ಬೆಂಗಳೂರು : ರಾಜ್ಯದ ಮಹಿಳೆಯರ ಆರ್ಥಿಕ ಸಬಲೀಕರಣ ಹೆಚ್ಚಿಸಲು ಕುಟುಂಬದ ಯಜಮಾನಿಗೆ ಮಾಸಿಕ 2 ಸಾವಿರ ರೂ. ನೀಡುವ ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆ ಗೃಹಲಕ್ಷ್ಮಿ ಅಡಿ ಈವರೆಗೆ 9,44,155 ಅರ್ಜಿದಾರರಿಗೆ ಹಣ ಹೋಗಿಲ್ಲ. ಇದಕ್ಕೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಅವರು ಸೂಕ್ತ ಕಾರಣಗಳನ್ನು ನೀಡಿದ್ದಾರೆ.
3082 ಅರ್ಜಿದಾರರು ಮರಣ ಹೊಂದಿದ್ದರಿಂದ ಅವರನ್ನು ಅನರ್ಹಗೊಳಿಸಲಾಗಿದೆ. 1,59,356 ಅರ್ಜಿದಾರರ ಡೆಮೋ ದೃಢೀಕರಣ ವಿಫಲವಾಗಿದೆ. ಫಲಾನುಭವಿಗಳ ಆಧಾರ್ ಹಾಗೂ ಬ್ಯಾಂಕ್ ಖಾತೆ ಹೆಸರಿನಲ್ಲಿ ವ್ಯತ್ಯಾಸವಾಗಿದ್ದು, ಅವುಗಳನ್ನು ಸರಿಪಡಿಸುವ ಕಾರ್ಯ ನಡೆದಿದೆ. 5,96,268 ಫಲಾನುಭವಿಗಳ ಖಾತೆಯೊಂದಿಗೆ ಆಧಾರ್ ಜೋಡಣೆಯಾಗಿಲ್ಲ. 2,17,536 ಫಲಾನುಭವಿಗಳ ಬ್ಯಾಂಕ್ ಖಾತೆಯನ್ನು ಆಧಾರ್ ನೊಂದಿಗೆ ಯಶಸ್ವಿಯಾಗಿ ಜೋಡಿಸಲಾಗಿದೆ. ಉಳಿದ ಫಲಾನುಭವಿಗಳಿಗೂ ಸಿಡಿಪಿಒ ಮಾಹಿತಿ ನೀಡಿ ಆಧಾರ್ ಫೀಡ್ ಮಾಡಿಸಲು ಕ್ರಮ ವಹಿಸಲಾಗಿದೆ ಎಂದು ಪ್ರಕಟಣೆಯಲ್ಲಿ ಸಚಿವರು ತಿಳಿಸಿದ್ದಾರೆ.