ಬೆಂಗಳೂರು: ವಕ್ಫ್ ಆಸ್ತಿ ಸಂರಕ್ಷಣೆ ವಿಚಾರದಲ್ಲಿ ಅಸಡ್ಡೆ ತೋರುವುದನ್ನು ಸಹಿಸುವುದಿಲ್ಲ ಎಂದು ಅಲ್ಪಸಂಖ್ಯಾತರ ಕಲ್ಯಾಣ ಹಾಗೂ ವಕ್ಫ್ ಇಲಾಖೆ ಸಚಿವ ಜಮೀರ್ ಅಹ್ಮದ್ ಖಾನ್ ತಿಳಿಸಿದ್ದಾರೆ.
ವಕ್ಫ್ ಆಸ್ತಿ ಸಂರಕ್ಷಣೆಗೆ ಸಂಬಂಧಿಸಿದ ಸಭೆ: ವಕ್ಫ್ ಬೋರ್ಡ್ ನಲ್ಲಿ ಬೆಂಗಳೂರು ನಗರ ವ್ಯಾಪ್ತಿಯ ಅಸ್ತಿಗಳ ಸಂರಕ್ಷಣೆ ಹಾಗೂ ನಿರ್ವಹಣೆ ಕುರಿತು ನಡೆದ ಸಭೆಯಲ್ಲಿ ಪಾಲ್ಗೊಂಡು ಮಾತನಾಡಿದ ಸಚಿವ ಜಮೀರ್ ಅಹ್ಮದ್ ಖಾನ್, ವಕ್ಫ್ ಆಸ್ತಿ ಸಂರಕ್ಷಣೆ ವಿಚಾರದಲ್ಲಿ ಅಸಡ್ಡೆ ತೋರುವುದನ್ನು ಸಹಿಸುವುದಿಲ್ಲ ಎಂದು ತಾಕೀತು ಮಾಡಿದರು. ವಕ್ಫ್ ಆಸ್ತಿಗಳ ಮಾಹಿತಿ, ನ್ಯಾಯಾಲಯದಲ್ಲಿರುವ ಪ್ರಕರಣ, ಲೀಸ್ ಆಧಾರದಲ್ಲಿ ನೀಡಿರುವ ಅಸ್ತಿಗಳ ಬಗ್ಗೆ ಸಮರ್ಪಕ ಮಾಹಿತಿ ನೀಡದ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡ ಸಚಿವರು, ನೀವೆಲ್ಲ ಏನು ಮಾಡುತ್ತಿದ್ದೀರಿ. ಹತ್ತಾರು ವರ್ಷಗಳಿಂದ ಇದ್ದರೂ ನಿಮ್ಮ ಬಳಿ ಮಾಹಿತಿ ಇಲ್ಲ ಎಂದರೆ ಹೇಗೆ ಎಂದು ತರಾಟೆಗೆ ತೆಗೆದುಕೊಂಡರು.
ಅಧಿಕಾರಿಗಳ ವಿರುದ್ಧ ಕ್ರಮ: 15 ದಿನಗಳಲ್ಲಿ ಸಮಗ್ರ ಮಾಹಿತಿ ಸಿದ್ಧಪಡಿಸಬೇಕು. ಆಗಲೂ ಸೂಕ್ತ ಮಾಹಿತಿ ನೀಡದಿದ್ದರೆ ಸಂಬಂಧಪಟ್ಟ ಅಧಿಕಾರಿಗಳ ವಿರುದ್ಧ ಮುಲಾಜಿಲ್ಲದೇ ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಕೆ ನೀಡಿದರು. ವಕ್ಫ್ ಬೋರ್ಡ್ ನಲ್ಲಿ ವರ್ಷಗಳಿಂದ ಒಂದೇ ಕಡೆ ಕೆಲಸ ಮಾಡುತ್ತಿರುವವರನ್ನು ವರ್ಗಾವಣೆ ಮಾಡಿ ಎಂದು ಸಂಬಂಧಪಟ್ಟ ಅಧಿಕಾರಿಗಳಲ್ಲಿ ತಿಳಿಸಿದರು.