ಬೆಂಗಳೂರು: ಧಾರವಾಡ ಜಿಲ್ಲಾ ಪಂಚಾಯಿತಿ ಸದಸ್ಯ ಯೋಗೀಶ್ ಗೌಡ ಹತ್ಯೆ ಪ್ರಕರಣದ ಆರೋಪಿ ವಿನಯ್ ಕುಲಕರ್ಣಿ ಸಲ್ಲಿಸಿರುವ ಜಾಮೀನು ಅರ್ಜಿ ಸಂಬಂಧ ಹೈಕೋರ್ಟ್ ಸಿಬಿಐಗೆ ನೋಟಿಸ್ ಜಾರಿ ಮಾಡಿದೆ.
ಜಾಮೀನು ಕೋರಿ ಹೈಕೋರ್ಟ್ ಮೊರೆ ಹೋದ ವಿನಯ್ ಕುಲಕರ್ಣಿ: ಸಿಬಿಐಗೆ ನೋಟಿಸ್ - Yogeshgowda murder case
ರಾಜ್ಯದಲ್ಲಿ ಸಂಚಲನ ಮೂಡಿಸಿದ್ದ ಜಿಲ್ಲಾ ಪಂಚಾಯಿತಿ ಸದಸ್ಯ ಯೋಗೀಶ್ ಗೌಡ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ವಿನಯ್ ಕುಲಕರ್ಣಿ ಸಲ್ಲಿಸಿರುವ ಜಾಮೀನು ಅರ್ಜಿ ಸಂಬಂಧ ಸಿಬಿಐಗೆ ಹೈಕೋರ್ಟ್ ನೋಟಿಸ್ ನೀಡಿದೆ.
ವಿನಯ್ ಕುಲಕರ್ಣಿ ಸಲ್ಲಿಸಿರುವ ಅರ್ಜಿ ವಿಚಾರಣೆ ನಡೆಸಿದ ನ್ಯಾ.ಜಾನ್ ಮೈಖಲ್ ಖುನ್ಹ ಅವರಿದ್ದ ಪೀಠ, ಸಿಬಿಐಗೆ ನೋಟಿಸ್ ಜಾರಿ ಮಾಡಿ, ವಿಚಾರಣೆಯನ್ನು ಮಾ.30ಕ್ಕೆ ಮುಂದೂಡಿದೆ. ಯೋಗೀಶ್ ಗೌಡ ಹತ್ಯೆ ಪ್ರಕರಣಕ್ಕೂ ನನಗೂ ಸಂಬಂಧ ಇಲ್ಲ. ಪ್ರಕರಣದಲ್ಲಿ ತಮ್ಮ ವಿರುದ್ಧ ಯಾವುದೇ ಆರೋಪ ಇಲ್ಲ. ಅಲ್ಲದೆ, ತನಿಖೆ ನಡೆಸಿರುವ ಸಿಬಿಐ ಈಗಾಗಲೇ ಆರೋಪ ಪಟ್ಟಿಯನ್ನು ವಿಚಾರಣಾ ನ್ಯಾಯಾಲಯಕ್ಕೆ ಸಲ್ಲಿಸಿದೆ. ಈ ಹಿನ್ನೆಲೆ ಜಾಮೀನು ಮಂಜೂರು ಮಾಡಬೇಕು ಎಂದು ಆರೋಪಿ ವಿನಯ್ ಕುಲಕರ್ಣಿ ಅರ್ಜಿಯಲ್ಲಿ ಕೋರಿದ್ದಾರೆ.
ಪ್ರಕರಣದ ಆರೋಪಿಯಾಗಿರುವ ವಿನಯ ಕುಲಕರ್ಣಿಯನ್ನು ನವೆಂಬರ್ 5ರಂದು ಸಿಬಿಐ ವಶಕ್ಕೆ ಪಡೆದಿತ್ತು. ಪ್ರಾರಂಭದಲ್ಲಿ ಜಾಮೀನು ಕೋರಿ ಸ್ಥಳೀಯ ವಿಚಾರಣಾ ನ್ಯಾಯಾಲಯದಲ್ಲಿ ಅರ್ಜಿ ಸಲ್ಲಿಸಿದ್ದರು. ಅರ್ಜಿ ತಿರಸ್ಕೃತವಾದ ಬಳಿಕ ಹೈಕೋರ್ಟ್ ಧಾರವಾಡ ಪೀಠದಲ್ಲಿ ಅರ್ಜಿ ಸಲ್ಲಿಸಿದ್ದರು. ಅಲ್ಲಿಯೂ ಜಾಮೀನು ದೊರೆತಿರಲಿಲ್ಲ. ಬಳಿಕ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯಕ್ಕೆ ಪ್ರಕರಣ ವರ್ಗಾವಣೆಯಾಗಿತ್ತು. ಇಲ್ಲಿಯೂ ಜಾಮೀನು ಸಿಗದ ಹಿನ್ನೆಲೆ ನಾಲ್ಕನೇ ಬಾರಿ ಜಾಮೀನು ಕೋರಿ ಅರ್ಜಿ ಸಲ್ಲಿಸಿದ್ದಾರೆ.