ಬೆಂಗಳೂರು: ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯ ವಿರುದ್ಧ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ ಟಿ ರವಿ ಅವಹೇಳನಕಾರಿ ಹೇಳಿಕೆ ನೀಡಿದ್ದಾರೆ ಎಂದು ಆರೋಪಿಸಿ ಯುವ ಕಾಂಗ್ರೆಸ್ ಕಾರ್ಯಕರ್ತರು ದೂರು ಸಲ್ಲಿಸಿದ್ದಾರೆ. ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಎಸ್.ಮನೋಹರ್ ನೇತೃತ್ವದ ನಿಯೋಗ ಪೊಲೀಸ್ ಠಾಣೆಗೆ ತೆರಳಿ ಇಂದು ದೂರು ಸಲ್ಲಿಸಿದೆ.
ಶಾಸಕ ಸಿ ಟಿ ರವಿ ಅವರು ಉದ್ದೇಶಪೂರ್ವಕ ಕಾಂಗ್ರೆಸ್ ನಾಯಕರ ವಿರುದ್ಧ ಸುಳ್ಳು ಹಾಗೂ ಪ್ರಚೋದನಕಾರಿ ಹೇಳಿಕೆ ನೀಡಿರುವ ಅವರ ವಿರುದ್ಧ ಭಾರತೀಯ ದಂಡ ಸಂಹಿತೆ ಪ್ರಕಾರ ದೂರು ದಾಖಲಿಸಿಕೊಳ್ಳಬೇಕೆಂದು ಯುವ ಕಾಂಗ್ರೆಸ್ ಕಾರ್ಯಕರ್ತರು ಆಗ್ರಹಿಸಿದ್ದಾರೆ.
ಯುವ ಕಾಂಗ್ರೆಸ್: ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ ಟಿ ರವಿ ಅವರು ಉದ್ದೇಶಪೂರ್ವಕ ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯನವರ ಹೆಸರನ್ನು ಪ್ರಸ್ತಾಪಿಸಿ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬಂದರೆ ಹಿಂದೂಗಳ ಕೊಲೆಯಾಗುತ್ತದೆ ಎಂಬ ಹೇಳಿಕೆ ನೀಡಿದ್ದಾರೆ. ಈ ಹೇಳಿಕೆಯಿಂದ ರಾಜ್ಯದಲ್ಲಿ ಶಾಂತಿ ಕದಡುವ, ಧರ್ಮ ಸಂಘರ್ಷ ಉಂಟುಮಾಡುವುದು, ಕೋಮು ಭಾವನೆ ಕೆರಳಿಸುವುದು ಹಾಗೂ ಒಳಸಂಚು ರೂಪಿಸಿ ಕಾನೂನು ಸುವ್ಯವಸ್ಥೆಗೆ ಧಕ್ಕೆ ತರುವುದಾಗಿದೆ. ಅದ್ದರಿಂದ ಇಂಥ ಹೇಳಿಕೆಯನ್ನು ಗಂಭೀರವಾಗಿ ಪರಿಗಣಿಸುವ ಮೂಲಕ ಸಿ ಟಿ ರವಿ ಅವರನ್ನು ವಿಚಾರಣೆಗೆ ಒಳಪಡಿಸಿ, ಪ್ರಕರಣ ದಾಖಲಿಸಿಕೊಂಡು ಅವರನ್ನು ಕೂಡಲೇ ಬಂಧಿಸಬೇಕೆಂದು ಯುವ ಕಾಂಗ್ರೆಸ್ ಕಾರ್ಯಕರ್ತರು ದೂರು ಸಲ್ಲಿಸಿದ್ದಾರೆ.
ಇದನ್ನೂಓದಿ:ದೊಡ್ಡಬಳ್ಳಾಪುರಕ್ಕೆ ಎಂಟ್ರಿ ಕೊಟ್ಟ ಪಂಚರತ್ನ ರಥಯಾತ್ರೆ... ಹೆಚ್ಡಿಕೆಗೆ ಅದ್ದೂರಿ ಸ್ವಾಗತ