ಬೆಂಗಳೂರು: ನಗರದಲ್ಲಿ ಟೋಯಿಂಗ್ ಕಿರಿಕಿರಿ ಸಂಬಂಧ ಗೃಹ ಸಚಿವ ಆರಗ ಜ್ಞಾನೇಂದ್ರ ಹಿರಿಯ ಪೊಲೀಸ್ ಅಧಿಕಾರಿಗಳ ಸಭೆ ನಡೆಸಿದರು.ವಿಕಾಸೌಧದಲ್ಲಿ ನಡೆದ ಸಭೆಯಲ್ಲಿ ರಾಜ್ಯ ಪೊಲೀಸ್ ಮಹಾನಿರ್ದೇಶಕ ಪ್ರವೀಣ್ ಸೂದ್, ಸಂಚಾರಿ ವಿಭಾಗದ ಜಂಟಿ ಆಯುಕ್ತ ರವಿಕಾಂತೇಗೌಡ ಮತ್ತಿತರ ಹಿರಿಯ ಅಧಿಕಾರಿಗಳು ಭಾಗವಹಿಸಿದ್ದರು.
ಸಭೆಯ ಬಳಿಕ ಮಾತನಾಡಿದ ಗೃಹ ಸಚಿವ ಆರಗ ಜ್ಞಾನೇಂದ್ರ, ಹೊಸ ಸರಳೀಕೃತ ವ್ಯವಸ್ಥೆ ಬರುವವರೆಗೆ ನಗರದಲ್ಲಿ ಟೋಯಿಂಗ್ ಸ್ಥಗಿತಗೊಳಿಸಲು ತೀರ್ಮಾನಿಸಲಾಗಿದೆ. ಪ್ರಸ್ತುತ ಟೋಯಿಂಗ್ನಿಂದ ಸಾರ್ವಜನಿಕರು ಎದುರಿಸುತ್ತಿರುವ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಕಂಡುಕೊಳ್ಳಲು ತೀರ್ಮಾನಿಸಲಾಗಿದೆ ಎಂದು ಮಾಹಿತಿ ನೀಡಿದರು.
ನಗರದಲ್ಲಿ ಸುಗಮ ವಾಹನಗಳ ಸಂಚಾರಕ್ಕೆ ನೆರವಾಗುವ ಹಾಗೂ ಸಾರ್ವಜನಿಕರು ಎದುರಿಸುತ್ತಿರುವ ಕಿರುಕುಳ ಸಮಸ್ಯೆ ನಿವಾರಿಸಲು ಸರ್ಕಾರ ಶೀಘ್ರದಲ್ಲಿ ಒಂದು ನಿರ್ಧಾರಕ್ಕೆ ಬರುತ್ತದೆ. ಈ ಸಂಬಂಧ ಪೂರ್ವಭಾವಿ ಚರ್ಚೆಯನ್ನು ಇಲಾಖೆಯ ಹಿರಿಯ ಅಧಿಕಾರಿಗಳೊಂದಿಗೆ ಒಂದು ಸುತ್ತಿನ ಚರ್ಚೆ ನಡೆಸಿದ್ದೇನೆ. ಚರ್ಚೆಯಾದ ವಿಷಯದ ಬಗ್ಗೆ ಮುಖ್ಯಮಂತ್ರಿ ಜೊತೆ ಸಮಾಲೋಚಿಸಿ, ಟೋಯಿಂಗ್ ಸಮಸ್ಯೆಗೆ ಶೀಘ್ರವೇ ಪರಿಹಾರ ಘೋಷಿಸಲಾಗುವುದು ಎಂದು ವಿವರಿಸಿದರು.