ಬೆಂಗಳೂರು:ಇಂದು ಕರಾವಳಿ ಹಾಗೂ ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ವ್ಯಾಪಕ ಮಳೆಯಾಗಿದ್ದು, ಉತ್ತರ ಒಳನಾಡಿನ ಬಹುತೇಕ ಎಲ್ಲಾ ಜಿಲ್ಲೆಗಳಲ್ಲೂ ವರುಣ ಆರ್ಭಟಿಸಿದ್ದಾನೆ.
ರಾಜ್ಯದಲ್ಲಿ ಮಳೆ ಕುರಿತು ಮಾಹಿತಿ ನೀಡಿದ ಹವಾಮಾನ ಇಲಾಖೆ ನಿರ್ದೇಶಕ ಸಿ ಎಸ್ ಪಾಟೀಲ್ ರಾಜ್ಯದಲ್ಲಿ ಮಾನ್ಸೂನ್ ಚುರುಕಾಗಿದೆ. ಕರಾವಳಿ ಜಿಲ್ಲೆಗಳಲ್ಲಿ ಸೆ.3 ರಿಂದ 7 ರ ವರೆಗೆ ವ್ಯಾಪಕ ಮಳೆಯಾಗುವ ಹೆಚ್ಚಿನ ಸಾಧ್ಯತೆ ಇದೆ. ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಜಿಲ್ಲೆಗಳಲ್ಲಿ ಕೆಲವು ಕಡೆ ಭಾರೀ ಮಳೆಯಾಗುವ ಸಾಧ್ಯತೆ ಇರುವುದರಿಂದ ಸೆ.3 ರಿಂದ 7 ರವರೆಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ ಎಂದು ಹವಾಮಾನ ಇಲಾಖೆ ನಿರ್ದೇಶಕ ಸಿ ಎಸ್ ಪಾಟೀಲ್ ತಿಳಿಸಿದರು.
ಉತ್ತರ ಒಳನಾಡಿನಲ್ಲಿ ಸೆ.3 ಹಾಗೂ 7 ರಂದು ವ್ಯಾಪಕ ಮಳೆ ಹಾಗೂ ಸೆ. 4, 5 ಹಾಗೂ 6 ರಂದು ಬಹುತೇಕ ಎಲ್ಲಾ ಜಿಲ್ಲೆಗಳಲ್ಲಿ ಮಳೆಯಾಗುವ ಹೆಚ್ಚಿನ ನಿರೀಕ್ಷೆ ಇದೆ. ಬೆಳಗಾವಿ, ಧಾರವಾಡ, ಹಾವೇರಿ, ಗದಗ, ಕೊಪ್ಪಳ, ಬೀದರ್, ಕಲಬುರಗಿಯಲ್ಲಿ ಸೆ. 3,6,7 ರಂದು ಭಾರೀ ಮಳೆಯಾಗುವ ನಿರೀಕ್ಷೆ ಇರುವುದರಿಂದ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.
ದಕ್ಷಿಣ ಒಳನಾಡಿನಲ್ಲಿಯೂ ಸೆ.3 ರಿಂದ 7 ರವರೆಗೆ ಮಳೆಯಾಗುವ ನಿರೀಕ್ಷೆ ಇದೆ. ಶಿವಮೊಗ್ಗ, ಚಿಕ್ಕಮಗಳೂರು, ಹಾಸನ, ಕೊಡಗು, ಚಾಮರಾಜನಗರ, ಮೈಸೂರು, ಮಂಡ್ಯ, ಕೋಲಾರ, ರಾಮನಗರ, ಚಿತ್ರದುರ್ಗ, ಬೆಂಗಳೂರು, ತುಮಕೂರು ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ನಿರೀಕ್ಷೆಯಿದ್ದು, ಸೆ.3 ರಿಂದ 7 ರವರೆಗೆ ಯೆಲ್ಲೋ ಅಲರ್ಟ್ ನೀಡಲಾಗಿದೆ. ಬೆಂಗಳೂರಿನಲ್ಲಿ ಕೂಡಾ ಸೆ.3 ರಿಂದ 7 ರವರೆಗೆ ಮಳೆಯಾಗುವ ಹೆಚ್ಚಿನ ಸಾಧ್ಯತೆ ಇದೆ ಎಂದು ಹವಾಮಾನ ವರದಿ ತಿಳಿಸಿದೆ.