ಬೆಂಗಳೂರು:ಪ್ರಗತಿಯಲ್ಲಿರುವ ವೈಟ್ ಟಾಪಿಂಗ್ ಕಾಮಗಾರಿಯನ್ನು ಸ್ಥಗಿತಗೊಳಿಸಿದ ಹಿನ್ನೆಲೆ ಬಿಬಿಎಂಪಿ ಆಯುಕ್ತ ಬಿ.ಎಚ್.ಅನಿಲ್ ಕುಮಾರ್ಗೆ ಸಿಎಂ ಯಡಿಯೂರಪ್ಪ ಕ್ಲಾಸ್ ತೆಗೆದುಕೊಂಡಿದ್ದಾರೆ.
ನಗರದ ವೈಟ್ ಟಾಪಿಂಗ್ ರಸ್ತೆ ಕಾಮಗಾರಿ ಸ್ಥಗಿತಗೊಳಿಸುವಂತೆ ಸಿಎಂ ಇತ್ತೀಚೆಗೆ ಆದೇಶ ಹೊರಡಿಸಿದ್ದರು. ಆದರೆ ಪಾಲಿಕೆ ಅಧಿಕಾರಿಗಳು ಪ್ರಗತಿಯಲ್ಲಿರುವ ವೈಟ್ ಟಾಪಿಂಗ್ ಕಾಮಗಾರಿಯನ್ನೂ ಸ್ಥಗಿತಗೊಳಿಸಿದ್ದಾರೆ. ಇದರಿಂದ ವಾಹನ ಸವಾರರು ಹಾಗೂ ಸಾರ್ವಜನಿಕರು ಸಾಕಷ್ಟು ಸಮಸ್ಯೆ ಎದುರಿಸುತ್ತಿದ್ದಾರೆ. ಈ ಸಂಬಂಧ ಸಾರ್ವಜನಿಕರು ತಮ್ಮ ಆಕ್ಷೇಪ ವ್ಯಕ್ತಪಡಿಸಿದ್ದರು.
ಈ ಹಿನ್ನೆಲೆ ಬಿಬಿಎಂಪಿ ಆಯುಕ್ತ ಬಿ.ಎಚ್.ಅನಿಲ್ ಕುಮಾರ್ರನ್ನು ಬೆಳಗ್ಗೆಯೇ ಅರಣ್ಯ ಭವನ ಗೆಸ್ಟ್ ಹೌಸ್ಗೆ ಕರೆಸಿದ ಸಿಎಂ ಯಡಿಯೂರಪ್ಪ, ಪ್ರಗತಿಯಲ್ಲಿರುವ ವೈಟ್ ಟಾಪಿಂಗ್ ಕಾಮಗಾರಿ ನಿಲ್ಲಿದ್ದಕ್ಕೆ ಆಕ್ರೋಶ ವ್ಯಕ್ತಪಡಿಸಿದರು. ಪ್ರಗತಿಯಲ್ಲಿರುವ ಕಾಮಗಾರಿ ಏತಕ್ಕೆ ಸ್ಥಗಿತಗೊಳಿಸಿದಿರಿ ಎಂದು ಬಿಬಿಎಂಪಿ ಆಯುಕ್ತರನ್ನು ತರಾಟೆಗೆ ತೆಗೆದುಕೊಂಡರು.
ವೈಟ್ ಟಾಪಿಂಗ್ನ ಹೊಸ ಕಾಮಗಾರಿಗಳಿಗೆ ಮಾತ್ರ ತಡೆ ನೀಡಲಾಗಿದೆ. ಆದರೆ, ಚಾಲ್ತಿಯಲ್ಲಿರುವ, ಅರ್ಧ ಮುಗಿಸಿದ ಕಾಮಗಾರಿಗಳನ್ನೂ ಸ್ಥಗಿತಗೊಳಿಸಬೇಡಿ. ಕೂಡಲೇ ಕಾಮಗಾರಿಗಳನ್ನು ಪೂರ್ಣಗೊಳಿಸಿ. ಸಾರ್ವಜನಿಕರಿಗೆ ಯಾವುದೇ ಸಮಸ್ಯೆ ಆಗಬಾರದು ಎಂದು ಆಯುಕ್ತರಿಗೆ ಕ್ಲಾಸ್ ತೆಗೆದುಕೊಂಡರು.
ಅರ್ಧ ಮಾಡಿರುವ ವೈಟ್ ಟಾಪಿಂಗ್ ಕಾಮಗಾರಿಗಳನ್ನು ಪೂರ್ಣ ಮಾಡಿ, ಹೊಸ ವೈಟ್ ಟಾಪಿಂಗ್ ಕಾಮಗಾರಿಗಳಿಗೆ ಚಾಲನೆ ಕೊಡದಂತೆ ಸಿಎಂ ಖಡಕ್ ಸೂಚನೆ ನೀಡಿದರು.