ಬೆಂಗಳೂರು: ಖಾಸಗಿ ಕಾರಣಕ್ಕಾಗಿ ದೆಹಲಿಗೆ ಹೋಗಿ ಬಂದಿದ್ದೇನೆಯೇ ಹೊರತು, ಯಾವುದೇ ರಾಜಕೀಯ ಉದ್ದೇಶದಿಂದ ದೆಹಲಿಗೆ ತೆರಳಿರಲಿಲ್ಲ ಎಂದು ಬಿಜೆಪಿ ಉಪಾಧ್ಯಕ್ಷ ಹಾಗೂ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಪುತ್ರ ಬಿ.ವೈ ವಿಜಯೇಂದ್ರ ಸ್ಪಷ್ಟಪಡಿಸಿದ್ದಾರೆ.
ಸಿಎಂ ಅಧಿಕೃತ ನಿವಾಸ ಕಾವೇರಿ ಬಳಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ದೆಹಲಿಗೆ ಹೋಗಿ ಬಂದಿದ್ದು ನಿಜ. ವೈಯಕ್ತಿಕ ಕಾರ್ಯ ನಿಮಿತ್ತ ದೆಹಲಿಗೆ ತೆರಳಿದ್ದೆ. ಯಾವುದೇ ನಾಯಕರನ್ನು ಭೇಟಿ ಮಾಡಲು ಹೋಗಿರಲಿಲ್ಲ, ರಾಜಕಾರಣಕ್ಕಾಗಿಯೂ ಹೋಗಿರಲಿಲ್ಲ ಎಂದು ತಿಳಿಸಿದರು.
ಸಂಪುಟ ವಿಸ್ತರಣೆ ಕುರಿತು ರಾಷ್ಟ್ರೀಯ ಅಧ್ಯಕ್ಷರನ್ನು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಭೇಟಿ ಮಾಡಿ ಚರ್ಚೆ ನಡೆಸಿದ್ದಾರೆ. ಅವರು ಯಾವಾಗ ನಿರ್ಧಾರ ಮಾಡುತ್ತಾರೆ ಎಂಬುದನ್ನು ಕಾದು ನೋಡಬೇಕಿದೆ. ಹೈಕಮಾಂಡ್ ನಾಯಕರು ಸೂಚನೆ ನೀಡಿದಾಗ ಮುಖ್ಯಮಂತ್ರಿಗಳು ಸಂಪುಟ ವಿಸ್ತರಣೆ ಅಥವಾ ಪುನಾರಚನೆ ಮಾಡಲಿದ್ದಾರೆ ಎಂದು ವಿಜಯೇಂದ್ರ ಹೇಳಿದ್ರು.
ಸದ್ಯದಲ್ಲೇ ಮಸ್ಕಿ ಹಾಗೂ ಬಸವಕಲ್ಯಾಣ ಉಪ ಚುನಾವಣೆಗಳು ನಡೆಯುವ ಸಾಧ್ಯತೆಯಿದೆ. ನನಗೆ ಬಸವಕಲ್ಯಾಣದ ಕಡೆ ಓಡಾಡಿಕೊಂಡು ಕೆಲಸ ಮಾಡುವಂತೆ ಪಕ್ಷದ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಸೂಚನೆ ನೀಡಿದ್ದಾರೆ. ಅದರಂತೆ ನಾನು ಹಾಗೂ ಸಂಸದ ಭಗವಂತ ಖೂಬಾ ಬಸವಕಲ್ಯಾಣದಲ್ಲಿ ಕೆಲಸ ಮಾಡುತ್ತಿದ್ದೇವೆ ಎಂದು ಬಿಜೆಪಿ ಉಪಾಧ್ಯಕ್ಷ ಬಿ ವೈ ವಿಜಯೇಂದ್ರ ತಿಳಿಸಿದರು.