ಕರ್ನಾಟಕ

karnataka

ETV Bharat / state

ಕೋವಿಡ್-19 ಮಾರ್ಗಸೂಚಿ ಉಲ್ಲಂಘನೆ ; ಜನಪ್ರತಿನಿಧಿಗಳ ವಿರುದ್ಧ ಕ್ರಮಕ್ಕೆ ಹೈಕೋರ್ಟ್ ಸೂಚನೆ

ವಿಚಾರಣೆ ವೇಳೆ ಅರ್ಜಿದಾರರ ಪರ ವಕೀಲ ಜಿ ಆರ್‌ ಮೋಹನ್‌ ವಾದಿಸಿ, ಸಾಮಾಜಿಕ ಅಂತರ ಕಾಪಾಡಿಕೊಳ್ಳದ ಮತ್ತು ಮಾಸ್ಕ್ ಧರಿಸದ ಜನಪ್ರತಿನಿಧಿಗಳ ವಿರುದ್ಧ ಅಧಿಕಾರಿಗಳು ಸೂಕ್ತ ಕ್ರಮ ಜರುಗಿಸುತ್ತಿಲ್ಲ..

ಹೈಕೋರ್ಟ್
ಹೈಕೋರ್ಟ್

By

Published : Jul 17, 2020, 7:45 PM IST

ಬೆಂಗಳೂರು :ಕೋವಿಡ್-19 ಮಾರ್ಗಸೂಚಿಗಳನ್ನು ಉಲ್ಲಂಘಿಸುವ ಜನಪ್ರತಿನಿಧಿಗಳ ವಿರುದ್ಧ ವಿಪತ್ತು ನಿರ್ವಹಣಾ ಕಾಯ್ದೆಯಡಿ ನಿರ್ದಾಕ್ಷಿಣ್ಯ ಕಾನೂನು ಕ್ರಮ ಜರುಗಿಸಿ ಎಂದು ಹೈಕೋರ್ಟ್ ಸರ್ಕಾರಕ್ಕೆ ಸೂಚಿಸಿದೆ.

ಕೋವಿಡ್-19 ಮಾರ್ಗಸೂಚಿಗಳ ಉಲ್ಲಂಘನೆ ವಿಚಾರಕ್ಕೆ ಸಂಬಂಧಿಸಿದಂತೆ ಲೆಟ್ಜ್ ಕಿಟ್ ಸಂಸ್ಥೆ ಹಾಗೂ ವಕೀಲೆ ಗೀತಾ ಮಿಶ್ರಾ ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಗಳನ್ನು ಕೋರ್ಟ್​ ಇಂದು ವಿಚಾರಣೆ ನಡೆಸಿತು. ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ನೇತೃತ್ವದ ವಿಭಾಗೀಯ ಪೀಠ ಈ ಸೂಚನೆ ನೀಡಿದೆ.

ವಿಚಾರಣೆ ವೇಳೆ ಅರ್ಜಿದಾರರ ಪರ ವಕೀಲ ಜಿ ಆರ್‌ ಮೋಹನ್‌ ವಾದಿಸಿ, ಸಾಮಾಜಿಕ ಅಂತರ ಕಾಪಾಡಿಕೊಳ್ಳದ ಮತ್ತು ಮಾಸ್ಕ್ ಧರಿಸದ ಜನಪ್ರತಿನಿಧಿಗಳ ವಿರುದ್ಧ ಅಧಿಕಾರಿಗಳು ಸೂಕ್ತ ಕ್ರಮ ಜರುಗಿಸುತ್ತಿಲ್ಲ. ಬದಲಿಗೆ ಐಪಿಸಿ ಸೆಕ್ಷನ್ 283 ಅಡಿ ಪ್ರಕರಣ ದಾಖಲಿಸಿದ್ದಾರೆ. ಈ ನಿಯಮದಡಿ ಕೇವಲ 200 ರೂಪಾಯಿ ದಂಡವನ್ನಷ್ಟೇ ವಿಧಿಸಲು ಸಾಧ್ಯ ಎಂದು ವಿವರಿಸಿದರು.

ಇದಕ್ಕೆ ಪ್ರತಿಕ್ರಿಯಿಸಿದ ಪೀಠ, ಜನಪ್ರತಿನಿಧಿಗಳೇ ಆಗಿರಲಿ, ಜನ ಸಾಮಾನ್ಯರೇ ಆಗಿರಲಿ ಕೋವಿಡ್-19 ಮಾರ್ಗಸೂಚಿಗಳನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸಬೇಕು. ರಾಜಕಾರಣಿಗಳು ಅಥವಾ ವಿಐಪಿಗಳು ಎಂಬ ಕಾರಣಕ್ಕೆ ಕಠಿಣ ಕ್ರಮ ಜರುಗಿಸಲು ಹಿಂಜರಿಯಬಾರದು. ಹೀಗೆ ತಾರತಮ್ಯ ಮಾಡುವುದೂ ಸೂಕ್ತವಲ್ಲ. ಯಾರೇ ಮಾರ್ಗಸೂಚಿಗಳನ್ನು ಉಲ್ಲಂಘಿಸಿದ್ರೂ ಅವರ ವಿರುದ್ಧ ವಿಪತ್ತು ನಿರ್ವಹಣಾ ಕಾಯ್ದೆಯಡಿ ಕಠಿಣ ಕಾನೂನು ಕ್ರಮಕೈಗೊಳ್ಳಿ ಎಂದು ಸರ್ಕಾರಕ್ಕೆ ಹೈಕೋರ್ಟ್ ತಾಕೀತು ಮಾಡಿತು.

ಇನ್ನು, ಶಾಸಕ ಪಿ ಟಿ ಪರಮೇಶ್ವರ್ ನಾಯಕ್, ಶ್ರೀರಾಮುಲು, ಡಿ ಕೆ ಶಿವಕುಮಾರ್, ಸಿದ್ದರಾಮಯ್ಯ ಜೊತೆ ಸೈಕಲ್ ರ್‍ಯಾಲಿ ಮಾಡಿದರು. ಕಾಂಗ್ರೆಸ್ ಮುಖಂಡರು ಹಾಗೂ ಚಿರಂಜೀವಿ ಸರ್ಜಾ ಅಭಿಮಾನಿಗಳು ಸಾಮಾಜಿಕ ಅಂತರ ಕಾಪಾಡಿಕೊಳ್ಳದ, ಮಾಸ್ಕ್ ಧರಿಸದ ವಿಚಾರಕ್ಕೆ ಪ್ರತಿಕ್ರಿಯಿಸಿದ ಪೀಠ, ಯಾರೇ ಆಗಿದ್ದರೂ ಅವರ ವಿರುದ್ಧ ಕ್ರಮ ಜರುಗಿಸಬೇಕು. ಹೀಗಾಗಿ ಆರೋಪ ಹೊತ್ತಿರುವ ಜನಪ್ರತಿನಿಧಿಗಳ ವಿರುದ್ಧ ಕ್ರಮ ಜರುಗಿಸಿ ಆ ಕುರಿತ ವರದಿಯನ್ನು ಮುಂದಿನ ವಿಚಾರಣೆ ವೇಳೆ ನ್ಯಾಯಾಲಯಕ್ಕೆ ಸಲ್ಲಿಸಬೇಕು ಎಂದು ಸೂಚಿಸಿತು.

ABOUT THE AUTHOR

...view details