ಬೆಂಗಳೂರು:ವಿಶ್ವ ಮಹಿಳಾ ದಿನಾಚರಣೆ ಮಾರ್ಚ್ 8 ರಂದು ಆಚರಿಸಲಾಗುತ್ತಿದೆ. ಈ ಪ್ರಯುಕ್ತ ಬಿಎಂಟಿಸಿ ಬಸ್‌ಗಳಲ್ಲಿ ಮಹಿಳೆಯರು ಒಂದು ದಿನದ ಮಟ್ಟಿಗೆ ಉಚಿತವಾಗಿ ಪ್ರಯಾಣಿಸಲು ಬಿಎಂಟಿಸಿ ಸಾರಿಗೆ ಸಂಸ್ಥೆ ಅವಕಾಶ ಕಲ್ಪಿಸಲಿದೆ. ಉಚಿತ ಪ್ರಯಾಣದ ಕುರಿತು ಈಗಾಗಲೇ ರಾಜ್ಯ ಸರ್ಕಾರಕ್ಕೆ ಬಿಎಂಟಿಸಿ ಸಾರಿಗೆ ಸಂಸ್ಥೆ ಪ್ರಸ್ತಾವನೆ ಸಲ್ಲಿಸಿದ್ದು, ಅಧಿಕೃತ ಆದೇಶ ಹೊರ ಬೀಳಬೇಕಿದೆ ಎಂದು ಬಿಎಂಟಿಸಿ ವ್ಯವಸ್ಥಾಪಕ ನಿರ್ದೇಶಕಿ ಸತ್ಯವತಿ ಹೇಳಿದ್ದಾರೆ.
ಬೆಂಗಳೂರಿನಲ್ಲಿ 40 ಲಕ್ಷಕ್ಕೂ ಹೆಚ್ಚು ಮಹಿಳೆಯರಿದ್ದು, ಅದರಲ್ಲಿ ಪ್ರತಿದಿನ 10 ಲಕ್ಷಕ್ಕೂ ಹೆಚ್ಚು ಮಂದಿ ಬಿಎಂಟಿಸಿ ಬಸ್‌ನಲ್ಲಿ ಪ್ರಯಾಣ ಮಾಡುವವರಿದ್ದಾರೆ ಎಂದು ಅಂದಾಜಿಸಲಾಗಿದೆ. ಮಾರ್ಚ್ 8 ರಂದು ಮಹಿಳಾ ದಿನವಾದ್ದರಿಂದ ಉಚಿತ ಬಸ್ ಸಂಚಾರಕ್ಕೆ ಅನುವು ಮಾಡಿಕೊಟ್ಟರೆ ಮುಂದಿನ ದಿನಗಳಲ್ಲಿ ಬಿಎಂಟಿಸಿಗೆ ಹೆಚ್ಚಿನ ಅನುಕೂಲವಾಗಲಿದೆ ಎಂದು ಅಭಿಪ್ರಾಯಪಟ್ಟಿದ್ದಾರೆ.
ಸಾರಿಗೆ ಸಂಸ್ಥೆಗೆ ಅನುಕೂಲ: ಈ ಕ್ರಮದಿಂದ ಮಹಿಳೆಯರು ಇನ್ನಷ್ಟು ಸಂಖ್ಯೆಯಲ್ಲಿ ಬಸ್‌ನಲ್ಲಿ ಸಂಚರಿಸಲು ಅನುಕೂಲವಾಗಲಿದೆ ಎಂದು ಪ್ರಸ್ತಾವನೆಯಲ್ಲಿ ಉಲ್ಲೇಖಿಸಲಾಗಿದೆ ಎಂದು ಸತ್ಯವತಿ ಹೇಳಿದ್ದಾರೆ.
8.17 ಕೋಟಿ ಖರ್ಚು:ಸಿಲಿಕಾನ್ ಸಿಟಿಯಲ್ಲಿ 40,86,580 ಮಹಿಳೆಯರಿದ್ದು, ಅದರಲ್ಲಿ ನಿತ್ಯ 10,21,645 ಮಂದಿ ಮಹಿಳೆಯರು ಬಿಎಂಟಿಸಿ ಬಸ್‌ಗಳಲ್ಲಿ ಸಂಚರಿಸುತ್ತಾರೆ ಎಂದು ಅಂದಾಜಿಸಲಾಗಿದೆ. ಮಹಿಳಾ ದಿನವಾದ ಮಾರ್ಚ್ 8 ರಂದು ಉಚಿತ ಬಸ್ ಪ್ರಯಾಣಕ್ಕೆ ಅನುವು ಮಾಡಿಕೊಟ್ಟರೆ ಅಂದಾಜು 20.44 ಲಕ್ಷ ಮಹಿಳೆಯರು ಪ್ರಯಾಣಿಸುವ ಸಾಧ್ಯತೆ ಇದೆ. ಇದರಿಂದ ಬಿಎಂಟಿಸಿಗೆ ಸುಮಾರು 8.17 ಕೋಟಿ ಖರ್ಚಾಗುವ ನಿರೀಕ್ಷೆ ಇದೆ ಎಂದು ಅಂದಾಜಿಸಲಾಗಿದೆ.