ಬೆಂಗಳೂರು: ಚುನಾವಣೆಗಳಿಗೆ ನಾಮಪತ್ರ ಸಲ್ಲಿಸುವ ಕೊನೆಯ ದಿನಾಂಕದವರೆಗೂ ಮತದಾರರ ಪಟ್ಟಿಯನ್ನು ಪರಿಷ್ಕೃತ ಮಾಡುವುದಕ್ಕೆ ಅವಕಾಶವಿದೆ ಎಂದು ಹೈಕೋರ್ಟ್ ತಿಳಿಸಿದೆ. ಅಷ್ಟೇ ಅಲ್ಲ ವಿಧಾನಸಭಾ ಕ್ಷೇತ್ರದ ಶಾಸಕರ ಹೆಸರನ್ನು ಆ ಕ್ಷೇತ್ರದ ಮತದಾರರ ಪಟ್ಟಿಯಿಂದ ತೆಗೆದು ಹಾಕುವಂತಹ ಕಾರ್ಯವಾಗಬಾರದು. ಈ ರೀತಿಯ ವಿಚಾರಗಳನ್ನು ಅತ್ಯಂತ ಎಚ್ಚರಿಕೆಯಿಂದ ನಿರ್ವಹಿಸಬೇಕು ಎಂದು ಕೇಂದ್ರ ಚುನಾವಣಾ ಆಯೋಗಕ್ಕೆ ಹೈಕೋರ್ಟ್ ಸೂಚನೆ ನೀಡಿದೆ.
ತಮ್ಮ ಹೆಸರನ್ನು ಮತದಾರರ ಪಟ್ಟಿಯಿಂದ ತೆಗೆದು ಹಾಕಿದ್ದ ಚುನಾವಣಾ ಆಯೋಗದ ಕ್ರಮ ಪ್ರಶ್ನಿಸಿ ಬೆಂಗಳೂರಿನ ಶಿವಾಜಿನರ ವಿಧಾನಸಭಾ ಕ್ಷೇತ್ರದ ಶಾಸಕ ರಿಜ್ವಾನ್ ಅಹರ್ಷದ್ ಸೇರಿದಂತೆ ಮತ್ತಿತರರು ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರಿದ್ದ ನ್ಯಾಯಪೀಠ ಈ ಸೂಚನೆ ನೀಡಿದೆ. ಅಲ್ಲದೇ, ಶಾಸಕರ ಹೆಸರನ್ನೇ ಪಟ್ಟಿಯಿಂದ ತೆಗೆದು ಹಾಕುವ ಪ್ರಸಂಗಗಳು ಎದುರಾಗದಂತೆ ಕ್ರಮ ವಹಿಸಬೇಕು ಎಂದು ಕೇಂದ್ರ ಚುನಾವಣಾ ಆಯೋಗಕ್ಕೆ ಹೈಕೋರ್ಟ್ ಸೂಚನೆ ನೀಡಿದೆ.
ಪ್ರಜಾಪ್ರತಿನಿಧಿ ಕಾಯ್ದೆ 1950ರ ಸೆಕ್ಷನ್ 22ರ ಪ್ರಕಾರ ಮತದಾರರ ಪಟ್ಟಿ ನಾಮ ನಿರ್ದೇಶನ ಮಾಡುವುದಕ್ಕಾಗಿ ಕೊನೆಯ ದಿನಾಂಕದವರೆಗೂ ತಿದ್ದುಪಡಿ ಮಾಡುವುದಕ್ಕೆ ಅನುಮತಿ ನೀಡುತ್ತದೆ. ಹೀಗಾಗಿ ಮತದಾರರ ಅಂತಿಮ ಪಟ್ಟಿ ಪ್ರಕಟದ ಆದ ನಂತರ ಪಟ್ಟಿಯನ್ನು ಮತ್ತಷ್ಟು ಪರಿಷ್ಕರಿಸಲು ಅವಕಾಶವಿಲ್ಲ ಎಂಬುದಾಗಿ ಅರ್ಜಿದಾರರ ವಾದವನ್ನು ನ್ಯಾಯಪೀಠ ತಳ್ಳಿ ಹಾಕಿತು. ಅಂತಿಮ ಮತದಾರರ ಪಟ್ಟಿಯನ್ನು ಪ್ರಕಟಿಸಿದ ನಂತರ ಸ್ಥಳಾಂತರಗೊಂಡವರು ಮತ್ತು ಮೃತಪಟ್ಟವರ ಹೆಸರನ್ನು ಪಟ್ಟಿಯಿಂದ ತೆಗೆದುಹಾಕುವುದಕ್ಕೆ ಚುನಾವಣಾ ಆಯೋಗಕ್ಕೆ ಅವಕಾಶವಿದೆ ಎಂದು ಹೇಳಿತು.