ಬೆಂಗಳೂರು: ಗ್ರಾಮ ಪಂಚಾಯಿತಿಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಕರ ವಸೂಲಿಗಾರರು ಮತ್ತು ಗುಮಾಸ್ತರುಗಳಿಗೆ ಬಡ್ತಿ ನೀಡಲು ಪ್ರಾಮಾಣಿಕ ಪ್ರಯತ್ನ ಮಾಡುತ್ತೇನೆ ಎಂದು ಗ್ರಾಮೀಣಾಭಿವೃದ್ದಿ ಮತ್ತು ಪಂಚಾಯತ್ ರಾಜ್ ಸಚಿವ ಕೆ.ಎಸ್.ಈಶ್ವರಪ್ಪ ವಿಧಾನಸಭೆಯಲ್ಲಿ ಇಂದು ತಿಳಿಸಿದ್ದಾರೆ.
ಪ್ರಶ್ನೋತ್ತರ ವೇಳೆ ಮಾಲೂರು ಶಾಸಕ ನಂಜೇಗೌಡ ಕೆ.ವೈ. ಅವರ ಪ್ರಶ್ನೆಗೆ ಉತ್ತರಿಸಿದ ಸಚಿವರು, ಗ್ರಾಮ ಪಂಚಾಯಿತಿಗಳಲ್ಲಿ ಜಿಲ್ಲಾ ಪಂಚಾಯಿತಿಯಿಂದ ಅನುಮೋದನೆಗೊಂಡ ಕರ ವಸೂಲಿಗಾರರು ಮತ್ತು ಗುಮಾಸ್ತರು ಹಲವು ವರ್ಷಗಳಿಂದ ಕಾರ್ಯನಿರ್ವಹಿಸುತ್ತಿದ್ದು, ಅವರಿಗೆ ಬಡ್ತಿ ನೀಡಬೇಕೆಂಬ ಬೇಡಿಕೆ ಇದೆ. ಕೋವಿಡ್ ಕಾರಣದಿಂದ ಸಾಧ್ಯವಾಗಿಲ್ಲ. ಇವರಿಗೆ ಅನುಕೂಲ ಮಾಡಿಕೊಡುವ ಪ್ರಾಮಾಣಿಕ ಪ್ರಯತ್ನ ಮಾಡುತ್ತೇನೆ ಎಂದರು.