ಬೆಂಗಳೂರು :ವಿಜಯಪುರ ಮತ್ತು ಮುದ್ದೇಬಿಹಾಳದ ವಿವಿಧ ಪಕ್ಷಗಳ ಮುಖಂಡರು ತಮ್ಮ ಬೆಂಬಲಿಗರೊಂದಿಗೆ ಬಿಜೆಪಿ ಸೇರಿದ್ದಾರೆ. ನಗರದಲ್ಲಿರುವ ರಾಜ್ಯ ಬಿಜೆಪಿ ಕಾರ್ಯಾಲಯ ಜಗನ್ನಾಥ ಭವನದಲ್ಲಿಂದು ಜಿಲ್ಲಾ ಪಂಚಾಯತ್ ಮಾಜಿ ಸದಸ್ಯ ಮತ್ತು ಮುದ್ದೇಬಿಹಾಳ ವಿಧಾನಸಭಾ ಕ್ಷೇತ್ರದ 2018ರ ಪಕ್ಷೇತರ ಅಭ್ಯರ್ಥಿ ಗಂಗಾಧರ ನಾಡಗೌಡ, ವಿಜಯಪುರ ಜಿಲ್ಲಾ ಪಂಚಾಯತ್ ಮಾಜಿ ಉಪಾಧ್ಯಕ್ಷ ಕೆಂಚಪ್ಪ ಬಿರಾದಾರ್, ಕಾಂಗ್ರೆಸ್ ಮುಖಂಡ ಗುರುನಾಥ್ ಎಸ್.ದೇಶಮುಖ್, ಕಾಂಗ್ರೆಸ್ ಯುವ ಮುಖಂಡ ಸಂಗಮೇಶ್ ನಾಗೂರು ಬಿಜೆಪಿ ಸೇರ್ಪಡೆಗೊಂಡರು.
ರಾಜ್ಯ ಚುನಾವಣಾ ನಿರ್ವಹಣಾ ಸಮಿತಿ ಸಂಚಾಲಕರು ಮತ್ತು ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ, ಸಂಸದ ಪಿ.ಸಿ.ಮೋಹನ್, ಶಾಸಕ ಎ.ಹೆಚ್.ನಡಹಳ್ಳಿ, ಎಸ್‍ಸಿ ಮೋರ್ಚಾ ರಾಜ್ಯ ಅಧ್ಯಕ್ಷ ಮತ್ತು ವಿಧಾನಪರಿಷತ್ ಸದಸ್ಯ ಛಲವಾದಿ ನಾರಾಯಣಸ್ವಾಮಿ ಮತ್ತಿತರ ಮುಖಂಡರು ಪಕ್ಷಕ್ಕೆ ಸ್ವಾಗತಿಸಿದರು. ಇದೇ ಸಂದರ್ಭದಲ್ಲಿ ಪೌರ ಕಾರ್ಮಿಕರಾದ ಮುನಿಯಮ್ಮ, ಈಶ್ವರ್, ಅರುಣ್, ಭೂಮಿ, ಕಮಲ ಅವರನ್ನು ಸನ್ಮಾನಿಸಿ ಗೌರವಿಸಲಾಯಿತು. ಪೌರಕಾರ್ಮಿಕರು ಪಕ್ಷಕ್ಕೆ ಕೃತಜ್ಞತೆ ಸಲ್ಲಿಸಿದರು.
ಬಿಜೆಪಿ ಮಾಧ್ಯಮ ಕೇಂದ್ರದಲ್ಲಿ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಬಿಜೆಪಿ ರಾಜ್ಯ ಉಸ್ತುವಾರಿ ಅರುಣ್ ಸಿಂಗ್, ಕಾಂಗ್ರೆಸ್ ಪಕ್ಷ ಬಡವರು, ಶೋಷಿತರು ಮತ್ತು ವಂಚಿತರ ಅಭಿವೃದ್ಧಿ ಮಾಡಲಿಲ್ಲ. ಗರೀಬಿ ಹಠಾವೋ ಎಂದು ಹೇಳುತ್ತಲೇ ಬಂದು ಜನರನ್ನು ದಾರಿ ತಪ್ಪಿಸಿದೆ. ರಾಜ್ಯ ಬಿಜೆಪಿ ಸರ್ಕಾರ ಎಸ್‍ಸಿ ಎಸ್‍ಟಿ ಸಮುದಾಯಗಳಿಗೆ ಹೆಚ್ಚಿಸಿದ ಮೀಸಲಾತಿಯನ್ನು ಕಾಂಗ್ರೆಸ್ ರದ್ದುಪಡಿಸುವುದಾಗಿಯೂ ಹೇಳುತ್ತಿದೆ. ಆದರೆ ಪ್ರಧಾನಮಂತ್ರಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ಸರ್ಕಾರ ಬಡವರು, ಶೋಷಿತರು, ವಂಚಿತರನ್ನು ಒಟ್ಟಾಗಿ ಕೊಂಡೊಯ್ಯುತ್ತಿದ್ದು, ಜನಧನ್, ಪಿಎಂ ಆವಾಸ್, ಆಯುಷ್ಮಾನ್ ಭಾರತ್ ಸೇರಿದಂತೆ ಅನೇಕ ಯೋಜನೆಗಳಿಂದ ಬಡವರಿಗೆ ಪ್ರಯೋಜನವಾಗುತ್ತಿದೆ ಎಂದು ತಿಳಿಸಿದರು.
ಇದರೊಂದಿಗೆ ಪ್ರಧಾನಿ ಮೋದಿಯವರು ಕರ್ನಾಟಕಕ್ಕೆ ಅನೇಕ ಯೋಜನೆಗಳನ್ನು ಜಾರಿಗೊಳಿಸಿದ್ದು, ರಾಜ್ಯದಲ್ಲಿ 39 ಲಕ್ಷ ಮನೆಗಳಿಗೆ ನಲ್ಲಿ ಮೂಲಕ ನೀರು ಪೂರೈಕೆ ಕಲ್ಪಿಸಲಾಗಿದೆ. ಡಬಲ್ ಇಂಜಿನ್ ಸರ್ಕಾರ ಅಭಿವೃದ್ಧಿ ಪೂರಕ ಸರ್ಕಾರವಾಗಿ ಕೆಲಸ ಮಾಡಿದ್ದು, ಮುಂದೆಯೂ ಕೆಲಸ ಮಾಡಲಿದೆ ಎಂದು ಸಿಂಗ್ ಹೇಳಿದರು.