ಬೆಳಗಾವಿ: ಕೋವಿಡ್ ಚಿಕಿತ್ಸೆಗೆ ಸಂಬಂಧಿಸಿದಂತೆ ಆಕ್ಸಿಜನ್, ಔಷಧಿ ಸೇರಿದಂತೆ ಎಲ್ಲಾ ಅಗತ್ಯ ವ್ಯವಸ್ಥೆಯನ್ನು ಸರ್ಕಾರದಿಂದ ಮಾಡಲಾಗಿದೆ. ಯಾವುದೇ ಕಾರಣಕ್ಕೂ ಸೋಂಕಿತರ ಚಿಕಿತ್ಸೆ ಹಾಗೂ ಆರೈಕೆಯಲ್ಲಿ ಸಮಸ್ಯೆಯಾಗದಂತೆ ನಿಗಾವಹಿಸಿ ಎಂದು ಡಿಸಿಎಂ ಗೋವಿಂದ ಕಾರಜೋಳ ಕಟ್ಟುನಿಟ್ಟಿನ ಸೂಚನೆ ನೀಡಿದರು.
ಜಿಲ್ಲೆಯಲ್ಲಿ ಕೋವಿಡ್ ಹಾಗೂ ಪ್ರವಾಹ ನಿರ್ವಹಣೆಗೆ ಸಂಬಂಧಿಸಿದಂತೆ ನಗರದ ಪ್ರವಾಸಿ ಮಂದಿರದಲ್ಲಿ ಸೋಮವಾರ ಹಿರಿಯ ಅಧಿಕಾರಿಗಳ ಜತೆ ನಡೆದ ವರ್ಚುವಲ್ ಸಭೆಯಲ್ಲಿ ಮಾತನಾಡಿದ ಅವರು, ಬಿಮ್ಸ್ ಬಗ್ಗೆ ಅನೇಕ ದೂರುಗಳು ಕೇಳಿಬರುತ್ತಿವೆ. ಈ ಬಗ್ಗೆ ತಕ್ಷಣವೇ ಕ್ರಮಕೈಗೊಳ್ಳಬೇಕು. ಕರ್ತವ್ಯ ನಿರ್ಲಕ್ಷ್ಯ ತೋರುವ ವೈದ್ಯರು ಹಾಗೂ ಇತರೆ ವೈದ್ಯಕೀಯ ಸಿಬ್ಬಂದಿಯನ್ನು ಮುಲಾಜಿಲ್ಲದೆ ಸೇವೆಯಿಂದ ಬಿಡುಗಡೆಗೊಳಿಸಬೇಕು ಎಂದು ಜಿಲ್ಲಾಧಿಕಾರಿಗಳು ಹಾಗೂ ಬಿಮ್ಸ್ ನಿರ್ದೇಶಕರಿಗೆ ಹೇಳಿದರು.
ವಿಪತ್ತು ನಿರ್ವಹಣಾ ಕಾಯ್ದೆಯಡಿ ಕ್ರಮ ತೆಗೆದುಕೊಳ್ಳಲು ಜಿಲ್ಲಾಧಿಕಾರಿಗಳಿಗೆ ಅಧಿಕಾರವಿದೆ. ಇಂತಹ ಸಂಕಷ್ಟದ ಪರಿಸ್ಥಿತಿಯಲ್ಲಿ ಕರ್ತವ್ಯ ಲೋಪ ಎಸಗುವ ವೈದ್ಯರು ಮತ್ತು ಸಿಬ್ಬಂದಿಯನ್ನು ಸೇವೆಯಿಂದ ಬಿಡುಗಡೆಗೊಳಿಸಬೇಕು. ಬಿಮ್ಸ್ ನಿರ್ದೇಶಕರಿಗೆ ಇದು ಸಾಧ್ಯವಾಗದಿದ್ದಲ್ಲಿ ಜಿಲ್ಲಾಧಿಕಾರಿಗಳಿಗೆ ವರದಿ ಸಲ್ಲಿಸಬೇಕು. ಅಂಥವರ ವಿರುದ್ಧ ಜಿಲ್ಲಾಧಿಕಾರಿಗಳು ಕ್ರಮ ತೆಗೆದುಕೊಳ್ಳಲಿದ್ದಾರೆ ಎಂದು ಸಚಿವರು ತಿಳಿಸಿದರು.
ಖಾಸಗಿ ಆಸ್ಪತ್ರೆಗಳಲ್ಲಿ ಸೋಂಕಿತರಿಗೆ ಉಚಿತ ಚಿಕಿತ್ಸೆ!:
ಬಿಮ್ಸ್ನಲ್ಲಿ ಕೋವಿಡ್ ಸಂಬಂಧಿಸಿದ ಬೆಡ್ಗಳು ಭರ್ತಿಯಾಗಿದ್ದರೆ ಆಸ್ಪತ್ರೆಗೆ ಬರುವ ರೋಗಿಗಳಿಗೆ ಸೂಕ್ತ ಮಾರ್ಗದರ್ಶನ ನೀಡಿ ಆಯುಷ್ಮಾನ್ ಭಾರತ-ಆರೋಗ್ಯ ಕರ್ನಾಟಕ ಯೋಜನೆಯಡಿ ನೋಂದಾಯಿಸಲ್ಪಟ್ಟಿರುವ ಖಾಸಗಿ ಆಸ್ಪತ್ರೆಗೆ ಕಳುಹಿಸಬೇಕು. ಇಂತಹ ಆಸ್ಪತ್ರೆಗಳಲ್ಲಿ ಕೂಡ ಸೋಂಕಿತರಿಗೆ ಉಚಿತವಾಗಿ ಚಿಕಿತ್ಸೆ ನೀಡಲಾಗುವುದು ಎಂದು ಸಚಿವ ಗೋವಿಂದ ಕಾರಜೋಳ ಹೇಳಿದರು.