ಆಹ್ವಾನ ಮಾಡಲಿಲ್ಲ, ಯಾಕೆ? ಎಂದು ಜೆಡಿಎಸ್ ಟ್ವೀಟ್ ಮೂಲಕ ಪ್ರಶ್ನಿಸಿದೆ.
ಸ್ಥಳೀಯ ಮಟ್ಟದ ಕಾರ್ಯಕ್ರಮ ಆಗಿದ್ದಿದ್ದರೆ ಯಾರೂ ಪ್ರಶ್ನೆ ಮಾಡುತ್ತಿರಲಿಲ್ಲ. ಆದರೆ, ನಾಡಪ್ರಭುಗಳ ಪ್ರತಿಮೆ ಅನಾವರಣ ಕಾರ್ಯಕ್ರಮಕ್ಕೆ ಹೆಮ್ಮೆಯ ಮಾಜಿ ಪ್ರಧಾನಿಗಳನ್ನು ಅಧಿಕೃತವಾಗಿ ಕರೆಯಬೇಕಿತ್ತು. ಅವರ ಬಗ್ಗೆ ಅನಾದರ ತೋರಿದ್ದು ಕನ್ನಡಿಗರಿಗೆ ಅಪಾರ ನೋವುಂಟು ಮಾಡಿದೆ.
ಕನ್ನಡಿಗರಿಗೆ ಅಪಮಾನ:ರಾಜ್ಯ ಬಿಜೆಪಿ ಸರಕಾರ, ಬಿಜೆಪಿ ನಾಯಕರು ರಾಜಕೀಯ ಕಾರಣಕ್ಕಾಗಿ ಮಾಜಿ ಪ್ರಧಾನಿಗಳನ್ನು ಕಡೆಗಣಿಸಿದ್ದಾರೆ ಎನ್ನುವುದು ಎಲ್ಲರ ಭಾವನೆ. ಇದನ್ನು ಬಿಜೆಪಿ ಪಕ್ಷದ ಕಾರ್ಯಕ್ರಮದಂತೆ ನಡೆಸಿದ್ದು ಮಾಜಿ ಪ್ರಧಾನಿಗಳಿಗೆ ಮಾತ್ರವಲ್ಲ, ಸಮಸ್ತ ಕನ್ನಡಿಗರು ಹಾಗೂ ಸ್ವತಃ ನಾಡಪ್ರಭುಗಳಿಗೇ ಮಾಡಿದ ಅಪಮಾನ.