ಬೆಂಗಳೂರು :ರಾಜ್ಯದ ವಕ್ಫ್ ಆಸ್ತಿಗಳ ಒತ್ತುವರಿ ಹಾಗೂ ದುರ್ಬಳಕೆ ಪ್ರಕರಣಗಳನ್ನು ಸಿಬಿಐ ತನಿಖೆಗೆ ವಹಿಸಲು ಕೋರಿರುವ ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್, ಈ ಸಂಬಂಧ ಲೋಕಾಯುಕ್ತ ವರದಿಯನ್ನು ನ್ಯಾಯಾಲಯಕ್ಕೆ ಸಲ್ಲಿಸುವಂತೆ ಸರ್ಕಾರಕ್ಕೆ ನಿರ್ದೇಶಿಸಿದೆ.
ಈ ಕುರಿತು ಮಾಜಿ ಸಚಿವ ಎಸ್.ಕೆ. ಕಾಂತ ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಮುಖ್ಯ ನ್ಯಾಯಮೂರ್ತಿ ಎ.ಎಸ್. ಓಕ ನೇತೃತ್ವದ ವಿಭಾಗೀಯ ಪೀಠ ವಿಚಾರಣೆ ನಡೆಸಿತು. ಕೆಲಕಾಲ ವಾದ ಆಲಿಸಿದ ಪೀಠ, ಮುಂದಿನ ವಿಚಾರಣೆ ವೇಳೆ ಇದೇ ವಿಚಾರಕ್ಕೆ ಸಂಬಂಧಿಸಿದಂತೆ ಲೋಕಾಯುಕ್ತರು ಸರ್ಕಾರಕ್ಕೆ ಸಲ್ಲಿಸಿರುವ ವರದಿಯನ್ನು ನ್ಯಾಯಾಯಲಕ್ಕೆ ಸಲ್ಲಿಸಿ ಎಂದು ನಿರ್ದೇಶಿಸಿ, ವಿಚಾರಣೆಯನ್ನು ಏ.22ಕ್ಕೆ ಮುಂದೂಡಿತು.
ಇದಕ್ಕೂ ಮುನ್ನ ಅರ್ಜಿದಾರರ ಪರ ವಾದಿಸಿದ ವಕೀಲ ಶ್ರೀಧರ ಪ್ರಭು, ಹಗರಣಕ್ಕೆ ಸಂಬಂಧಿಸಿದಂತೆ ಲೋಕಾಯುಕ್ತ ವರದಿಯನ್ನು ಸರ್ಕಾರ ಬಹಿರಂಗಗೊಳಿಸಿಲ್ಲ. ಹಾಗೆಯೇ, ಅಲ್ಪಸಂಖ್ಯಾತರ ಆಯೋಗ ಸಲ್ಲಿಸಿರುವ ವರದಿಯನ್ನೂ ಶಾಸನಸಭೆಯಲ್ಲಿ ಮಂಡಿಸಿಲ್ಲ. ಅಲ್ಪಸಂಖ್ಯಾತರ ಹಕ್ಕುಗಳ ರಕ್ಷಣೆ ಸರ್ಕಾರದ ಸಂವಿಧಾನಬದ್ಧ ಹೊಣೆಯಾಗಿದೆ. ರಾಜ್ಯದಲ್ಲಿ ವಕ್ಫ್ ಆಸ್ತಿಗಳ ದುರ್ಬಳಕೆ ಸಂಬಂಧ ಅಲ್ಪಸಂಖ್ಯಾತರ ಆಯೋಗ 2012ರಲ್ಲಿ ವಿಶೇಷ ವರದಿಯನ್ನು ಸರಕಾರಕ್ಕೆ ಸಲ್ಲಿಸಿದೆ, ಅದರಲ್ಲಿ ಅನೇಕ ಮಹತ್ವದ ಶಿಫಾರಸುಗಳನ್ನು ಮಾಡಲಾಗಿದೆ. ಆ ಶಿಫಾರಸುಗಳನ್ನು ರಾಜ್ಯ ಸರ್ಕಾರ ಅನುಷ್ಠಾನಕ್ಕೆ ತರಬೇಕಿದೆ ಎಂದರು.
ಅದೇ ರೀತಿ 2016ರಲ್ಲಿ ಲೋಕಾಯುಕ್ತ ಸಂಸ್ಥೆಯು ರಾಜ್ಯ ಸರಕಾರಕ್ಕೆ ಸಲ್ಲಿಸಿರುವ ವರದಿ ಸೇರಿದಂತೆ ರಾಜ್ಯ ಸರ್ಕಾರ ಮತ್ತು ಲೋಕಾಯುಕ್ತ ಬಳಿ ಇರುವ ಎಲ್ಲಾ ದಾಖಲೆಗಳನ್ನು ನ್ಯಾಯಾಲಯ ತರಿಸಿಕೊಳ್ಳಬೇಕು ಎಂದು ಕೋರಿದರು.
ವಕ್ಫ್ ಆಸ್ತಿ ರಕ್ಷಣೆ ಮಾಡುವುದು ಸರ್ಕಾರದ ಕರ್ತವ್ಯ. ಹೀಗಾಗಿ ಅಲ್ಪಸಂಖ್ಯಾತರ ಆಯೋಗದ ವಿಶೇಷ ವರದಿಯಲ್ಲಿ ಮಾಡಲಾದ ಶಿಫಾರಸುಗಳನ್ನು ಅನುಷ್ಠಾನಕ್ಕೆ ತರಲು ಸರ್ಕಾರ ಮತ್ತು ರಾಜ್ಯ ವಕ್ಫ್ ಮಂಡಳಿಗೆ ನಿರ್ದೇಶಿಸಬೇಕು. ವರದಿಯಲ್ಲಿನ ಅಂಶಗಳನ್ನು ಆಧರಿಸಿ ಅದರ ತನಿಖೆಯನ್ನು ಸಿಬಿಐಗೆ ವಹಿಸುವಂತೆ ರಾಜ್ಯ ಸರಕಾರಕ್ಕೆ ನಿರ್ದೇಶಿಸಬೇಕು. ತನಿಖೆಯ ಮೇಲ್ವಿಚಾರಣೆಯನ್ನು ಹೈಕೋರ್ಟ್ ಮಾಡಬೇಕು ಎಂದು ಅರ್ಜಿದಾರರು ಮನವಿ ಮಾಡಿದ್ದಾರೆ.