ಬೆಂಗಳೂರು:ಮೈತ್ರಿ ಪಕ್ಷಗಳ ನಾಯಕರು ವಿವಾದಾತ್ಮಕ ಹೇಳಿಕೆಗಳನ್ನು ನೀಡಬಾರದೆಂದು ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಮನವಿ ಮಾಡಿದ್ದಾರೆ.
ಮೈತ್ರಿ ನಾಯಕರು ವ್ಯತಿರಿಕ್ತ,ವಿವಾದಾತ್ಮಕ ಹೇಳಿಕೆ ನೀಡಬಾರದು:ಸಿಎಂ ಮನವಿ - kannada news
ಉಭಯ ಪಕ್ಷಗಳ ನಾಯಕರು ಯಾವುದೇ ರೀತಿಯ ವಿವಾದಾತ್ಮಕ ಹೇಳಿಕೆಗಳನ್ನು ನೀಡದಂತೆ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಟ್ವೀಟ್ ಮೂಲಕ ಮನವಿ ಮಾಡಿದ್ದಾರೆ.
ಈ ಕುರಿತು ಟ್ವೀಟ್ ಮಾಡಿರುವ ಸಿಎಂ,‘ಕೇಂದ್ರದಲ್ಲಿ ಹೊಸ ಸರ್ಕಾರ ರಚನೆಯಾಗುವ ಮಹತ್ತರ ಘಟ್ಟದಲ್ಲಿ ನಾವಿದ್ದೇವೆ. ಬಿಜೆಪಿಯೇತರ ಸರ್ಕಾರ ರಚನೆಯ ನಮ್ಮೆಲ್ಲರ ಆಶಯ ಸಾಕಾರಗೊಳಿಸುವ ಪ್ರಯತ್ನಗಳು ನಡೆಯುತ್ತಿರುವ ಸಂದರ್ಭದಲ್ಲಿ, ರಾಜ್ಯದ ಕಾಂಗ್ರೆಸ್-ಜೆಡಿಎಸ್ ಮೈತ್ರಿ ಪಕ್ಷಗಳ ಮುಖಂಡರು ವ್ಯತಿರಿಕ್ತ ಹೇಳಿಕೆಗಳನ್ನು ನೀಡುವುದು, ಈ ಪ್ರಯತ್ನಗಳಿಗೆ ಹಿನ್ನೆಡೆಯಾಗಬಹುದು. ಆದ್ದರಿಂದ ಉಭಯ ಪಕ್ಷಗಳ ಮುಖಂಡರು ನಮ್ಮ ಆಶಯಗಳಿಗೆ ಸಕಾರಾತ್ಮಕವಾಗಿ ಸ್ಪಂದಿಸಿ, ಯಾವುದೇ ವಿಭಿನ್ನ,ವಿವಾದಾತ್ಮಕ ಹೇಳಿಕೆ ನೀಡದಂತೆ ನನ್ನ ಕಳಕಳಿಯ ಮನವಿ ’ ಎಂದು ಟ್ವೀಟ್ ನಲ್ಲಿ ಕೋರಿದ್ದಾರೆ.
ಜೆಡಿಎಸ್ ಪಕ್ಷದ ಹಿರಿಯ ಮುಖಂಡ ಬಸವಾಜ ಹೊರಟ್ಟಿ ಅವರು ಇಂದು ಬೆಳಗ್ಗೆ ಗೊಂದಲದಲ್ಲಿ ಮೈತ್ರಿ ಸರ್ಕಾರ ನಡೆಸುವುದು ಬೇಡ.ವಿಧಾನಸಭೆ ವಿಸರ್ಜಿಸಿ, ಚುನಾವಣೆ ಎದುರಿಸೋಣ. ಬಹುಮತ ಪಡೆದ ಪಕ್ಷ ಸರ್ಕಾರ ರಚಿಸಲಿ ಎಂದು ಹೇಳಿಕೆ ನೀಡಿದ್ದರು. ಈ ಹೇಳಿಕೆ ಸಂಬಂಧ ರಾಜಕೀಯ ವಲಯದಲ್ಲಿ ಪರ-ವಿರೋಧ ಟೀಕೆಗಳು ಕೇಳಿ ಬಂದಿದ್ದವು. ಆಗಾಗ ಇಂತಹ ಹೇಳಿಕೆಗಳಿಂದ ಸರ್ಕಾರಕ್ಕೆ ಕಸಿವಿಸಿ ಉಂಟಾಗುತ್ತಿರುವುದನ್ನು ಅರಿತ ಕುಮಾರಸ್ವಾಮಿ ಈ ಬೆಳವಣಿಗೆಗಳಿಗೆ ಕಡಿವಾಣ ಹಾಕಲು ಮುಂದಾಗಿದ್ದಾರೆ.