ಬೆಳಗಾವಿ: ರೈತರ ಕಬ್ಬಿನ ಬಾಕಿ ಹಣ ಪಾವತಿಸದ ಕಾರ್ಖಾನೆ ವಿರುದ್ಧ ಸರ್ಕಾರ ಕ್ರಮ ಕೈಗೊಳ್ಳಲು ಮುಂದಾಗಿದೆ. ರೈತರ ಹಿತ ಕಾಪಾಡುವುದು ಮಾತ್ರ ನಮ್ಮ ಕೆಲಸವೆಂದು ಸಕ್ಕರೆ ಸಚಿವ ಆರ್.ಬಿ. ತಿಮ್ಮಾಪುರ್ ಹೇಳಿದ್ದಾರೆ.
ಕಬ್ಬಿನ ಬಾಕಿ ಹಣ ಪಾವತಿಸದ ಕಾರ್ಖಾನೆಗಳ ವಿರುದ್ಧ ಕ್ರಮ: ಸಚಿವ ತಿಮ್ಮಾಪುರ್ ಎಚ್ಚರಿಕೆ
ರಾಜ್ಯದಲ್ಲಿ ರೈತರ ಕಬ್ಬಿನ ಬಾಕಿ ಬಿಲ್ ನೀಡದ ಕಾರ್ಖಾನೆಗಳ ವಿರುದ್ಧ ಕ್ರಮ ಕೈಗೊಳ್ಳಲಾಗುತ್ತಿದೆ. ಎಫ್ಆರ್ಪಿ ದರದ ಅನ್ವಯ ರೈತರಿಗೆ ಹಣ ನೀಡಬೇಕು ಎಂದು ನಿರ್ದೇಶನ ನೀಡಿರುವುದಾಗಿ ಸಕ್ಕರೆ ಸಚಿವ ಆರ್.ಬಿ. ತಿಮ್ಮಾಪುರ್ ತಿಳಿಸಿದ್ದಾರೆ.
ನಗರದ ನಿಜಲಿಂಗಪ್ಪ ಸಕ್ಕರೆ ಸಂಸ್ಥೆಯಲ್ಲಿ ನಡೆದ ಆಡಳಿತ ಮಂಡಳಿ ಸದಸ್ಯರ ಸಭೆಯಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿ ರೈತರ ಕಬ್ಬಿನ ಬಾಕಿ ಬಿಲ್ ನೀಡದ ಕಾರ್ಖಾನೆಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುತ್ತಿದೆ. ಎಫ್ಆರ್ಪಿ ದರದ ಅನ್ವಯ ರೈತರಿಗೆ ಹಣ ನೀಡಬೇಕು ಎಂದು ನಿರ್ದೇಶನ ನೀಡಲಾಗಿದೆ. ಒಂದು ವೇಳೆ ಇದಕ್ಕೆ ಜಗ್ಗದೆ ಇದ್ದರೆ 1 ತಿಂಗಳ ಅವಧಿಯಲ್ಲಿ ಕಬ್ಬಿನ ಬಾಕಿ ಬಿಲ್ ಕೊಡಿಸುವ ಕೆಲಸವನ್ನು ಸರ್ಕಾರ ಮಾಡಲಿದೆ ಎಂದರು.
ಸರ್ಕಾರಕ್ಕೆ ರೈತರ ಬಿಲ್ ಬಾಕಿ ಉಳಿಸಿಕೊಂಡಿರುವ ಕಾರ್ಖಾನೆ ಮಾಲೀಕರು ಯಾರೇ ಇದ್ದರೂ ಸರಿ. ಅಂತಹವರ ವಿರುದ್ಧ ಕ್ರಮ ಕೈಗೊಳ್ಳುತ್ತೇವೆ. ಇದೇ ರೀತಿಯಲ್ಲಿ ಬೆಳಗಾವಿಯ 9 ಸಕ್ಕರೆ ಕಾರ್ಖಾನೆಗಳ ವಿರುದ್ಧ ಜಿಲ್ಲಾಧಿಕಾರಿ ಮುಟ್ಟುಗೋಲು ಹಾಕಿಕೊಳ್ಳಲು ಸೂಚನೆ ನೀಡಿದ್ದಾರೆ ಎಂದು ತಿಳಿಸಿದರು.