ಬೆಳಗಾವಿ/ಬೆಂಗಳೂರು: ಕಾಡು ಪ್ರಾಣಿಗಳ ದಾಳಿಯಿಂದ ಮೃತಪಟ್ಟವರ ಕುಟುಂಬದವರಿಗೆ 15 ಲಕ್ಷ ರೂಪಾಯಿ ಪರಿಹಾರವನ್ನು ತುರ್ತಾಗಿ ನೀಡಲು ಕ್ರಮ ತೆಗೆದುಕೊಳ್ಳಲಾಗುವುದು ಎಂದು ಕಂದಾಯ ಸಚಿವ ಆರ್.ಅಶೋಕ್ ವಿಧಾನಸಭೆಗೆ ಮಾಹಿತಿ ನೀಡಿದರು. ಪ್ರಶ್ನೋತ್ತರ ವೇಳೆ ಸದಸ್ಯ ಅಶ್ವಿನ್ ಕುಮಾರ್ ಅವರ ಪ್ರಶ್ನೆಗೆ ಉತ್ತರಿಸುತ್ತಾ, ಕಾಡು ಪ್ರಾಣಿಗಳ ದಾಳಿಯಿಂದ ಮೃತಪಟ್ಟ ಕುಟುಂಬಕ್ಕೆ ಕೂಡಲೇ 5 ಲಕ್ಷ ರೂ. ಪರಿಹಾರ ನೀಡಿ ಮರಣೋತ್ತರ ಪರೀಕ್ಷೆ ಹಾಗೂ ಎಫ್ಎಸ್ಎಲ್ ವರದಿ ಬಂದ ತಕ್ಷಣ ಉಳಿದ 10 ಲಕ್ಷ ರೂ. ಪರಿಹಾರ ನೀಡಲಾಗುವುದು. ಕಾಡು ಪ್ರಾಣಿಗಳು ಹಾಗೂ ಮಾನವನ ನಡುವಿನ ಸಂಘರ್ಷ ಕಡಿಮೆ ಮಾಡಲು ಕಾಡಂಚಿನ ಪ್ರದೇಶಗಳಲ್ಲಿ ಆನೆ, ಚಿರತೆ ಮತ್ತಿತರ ಕಾಡು ಪ್ರಾಣಿಗಳು ಗ್ರಾಮಗಳಿಗೆ ನುಗ್ಗದಂತೆ ತಂತಿ ಬೇಲಿ, ಹಳ್ಳ ತೋಡುವುದು ಸೇರಿದಂತೆ ಮತ್ತಿತರ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ ಎಂದು ಹೇಳಿದರು.
ಟೀ ನರಸೀಪುರ ಬಳಿ ಕಾಡು ಪ್ರಾಣಿಗಳ ದಾಳಿಯಿಂದ ನಾಲ್ವರು ಮೃತಪಟ್ಟಿದ್ದು, ಅವರ ಕುಟುಂಬಗಳಿಗೆ ಈಗಾಗಲೇ ಪರಿಹಾರ ಕಲ್ಪಿಸಲಾಗಿದೆ. ಮೃತಪಟ್ಟವರ ಕುಟುಂಬಗಳಿಗೆ 15 ಲಕ್ಷ ರೂ. ಪರಿಹಾರ ಕೊಡುವ ಆದೇಶಕ್ಕಿಂತ ಮುನ್ನ, ಎಷ್ಟು ಅವಧಿಯವರಿಗೆ ನೀಡಬೇಕು ಎನ್ನುವುದರ ಬಗ್ಗೆ ಮುಖ್ಯಮಂತ್ರಿಗಳ ಜೊತೆ ಚರ್ಚಿಸಿ ತೀರ್ಮಾನ ತೆಗೆದುಕೊಳ್ಳಲಾಗುವುದು ಎಂದು ಸಚಿವರು ಸದನಕ್ಕೆ ತಿಳಿಸಿದರು.
ಲಾರಿಗಳ ಸಂಚಾರಕ್ಕೆ ಅನುವು: ಗ್ರಾಮಾಂತರ ಪ್ರದೇಶಗಳ ರಸ್ತೆ ಸಾಮರ್ಥ್ಯಕ್ಕೆ ಅನುಗುಣವಾಗಿ ಲಾರಿಗಳ ಸಂಚಾರಕ್ಕೆ ಅನುವು ಮಾಡಿಕೊಡಲಾಗುವುದು ಎಂದು ಲೋಕೋಪಯೋಗಿ ಸಚಿವ ಸಿ.ಸಿ.ಪಾಟೀಲ್ ಅವರು ಜೆಡಿಎಸ್ ಸದಸ್ಯ ಬಂಡೆಪ್ಪ ಕಾಶಂಪೂರ್ ಅವರ ಪ್ರಶ್ನೆಗೆ ಮುಖ್ಯಮಂತ್ರಿಗಳ ಪರವಾಗಿ ಉತ್ತರಿಸಿದರು. ರಸ್ತೆಗಳ ಸಾಮರ್ಥ್ಯಕ್ಕಿಂತ ಹೆಚ್ಚಿನ ತೂಕವಿರುವ ಲಾರಿಗಳ ಸಂಚಾರದಿಂದ ಗ್ರಾಮೀಣ ರಸ್ತೆಗಳು ಹಾಳಾಗುತ್ತಿವೆ.