ಬೆಳಗಾವಿ: ನೆರೆ ಪರಿಹಾರ ಬಿಡುಗಡೆಗಾಗಿ ಕೇಂದ್ರ ಸರ್ಕಾರದ ಗಮನ ಸೆಳಯಲು ಸಿದ್ದರಾಮಯ್ಯ ನೇತೃತ್ವದಲ್ಲಿ ಬೆಳಗಾವಿಯಲ್ಲಿ ಸೆ. 24ರಂದು ಬೃಹತ್ ಪ್ರತಿಭಟನಾರ‍್ಯಾಲಿಹಾಗೂ ಸಮಾವೇಶ ನಡೆಸಲಾಗುವುದು ಎಂದು ಮಾಜಿ ಸಚಿವ ಸತೀಶ ಜಾರಕಿಹೊಳಿ ತಿಳಿಸಿದರು.
ಬೆಳಗಾವಿಯಲ್ಲಿ ಸೆ. 24ರಂದು ಬೃಹತ್ ಪ್ರತಿಭಟನಾ ರ‍್ಯಾಲಿ, ಸಮಾವೇಶ ನಗರದ ಕಾಂಗ್ರೆಸ್ ಕಚೇರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೇಂದ್ರ ಹಾಗೂ ರಾಜ್ಯದಲ್ಲಿ ಒಂದೇ ಸರ್ಕಾರ ಇದ್ದರೆ ಅಭಿವೃದ್ಧಿಗೆ ಪೂರಕವಾಗುತ್ತದೆ ಎಂದು ಸರ್ಕಾರ ರಚನೆಗೂ ಮುನ್ನ ಯಡಿಯೂರಪ್ಪ ಹೇಳುತ್ತಿದ್ದರು. ಆದರೆ, ಈಗ ಕೇಂದ್ರ ಹಾಗೂ ರಾಜ್ಯದಲ್ಲಿ ಬಿಜೆಪಿ ಸರ್ಕಾರ ಇದ್ದರೂ ರಾಜ್ಯಕ್ಕೆ ಯಾವುದೇ ಪ್ರಯೋಜನ ಆಗುತ್ತಿಲ್ಲ. ಪ್ರವಾಹದಿಂದ ಸಾಕಷ್ಟು ಜನರು ಮನೆ ಕಳೆದುಕೊಂಡಿದ್ದಾರೆ. ಬೆಳೆ ನಾಶವಾಗಿದೆ. ಹಲವರ ಬದುಕು ಬೀದಿಗೆ ಬಂದಿದೆ. ಇಷ್ಟಾದರೂ ಕೇಂದ್ರ ಸರ್ಕಾರ ಪರಿಹಾರ ಹಣ ಬಿಡುಗಡೆ ಮಾಡುತ್ತಿಲ್ಲ. ಹೀಗಾಗಿ ಕೇಂದ್ರದ ಗಮನ ಸೆಳೆಯಲು ಬೆಳಗಾವಿಯಲ್ಲಿ ಬೃಹತ್ ಸಮಾವೇಶ ನಡೆಸಲಾಗುವುದು ಎಂದರು.
ಇನ್ನೂ 25 ಸಾವಿರ ಜನರು ಸಮಾವೇಶದಲ್ಲಿ ಪಾಲ್ಗೊಳ್ಳಲಿದ್ದು, ಕಾಂಗ್ರೆಸ್ ಭವನದಿಂದ ಮೆರವಣಿಗೆ ಮಾಡಿ ಬಳಿಕ ಡಿಸಿ ಕಚೇರಿ ಮುಂಭಾಗದಲ್ಲಿ ಬೃಹತ್ ಸಮಾವೇಶ ಮಾಡುತ್ತೇವೆ. ಸಮಾವೇಶದಲ್ಲಿ ಕಾಂಗ್ರೆಸ್ ಪಕ್ಷದ ವರಿಷ್ಠರು, ಶಾಸಕರು, ಮಾಜಿ ಶಾಸಕರು ಭಾಗವಹಿಸಲಿದ್ದಾರೆ ಎಂದರು.
ನೆರೆ ಪರಿಹಾರಕ್ಕಾಗಿ ಕೇಂದ್ರದ ಗಮನ ಸೆಳೆಯಲು ಈ ಬೃಹತ್ ಸಮಾವೇಶ ನಡೆಸಲಾಗುತ್ತಿದೆ ಅಷ್ಟೆ. ಉಪಚುನಾವಣೆಗೂ ಪ್ರತಿಭಟನೆಗೂ ಯಾವುದೇ ಸಂಬಂಧ ಇಲ್ಲ. ಕೇಂದ್ರಕ್ಕೆ ನಿಯೋಗ ಹೋಗಲು ನಾವು ರೆಡಿ ಇದ್ದೇವೆ. ಇದರ ಬಗ್ಗೆ ಬಿಜೆಪಿಯವರು ಏನೂ ಮಾತನಾಡುತ್ತಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದರು.
ಇನ್ನೂ ಕಂದಾಯ ಸಚಿವ ಆರ್. ಅಶೋಕ್ ಬೆಂಗಳೂರಿಗೆ ಸೀಮಿತವಾಗಿದ್ದಾರೆ. ಅವರಿಗೆ ಡಿಸಿಎಂ ಹುದ್ದೆ ಸಿಕ್ಕರೂ ಅವರು ಬೆಂಗಳೂರು ಬಿಟ್ಟು ಬರುವುದಿಲ್ಲ. ನೆರೆ ಪರಿಹಾರದಲ್ಲಿ ಅಶೋಕ್ ಅವರ ಪಾತ್ರ ಬಹಳ ಮುಖ್ಯವಾಗಿದೆ. ಹೀಗಾಗಿ ತಕ್ಷಣವೇ ಸಿಎಂ ಯಡಿಯೂರಪ್ಪ ಅವರು ಅಶೋಕ್ ಅವರನ್ನು ಪ್ರವಾಹಪೀಡಿತ ಸ್ಥಳಗಳಿಗೆ ಹೋಗುವಂತೆ ಸೂಚನೆ ನೀಡಬೇಕು ಎಂದರು.