ಬೆಂಗಳೂರು: ಕೋಲಾರ ಜಿಲ್ಲೆಯ ನರಸಾಪುರ ಕೈಗಾರಿಕಾ ಪ್ರದೇಶದಲ್ಲಿರುವ ತೈವಾನ್ ಮೂಲದ ವಿಸ್ಟ್ರನ್ ಕಾರ್ಖಾನೆಯಲ್ಲಿ ಶನಿವಾರ ಬೆಳಗ್ಗೆ ನಡೆದ ಕಾರ್ಮಿಕರ ಪ್ರತಿಭಟನೆ ಹಾಗೂ ದೋಂಬಿಯನ್ನು ಖಂಡಿಸಿರುವ ಉಪ ಮುಖ್ಯಮಂತ್ರಿ ಡಾ. ಸಿ.ಎನ್. ಅಶ್ವತ್ಥ ನಾರಾಯಣ, ಪರಿಸ್ಥಿತಿ ಸದ್ಯಕ್ಕೆ ನಿಯಂತ್ರಣದಲ್ಲಿದ್ದು, ಆದಷ್ಟು ಬೇಗ ಬಿಕ್ಕಟ್ಟು ಬಗೆಹರಿಯುತ್ತದೆ ಎಂದರು.
ವಿಸ್ಟ್ರನ್ ಕಂಪನಿ ಧ್ವಂಸ ಪ್ರಕರಣ ಬೆಂಗಳೂರಿನಲ್ಲಿ ಸುದ್ದಿಗಾರರ ಜೊತೆ ಮಾತನಾಡಿ ಘಟನೆಯ ಬಗ್ಗೆ ಪ್ರತಿಕ್ರಿಯೆ ನೀಡಿದರು. ಇಂತಹ ಘಟನೆ ನಡೆಯಬಾರದಿತ್ತು. ಯಾರೂ ಇಂತಹ ಘಟನೆಯನ್ನು ಒಪ್ಪಲು ಸಾಧ್ಯವಿಲ್ಲ ಹಾಗೂ ಸಹಿಸುವ ಪ್ರಶ್ನೆಯೂ ಇಲ್ಲ. ಆ ಕಾರ್ಖಾನೆಯ ವಿರುದ್ಧ ದಾಳಿ ನಡೆಸಿ ಅದರ ಆಸ್ತಿ ನಷ್ಟಕ್ಕೆ ಕಾರಣವಾಗಿರುವ ಕಾರ್ಮಿಕರೇ ಇರಲಿ, ಇನ್ನು ಯಾರೇ ಇರಲಿ ಅವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದರು.
ಓದಿ: ಗ್ರಾಪಂ ಸದಸ್ಯ ಸ್ಥಾನಕ್ಕೆ ನಾಮಪತ್ರ ಸಲ್ಲಿಸಲು 30 ಕಾರುಗಳಲ್ಲಿ ಬಂದರು!
ಜತೆಗೆ ಇಡೀ ಘಟನೆಗೆ ಕಾರಣವೇನು?. ಕಾರ್ಮಿಕರು ಯಾಕೆ ಆಕ್ರೋಶಕ್ಕೆ ಒಳಗಾದರು?. ಬೆಳಗ್ಗೆ ಪಾಳಿ ಬದಲಾವಣೆ ಹೊತ್ತಿನಲ್ಲಿ ಸೃಷ್ಟಿಯಾದ ಪರಿಸ್ಥಿತಿ ಏನು?. ಯಾರಾದರೂ ಪ್ರಚೋದನೆ ಮಾಡಿದ್ದರಾ ಎಂಬಿತ್ಯಾದಿ ಸಂಗತಿಗಳ ಬಗ್ಗೆಯೂ ವಿಚಾರಣೆ ಮತ್ತು ತನಿಖೆ ನಡೆಯುತ್ತಿದೆ ಎಂದರು.
ವಿಸ್ಟ್ರನ್ ಕಂಪನಿ ಧ್ವಂಸ ಪ್ರಕರಣ ಕಾರ್ಮಿಕರಿಗೆ ವೇತನ ನೀಡಿಲ್ಲ ಅಥವಾ ವೇತನ ಕಡಿತ ಮಾಡಿ ನೀಡಲಾಗುತ್ತಿತ್ತು ಎಂಬ ಅಂಶಗಳ ಬಗ್ಗೆಯೂ ವಿಚಾರಣೆ ನಡೆಸಲಾಗುವುದು. ಕಾರ್ಮಿಕರಿಗೆ ಅಂತಹ ಸಮಸ್ಯೆ ಇದ್ದರೆ ಕಾರ್ಮಿಕ ಆಯುಕ್ತರಿಗೆ ದೂರು ನೀಡಬಹುದಿತ್ತು ಅಥವಾ ಜಿಲ್ಲಾಧಿಕಾರಿಗೆ ದೂರು ನೀಡಬಹುದಿತ್ತು. ಅದನ್ನು ಬಿಟ್ಟು ಕಾನೂನು ಕೈಗೆತ್ತಿಕೊಳ್ಳುವುದು ಸರಿಯಲ್ಲ ಎಂದರು.
ನಮ್ಮ ಇಲಾಖೆಯ ಹಿರಿಯ ಅಧಿಕಾರಿಗಳು ಕೂಡ ಪರಿಸ್ಥಿತಿಯನ್ನು ಖುದ್ದು ಅವಲೋಕಿಸುತ್ತಿದ್ದಾರೆ. ವಿಸ್ಟ್ರನ್ ಸಂಸ್ಥೆಯ ಪ್ರತಿನಿಧಿಗಳ ಜತೆಗೂ ಮಾತುಕತೆ ನಡೆಸಿ, ಬಿಕ್ಕಟ್ಟು ಶಮನ ಮಾಡಲಾಗುವುದು ಎಂದರು.