ಬಿಜೆಪಿಯಿಂದ ಶಾಸಕರ ಕುದುರೆ ವ್ಯಾಪಾರ, ಭ್ರಷ್ಟಾಚಾರ: ವಿ.ಎಸ್.ಉಗ್ರಪ್ಪ - ಉಗ್ರಪ್ಪ
ಹೆಚ್. ವಿಶ್ವನಾಥ್ ಅವರು ಹೇಳಿದಂತೆ ನೀರಾವರಿ ಇಲಾಖೆಯಲ್ಲಿ ಹಣಕಾಸು ಸಚಿವಾಲಯ ಹಾಗೂ ನೀರಾವರಿ ಮಂಡಳಿ ಅನುಮತಿ ಇಲ್ಲದೆ 20 ಸಾವಿರ ಕೋಟಿ ರೂಪಾಯಿಗಳ ಟೆಂಡರ್ ಕರೆಯಲಾಗಿದೆ ಎಂದು ಮಾಜಿ ಸಂಸದ ವಿ.ಎಸ್ ಉಗ್ರಪ್ಪ ಆರೋಪಿಸಿದ್ದಾರೆ. ಇದರಲ್ಲಿ ಕೋಟ್ಯಂತರ ರೂಪಾಯಿ ಭ್ರಷ್ಟಾಚಾರ ನಡೆದಿದ್ದು, ಇದರಲ್ಲಿ ಸಿಎಂ ಹಾಗೂ ಅವರ ಮಗ ಭಾಗಿಯಾಗಿದ್ದಾರೆ ಎಂದು ಆರೋಪಿಸಿದ್ದಾರೆ.
ಬೆಂಗಳೂರು: ಬಿಜೆಪಿಯಲ್ಲಿನ ಆಂತರಿಕ ಕಲಹದಿಂದ ರಾಜ್ಯದ ಜನರ ಬದುಕು ದುಸ್ತರವಾಗಿದೆ. ಯಡಿಯೂರಪ್ಪನವರ ಸರ್ಕಾರ ಅಲ್ಪಮತಕ್ಕೆ ಕುಸಿದಿರುವ ಹಿನ್ನೆಲೆ ಶಾಸಕರ ಕುದುರೆ ವ್ಯಾಪಾರ ನಡೆಯುತ್ತಿದ್ದು, ಭ್ರಷ್ಟಾಚಾರ ತಾಂಡವವಾಡುತ್ತಿದೆ. ಈ ಹಿನ್ನೆಲೆ ರಾಜ್ಯಪಾಲರು ಸರ್ಕಾರ ವಜಾಗೊಳಿಸಿ ರಾಷ್ಟ್ರಪತಿ ಆಳ್ವಿಕೆ ಜಾರಿಗೆ ತರಬೇಕು ಎಂದು ಮಾಜಿ ಸಂಸದ ವಿ.ಎಸ್. ಉಗ್ರಪ್ಪ ಒತ್ತಾಯಿಸಿದ್ದಾರೆ.
ಕೆಪಿಸಿಸಿ ಕಚೇರಿಯಲ್ಲಿ ಎಚ್.ಎಂ. ರೇವಣ್ಣ ಜೊತೆ ಜಂಟಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಯಡಿಯೂರಪ್ಪನವರಿಗೆ ಈ ಇಳಿ ವಯಸ್ಸಿನಲ್ಲಿ ಇಂಥ ಸ್ಥಿತಿ ಬರಬಾರದಾಗಿತ್ತು. ಯಡಿಯೂರಪ್ಪನವರಿಗೆ ಸ್ವಲ್ಪವಾದರೂ ಸ್ವಾಭಿಮಾನ ಇದ್ದಿದ್ದರೆ ಬಿಜೆಪಿಯಲ್ಲಿನ ಆಂತರಿಕ ವಿದ್ಯಮಾನಗಳನ್ನು ನೋಡಿ ರಾಜೀನಾಮೆ ನೀಡಬೇಕಿತ್ತು. ಆದರೆ ಯಡಿಯೂರಪ್ಪನವರು ಅಧಿಕಾರಕ್ಕೆ ಅಂಟಿಕೊಂಡಿರೋದು ನೋಡಿದರೆ ಲೂಟಿಯಲ್ಲಿ ತಲ್ಲೀನರಾಗಿದ್ದಾರೆ ಎಂಬುದು ಅರ್ಥವಾಗುತ್ತದೆ ಎಂದು ಟೀಕಿಸಿದರು.