ಬೆಂಗಳೂರು: ಕೇಂದ್ರ ಸರ್ಕಾರ ರೈತ ವಿರೋಧಿ ಮಸೂದೆಗಳನ್ನು ಮಂಡಿಸಿದೆ ಎಂದು ಆರೋಪಿಸಿ ನಗರ ಯುವ ಕಾಂಗ್ರೆಸ್ ವತಿಯಿಂದ ಗುರುವಾರ ಸಂಜೆ ಪಂಜಿನ ಮೆರವಣಿಗೆ ನಡೆಸಲಾಯಿತು.
ಬೆಂಗಳೂರು ಕೇಂದ್ರ ವಿಭಾಗ ಯುವ ಕಾಂಗ್ರೆಸ್ ಅಧ್ಯಕ್ಷ ಮೊಹಮ್ಮದ್ ನಲಪಾಡ್ ನೇತೃತ್ವದಲ್ಲಿ ನಡೆದ ಮೆರವಣಿಗೆಯಲ್ಲಿ, ಶಾಂತಿನಗರ ಶಾಸಕ ಎನ್.ಎ. ಹ್ಯಾರಿಸ್ ಹಾಗೂ ಮತ್ತಿತರ ಮುಖಂಡರು ಭಾಗವಹಿಸಿದ್ದರು. ವಸಂತ ನಗರದ ಎಂಪೈರ್ ಹೋಟೆಲ್ ಬಳಿಯಿಂದ ಕ್ವೀನ್ಸ್ ರಸ್ತೆಯ ಕೆಪಿಸಿಸಿ ಕಚೇರಿಯವರೆಗೆ ಮೆರವಣಿಗೆ ನಡೆಯಿತು.
ಯುವ ಕಾಂಗ್ರೆಸ್ನಿಂದ ಪಂಜಿನ ಮೆರವಣಿಗೆ ನಡೆಯಿತು ರಾಜ್ಯ, ಕೇಂದ್ರ ಸರ್ಕಾರಗಳು ರೈತ ವಿರೋಧಿ ಕಾಯ್ದೆಗಳನ್ನು ಜಾರಿಗೆ ತಂದು ರೈತರ ಮೇಲೆ ದಬ್ಬಾಳಿಕೆ ನಡೆಸಲು ಹೊರಟಿದೆ. ಇದನ್ನು ಖಂಡಿಸುವುದು ಕಾಂಗ್ರೆಸ್ನ ಜವಾಬ್ದಾರಿಯಾಗಿದೆ ಎಂದು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದ ಕಾಂಗ್ರೆಸ್ ನಾಯಕರು ತಿಳಿಸಿದರು.
ಶಾಸಕ ಎನ್.ಎ. ಹ್ಯಾರಿಸ್ ಮಾತನಾಡಿ, ಕೇಂದ್ರ ಸರ್ಕಾರ ರೈತ ವಿರೋಧಿ ಕಾಯ್ದೆಗಳನ್ನು ಜಾರಿಗೊಳಿಸಲು ಮುಂದಾಗಿದೆ. ಪ್ರಜಾಪ್ರಭುತ್ವ ವಿರೋಧಿ ನಡೆಯ ಮೂಲಕ ರಾಜ್ಯಸಭೆಯಲ್ಲಿ ಮಸೂದೆಗಳನ್ನು ಅಂಗೀಕರಿಸಲಾಗಿದೆ. ಇದನ್ನು ಕಾಂಗ್ರೆಸ್ ಖಂಡಿಸುತ್ತದೆ ಎಂದರು.