ಬೆಂಗಳೂರು:ಚುನಾವಣಾ ಆಯೋಗವು ಇದೇ ಮೊದಲ ಬಾರಿಗೆ 80 ವರ್ಷ ಮೇಲ್ಪಟ್ಟವರಿಗೆ ಮತ್ತು ಶೇ. 40ಕ್ಕಿಂತ ಹೆಚ್ಚು ವೈಕಲ್ಯ ಹೊಂದಿದ ವಿಶೇಷ ಚೇತನರಿಗೆ ಮನೆಯಿಂದಲೇ ಮತದಾನ ಮಾಡಲು ಅವಕಾಶ ನೀಡಲಾಗಿತ್ತು. ಮನೆಯಿಂದಲೇ ಮತದಾನ ಮಾಡಲು ನೋಂದಾಯಿಸಿಕೊಂಡ 99,529 ಮತದಾರರ ಪೈಕಿ 94,931 ಮತದಾರರು ಮತದಾನ ಮಾಡಿದ್ದಾರೆ. 80 ವರ್ಷಕ್ಕಿಂತ ಮೇಲ್ಪಟ್ಟವರು 80,250 ನೋಂದಾಯಿಸಿಕೊಂಡಿದ್ದು, ಈ ಪೈಕಿ 76,120 ಮಂದಿ ತಮ್ಮ ಹಕ್ಕು ಚಲಾಯಿಸಿದ್ದಾರೆ. ಒಟ್ಟು ಶೇ.94.85 ರಷ್ಟು ಮತದಾನವಾಗಿದೆ.
ಇನ್ನು 19,279 ವಿಕಲಚೇತನ ಮತದಾರರು ನೋಂದಾಯಿಸಿಕೊಂಡಿದ್ದು, 18,811 ಮತದಾರರು ಮತ ಚಲಾಯಿಸಿದ್ದಾರೆ. ಶೇ.97.57 ರಷ್ಟು ಮತದಾನವಾಗಿದೆ ಎಂದು ಚುನಾವಣಾ ಆಯೋಗ ತಿಳಿಸಿದೆ. ಇನ್ನು, ಸೇವಾ ಮತದಾರರು 15,328 ಮಂದಿ ನೋಂದಾಯಿಸಿಕೊಂಡಿದ್ದು, 10,066 ಮತದಾರರು ಮತದಾನ ಮಾಡಿದ್ದಾರೆ. ಒಟ್ಟು ಶೇ.65.67 ರಷ್ಟು ಮತದಾನವಾಗಿದೆ ಎಂದು ಮಾಹಿತಿ ನೀಡಿದೆ.
ಮನೆಯಿಂದಲೇ ಮತದಾನ ಮಾಡಿದ ಬೆಳಗಾವಿ ಜಿಲ್ಲೆ 8636 ಮತದಾರರು:ಮತ್ತೊಂದೆಡೆ ಬೆಳಗಾವಿ ಜಿಲ್ಲೆಯಲ್ಲಿ ಈ ಬಾರಿ 80 ವರ್ಷ ಮೇಲ್ಪಟ್ಟ 6975 ಹಿರಿಯ ನಾಗರಿಕರು ಮತ್ತು 1661 ವಿಶೇಷ ಚೇತನರು ಸೇರಿದಂತೆ ಒಟ್ಟು 8636 ಜನ ಮತದಾರರು ತಮ್ಮ ಮನೆಯಿಂದಲೇ ಮತ ಚಲಾಯಿಸುವ ಮೂಲಕ ದಾಖಲೆ ಬರೆದಿದ್ದಾರೆ. ಜಿಲ್ಲೆಯಲ್ಲಿ 80 ವರ್ಷಕ್ಕಿಂತ ಮೇಲ್ಪಟ್ಟ 7362 ಮತದಾರರು ಹಾಗೂ 1708 ವಿಶೇಷ ಚೇತನರು ಸೇರಿದಂತೆ ಒಟ್ಟು 9070 ಜನ ಮನೆಯಿಂದಲೇ ಮತ ಚಲಾಯಿಸಲು ತಮ್ಮ ಹೆಸರು ನೋಂದಾಯಿಸಿಕೊಂಡಿದ್ದರು.