ಬೆಂಗಳೂರು:ವಿವಾದಿತ ವಿಡಿಯೋ ಪೋಸ್ಟ್ ಕುರಿತಂತೆ ಟ್ಟಿಟರ್ ಇಂಡಿಯಾ ವ್ಯವಸ್ಥಾಪಕ ನಿರ್ದೇಶಕ ಮನೀಶ್ ಮಹೇಶ್ವರಿ ಅವರಿಗೆ ವಿಚಾರಣೆಗೆ ಹಾಜರಾಗಲು ಸೂಚಿಸಿ ನೋಟಿಸ್ ಜಾರಿಗೊಳಿಸಿರುವ ಉತ್ತರ ಪ್ರದೇಶ ಪೊಲೀಸರ ಕ್ರಮ ಪ್ರಶ್ನಿಸಿ ಸಲ್ಲಿಸಿದ್ದ ಅರ್ಜಿ ವಿಚಾರಣೆ ಪೂರ್ಣಗೊಳಿಸಿರುವ ಹೈಕೋರ್ಟ್, ಜುಲೈ 13ರಂದು ಉಕ್ತಲೇಖನ (ಡಿಕ್ಟೇಷನ್) ನೀಡುವುದಾಗಿ ತಿಳಿಸಿದೆ.
ಪ್ರಕರಣದ ವಿಚಾರಣೆಗೆ ಹಾಜರಾಗುವಂತೆ ಗಾಜಿಯಾಬಾದ್ನ ಲೋನಿ ಬಾರ್ಡರ್ ಠಾಣೆ ಪೊಲೀಸರು ನೀಡಿರುವ ನೋಟಿಸ್ ರದ್ದು ಕೋರಿ ಟ್ವಿಟರ್ ಎಂಡಿ ಮನೀಶ್ ಮಹೇಶ್ವರಿ ಸಲ್ಲಿಸಿರುವ ಅರ್ಜಿಯನ್ನು ಇಂದು ನ್ಯಾ. ಜಿ. ನರೇಂದರ್ ಅವರಿದ್ದ ಏಕ ಸದಸ್ಯ ಪೀಠ ವಿಚಾರಣೆ ನಡೆಸಿತು. ಈ ವೇಳೆ ಯುಪಿ ಪೊಲೀಸರ ಪರ ವಾದ ಮಂಡಿಸಿದ ವಕೀಲ ಪಿ. ಪ್ರಸನ್ನ ಕುಮಾರ್ ಅವರು, ನೋಟಿಸ್ ನೀಡಿರುವ ಕ್ರಮವನ್ನು ಬಲವಾಗಿ ಸಮರ್ಥಿಸಿಕೊಂಡರು.
ಇದೇ ವೇಳೆ ಅರ್ಜಿದಾರ ಮನೀಶ್ ಮಹೇಶ್ವರಿ ಪರ ವಾದ ಮಂಡಿಸಿದ ಹಿರಿಯ ವಕೀಲ ಸಿವಿ ನಾಗೇಶ್, ಪೊಲೀಸರು ಆನ್ ಲೈನ್ ಬದಲು ಖುದ್ದು ಠಾಣೆಗೆ ಹಾಜರಾಗಿ ಹೇಳಿಕೆ ನೀಡಬೇಕೆನ್ನುತ್ತಿರುವ ಕ್ರಮಕ್ಕೆ ಆಕ್ಷೇಪಿಸಿದರು. ಸುದೀರ್ಘ ವಾದ- ಪ್ರತಿವಾದ ಆಲಿಸಿದ ಪೀಠ, ಜುಲೈ 13ರಂದು ಆದೇಶದ ಉಕ್ತಲೇಖನ ನೀಡುವುದಾಗಿ ತಿಳಿಸಿ, ವಿಚಾರಣೆ ಮುಂದೂಡಿತು.