ಬೆಂಗಳೂರು: ವಿದ್ಯಾಗಮದಡಿ, ವಠಾರ ಶಾಲೆ ಪದ್ಧತಿಯಿಂದಾಗಿ ಕಲಬುರಗಿ, ಹಾಗೂ ಬೆಳಗಾವಿಯ 34 ವಿದ್ಯಾರ್ಥಿಗಳಿಗೆ ಸೋಂಕು ತಗುಲಿದೆ ಎಂಬ ವಿಚಾರ ಚರ್ಚೆಯಾಗುತ್ತಿದ್ದಂತೆ, ವಿದ್ಯಾಗಮ ಕಾರ್ಯಕ್ರಮ ತಾತ್ಕಾಲಿಕವಾಗಿ ಸ್ಥಗಿತಗೊಳಿಸಲು ಶಿಕ್ಷಣ ಇಲಾಖೆಯ ಪ್ರಧಾನ ಕಾರ್ಯದರ್ಶಿಗೆ ಸೂಚನೆ ನೀಡಿದ್ದೇನೆ ಎಂದು ಶಿಕ್ಷಣ ಸಚಿವ ಸುರೇಶ್ ಕುಮಾರ್ ತಿಳಿಸಿದ್ದಾರೆ.
‘ವಿದ್ಯಾಗಮ’ ಕಾರ್ಯಕ್ರಮ ತಾತ್ಕಾಲಿಕ ಸ್ಥಗಿತ: ಸಚಿವ ಸುರೇಶ್ ಕುಮಾರ್ ಸ್ಪಷ್ಟನೆ
ವಿದ್ಯಾಗಮ ಯೋಜನೆಯಿಂದಾಗಿ ಶಿಕ್ಷಕರು ಹಾಗೂ ಮಕ್ಕಳಿಗೆ ಕೊರೊನಾ ಸೋಂಕು ದೃಢವಾಗಿರುವ ಕಾರಣದಿಂದ ತಾತ್ಕಾಲಿಕವಾಗಿ ಯೋಜನೆಯನ್ನು ಸ್ಥಗಿತಗೊಳಿಸಲಾಗಿದೆ ಎಂದು ಸಚಿವ ಸುರೇಶ್ ಕುಮಾರ್ ಮಾಹಿತಿ ನೀಡಿದ್ದಾರೆ.
ರಾಜ್ಯದಲ್ಲಿ ಜಾರಿಗೆ ತಂದಿರುವ ವಿದ್ಯಾಗಮ ಕಾರ್ಯಕ್ರಮದ ಕುರಿತು ಕೆಲವು ವಲಯಗಳಲ್ಲಿ ಅಭಿಪ್ರಾಯಗಳು ವ್ಯಕ್ತವಾಗಿರುವುದನ್ನು ಗಮನಿಸಿದ್ದೇನೆ. ವಿದ್ಯಾಗಮ ಸಮಾಜದ ಕೆಳಸ್ಥರದ, ಆರ್ಥಿಕವಾಗಿ ಹಿಂದುಳಿದಿರುವ ಕುಟುಂಬಗಳ ಮಕ್ಕಳ ಹಿತವನ್ನು ಗಮನದಲ್ಲಿ ಇಟ್ಟುಕೊಂಡು ಯೋಜಿಸಿರುವ ಕಾರ್ಯಕ್ರಮ ಇದಾಗಿದೆ.
ಆದರೂ ವಿವಿಧ ವಲಯಗಳಿಂದ ಪ್ರಕಟವಾಗುತ್ತಿರುವ ಕಾಳಜಿಗೆ ಮನ್ನಣೆ ಕೊಟ್ಟು ಶಿಕ್ಷಣ ಇಲಾಖೆ ಈ ಕುರಿತು ಸಂಗ್ರಹಿಸಲು ಉದ್ದೇಶಿಸಿರುವ ಜಿಲ್ಲಾವಾರು ಅಂಕಿ ಅಂಶಗಳ ಸ್ವೀಕಾರ ಹಾಗೂ ಅದರ ಸಮರ್ಪಕ ವಿಶ್ಲೇಷಣೆ ಪೂರ್ಣಗೊಳ್ಳುವವರೆಗೂ ವಿದ್ಯಾಗಮ ಕಾರ್ಯಕ್ರಮವನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲು ಶಿಕ್ಷಣ ಇಲಾಖೆಯ ಪ್ರಧಾನ ಕಾರ್ಯದರ್ಶಿಗಳಿಗೆ ನಿರ್ದೇಶನ ನೀಡಲಾಗಿದೆ ಎಂದು ಹೇಳಿದ್ದಾರೆ.