ಆನೇಕಲ್ (ಬೆಂಗಳೂರು): ತಮಿಳುನಾಡಿಗೆ ಕಾವೇರಿ ನೀರು ಹರಿಸುತ್ತಿರುವುದನ್ನು ಖಂಡಿಸಿ ಅಕ್ಟೋಬರ್ 28ರಂದು ಬೆಂಗಳೂರು, ರಾಮನಗರ, ಚನ್ನಪಟ್ಟಣ, ಮದ್ದೂರು, ಮಂಡ್ಯ, ಶ್ರೀರಂಗಪಟ್ಟಣ, ಮೈಸೂರಿನಲ್ಲಿ ಜಿಲ್ಲಾಧಿಕಾರಿಗಳು ಮತ್ತು ತಹಶೀಲ್ದಾರ್ ಕಚೇರಿ ಮುಂಭಾಗ ಕನ್ನಡ ಪರ ಒಕ್ಕೂಟದಿಂದ ಪ್ರತಿಭಟನೆ ನಡೆಸಲಾಗುವುದು ಎಂದು ಕನ್ನಡ ಪರ ಹೋರಾಟಗಾರ ವಾಟಾಳ್ ನಾಗರಾಜ್ ಹೇಳಿದರು. ಇಂದು ತಮಿಳುನಾಡಿನ ಹೊಸೂರಿನಲ್ಲಿ ಹಮ್ಮಿಕೊಂಡಿದ್ದ ಪ್ರತಿಭಟನೆಗೆ ಪೊಲೀಸರು ಅನುಮತಿ ನೀಡಿದಿದ್ದಕ್ಕೆ, ಗಡಿ ದಾಟಿ ಹೆದ್ದಾರಿಯಲ್ಲಿ ಪ್ರತಿಭಟನೆ ನಡೆಸಿ ಅವರು ಮಾತನಾಡಿದರು.
ಕನ್ನಡ ಪರ ಒಕ್ಕೂಟ ಮತ್ತು ನನ್ನ ಬಗ್ಗೆ ತಮಿಳುನಾಡಿನಲ್ಲಿ ಕೆಟ್ಟದಾಗಿ ಮಾತನಾಡುತ್ತಿದ್ದಾರೆ. ಇದು ಒಳ್ಳೆಯ ಬೆಳವಣಿಗೆಯಲ್ಲ. ರಾಜ್ಯದ ಜಲಾಶಯಗಳಲ್ಲಿ ನೀರಿಲ್ಲದೇ ಜನ ಪರದಾಡುತ್ತಿದ್ದಾರೆ. ಇಂತಹ ಸಂಕಷ್ಟದ ಸಂದರ್ಭದಲ್ಲಿ ರಾಜ್ಯ ಸರ್ಕಾರ ಕಾವೇರಿ ಪ್ರಾಧಿಕಾರದ ಆದೇಶವನ್ನು ಪಾಲಿಸಿ ರಾಜ್ಯದ ಜನತೆಗೆ ನೀರಿಲ್ಲದಂತೆ ಮಾಡಿದೆ. ಪರಿಸ್ಥಿತಿಯ ಅರಿವಿದ್ದರೂ ತಮಿಳುನಾಡು ಸರ್ಕಾರ ಕೊಡು-ಕೊಳ್ಳುವಿಕೆಯಿಲ್ಲದೇ ದ್ವೇಷದ ರಾಜಕೀಯ ಮಾಡುತ್ತಿದೆ ಎಂದು ಕಿಡಿಕಾರಿದರು.
ತಮಿಳುನಾಡಿನ ಹೊಸೂರು ಕನ್ನಡದ ಪ್ರದೇಶಗಳಾಗಿದ್ದು, ಈ ಪ್ರದೇಶಗಳು ರಾಜ್ಯಕ್ಕೆ ಸೇರಬೇಕಾಗಿದೆ. ಈ ಸಂಬಂಧ ಸರ್ಕಾರ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು. ಇತ್ತೀಚಿಗೆ ಅತ್ತಿಬೆಲೆಯ ಪಟಾಕಿ ದುರಂತದಲ್ಲಿ ಮೃತಪಟ್ಟವರಿಗೆ ಕರ್ನಾಟಕ ಸರ್ಕಾರ 5 ಲಕ್ಷ ನೀಡಿದೆ. ಆದರೆ ತಮಿಳುನಾಡು ಸರ್ಕಾರ 3 ಲಕ್ಷ ನೀಡಿದೆ ಇವರಿಗೆ ನಾಚಿಕೆಯಾಗುವುದಿಲ್ಲವೇ ಎಂದರು.