ಬೆಳಗಾವಿ: ಚಳಿಗಾಲದ ಅಧಿವೇಶನದಲ್ಲಿ ವಿಧಾನ ಪರಿಷತ್ತಿನಲ್ಲಿ ದಿನಕ್ಕೆ 15 ಪ್ರಶ್ನೆಗಳಿಗೆ ಮಾತ್ರ ಉತ್ತರ ನೀಡಲು ತೀರ್ಮಾನಿಸಲಾಗಿದೆ ಎಂದು ವಿಧಾನ ಪರಿಷತ್ ಸಭಾಪತಿ ರಘುನಾಥರಾವ್ ಮಲ್ಕಾಪುರ ಹೇಳಿದರು.
ಪ್ರಸತ್ತ ಚಳಿಗಾಲದ ಅಧಿವೇಶನ ಬೆಳಗಾವಿಯ ಸುವರ್ಣ ಸೌಧದಲ್ಲಿ ನಡೆಯುತ್ತಿದ್ದು ಸೋಮವಾರ (ಡಿಸೆಂಬರ್ 19) ರಿಂದ 30ರವರೆಗೆ ನಡೆಯಲಿದೆ. ಸಾಕಷ್ಟು ಮಹತ್ವದ ಚರ್ಚೆಗೆ ಸಮಯ ನೀಡಬೇಕಿರುವ ಹಿನ್ನೆಲೆ ವಿಧಾನ ಪರಿಷತ್ ನಲ್ಲಿ ಪ್ರಶ್ನೋತ್ತರ ಅವಧಿಯನ್ನು ಸೀಮಿತಗೊಳಿಸಲಾಗಿದೆ.
ಪರಿಷತ್ ಸದಸ್ಯರು ಈ ಮಿತಿಯನ್ನು ಅರ್ಥ ಮಾಡಿಕೊಂಡು ಸಹಕರಿಸಬೇಕು. ವಿಧಾನ ಪರಿಷತ್ ಸದಸ್ಯರು 1,452 ಪ್ರಶ್ನೆಗಳನ್ನು ಕೇಳಿದ್ದು, ಅವುಗಳನ್ನು 150ಕ್ಕೆ ಸೀಮಿತಗೊಳಿಸಲಾಗಿದೆ. 902 ಚುಕ್ಕೆ ರಹಿತ ಪ್ರಶ್ನೆಗಳಿಗೆ ಲಿಖಿತ ಉತ್ತರ ನೀಡಲಾಗುವುದು ಎಂದು ಸುವರ್ಣ ಸೌಧದಲ್ಲಿ ಭಾನುವಾರ ನಡೆದ ಮಾಧ್ಯಮಗೋಷ್ಟಿಯಲ್ಲಿ ತಿಳಿಸಿದರು.