ಚಿಕ್ಕೋಡಿ:ಮಹಾರಾಷ್ಟ್ರ ಸರ್ಕಾರದ ಕನ್ನಡ ವಿರೋಧಿ ನೀತಿಯಿಂದ ಕನ್ನಡ ಮಾಧ್ಯಮದ ಮಕ್ಕಳು ತೊಂದರೆ ಅನುಭವಿಸುತ್ತಿದ್ದಾರೆ. ಕನ್ನಡದಲ್ಲಿ ಶಿಕ್ಷಣ ಪಡೆಯುವ ಸಲುವಾಗಿ ದಿನನಿತ್ಯ 20 ಕಿಲೋಮೀಟರ್ ದೂರದಿಂದ ಕ್ರಮಿಸಿ, ಶಾಲೆಗೆ ಬರುವ ಪರಿಸ್ಥಿತಿ ನಿರ್ಮಾಣವಾಗಿದೆ ಎಂದು ಪೋಷಕರು ಮಹಾರಾಷ್ಟ್ರ ಸರ್ಕಾರದ ವಿರುದ್ಧ ಆರೋಪ ಮಾಡಿದ್ದಾರೆ.
ಮಹಾರಾಷ್ಟ್ರದ ಸಾಂಗ್ಲಿ ಜಿಲ್ಲೆಯ ಜತ್ತ ತಾಲೂಕಿನ ಸಿಂಧೂರ ಗ್ರಾಮದಲ್ಲಿ ಹೆಚ್ಚಾಗಿ ಕನ್ನಡಿಗರು ಇದ್ದಾರೆ. ಈ ಗ್ರಾಮದಲ್ಲಿ ಮಹಾರಾಷ್ಟ್ರ ಸರ್ಕಾರ ಕನ್ನಡ ಶಾಲೆಗಳನ್ನು ನೆಪ ಮಾತ್ರಕ್ಕೆ ಕಟ್ಟಿ ಇಲ್ಲಿ ಶಿಕ್ಷಕರ ಕೊರತೆಯನ್ನು ಇಟ್ಟು ಮಕ್ಕಳ ಶಿಕ್ಷಣ ಜೊತೆ ಚೆಲ್ಲಾಟವಾಡುತ್ತಿದೆ ಎಂದು ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಕನ್ನಡ ಮಾಧ್ಯಮದ ಶಾಲೆ ಮಕ್ಕಳು ಹೈರಾಣು ಸಿಂಧೂರ ಗ್ರಾಮದಲ್ಲಿ ಒಂದರಿಂದ ಏಳನೇ ತರಗತಿವರೆಗೆ ಶಾಲಾ ಕಟ್ಟಡವಿದೆ. ಆದ್ರೆ ಶಾಲೆಯಲ್ಲಿ ಒಬ್ಬರು ಅಥವಾ ಇಬ್ಬರು ಶಿಕ್ಷಕರನ್ನು ನೇಮಕ ಮಾಡಲಾಗಿದೆ. ಶಾಲೆಯಲ್ಲಿ ನೀರಿನ ವ್ಯವಸ್ಥೆ, ಆಟದ ಮೈದಾನ, ಮೂಲಭೂತ ಸೌಕರ್ಯ ನೀಡದೆ ಇರುವುದರಿಂದ ಮಕ್ಕಳ ಶಿಕ್ಷಣದ ಮೇಲೆ ಪರಿಣಾಮ ಬೀರುತ್ತಿದೆ ಎಂದು ಗ್ರಾಮಸ್ಥರು ಹೇಳಿದ್ದಾರೆ.
ಮಹಾರಾಷ್ಟ್ರದ ಸಿಂಧೂರ ಗ್ರಾಮದ ಅರವತ್ತಕ್ಕೂ ಹೆಚ್ಚು ಮಕ್ಕಳು 20 ಕಿಲೋಮೀಟರ್ ದೂರದ ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ಕೊಟ್ಟಲಗಿ ಗ್ರಾಮದ ಶಾಲೆಗೆ ಬರುತ್ತಾರೆ. ಪೋಷಕರು ಸ್ವಂತ ಖರ್ಚಿನಿಂದ ತಮ್ಮ ಮಕ್ಕಳು ಶಾಲೆಗೆ ಬರುವ ವ್ಯವಸ್ಥೆಯನ್ನು ಮಾಡಿದ್ದಾರೆ. ಸದ್ಯ ಕರ್ನಾಟಕದ ಗಡಿಗೆ ಹೊಂದಿಕೊಂಡಿರುವ ಸಿಂಧೂರು ಗ್ರಾಮದ ಮಕ್ಕಳ ವಿದ್ಯಾಭ್ಯಾಸಕ್ಕೆ ತೊಂದರೆಯಾಗಿದ್ದು, ಕರ್ನಾಟಕ ಸರ್ಕಾರ ಇತ್ತ ಗಮನ ಹರಿಸಲಿ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಮಹಾ ಕನ್ನಡಿಗರು ಮನವಿ ಸಲ್ಲಿಸಿದ್ದಾರೆ.
ಇದನ್ನೂ ಓದಿ:ಕರ್ನಾಟಕದ ವೃದ್ಧ ರೋಗಿಗೆ ಚಿಕಿತ್ಸೆ ನೀಡಿ ಮಾನವೀಯತೆ ಮೆರೆದ ಮರಾಠಿ ವೈದ್ಯ
ಸಿಂಧೂರ ಗ್ರಾಮ ಸ್ವಾತಂತ್ರ್ಯ ವೀರ ಸೇನಾನಿ ಸಿಂಧೂರ ಲಕ್ಷ್ಮಣ ಅವರ ಗ್ರಾಮವಾಗಿದೆ. ಅಂತಹ ಮಹಾನ್ ವ್ಯಕ್ತಿಯ ಹುಟ್ಟೂರಿನಲ್ಲಿ ಕನ್ನಡ ಮಾಧ್ಯಮದಲ್ಲಿ ಕಲಿಯುತ್ತಿರುವ ಮಕ್ಕಳಿಗೆ ಸದ್ಯ ಅನ್ಯಾಯವಾಗುತ್ತಿದೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ವಿಶೇಷ ಕಾಳಜಿಯಿಂದ ಆ ಮಕ್ಕಳಿಗೆ ನ್ಯಾಯ ಒದಗಿಸಬೇಕೆಂದು ಕನ್ನಡಪರ ಹೋರಾಟಗಾರ ಬಸವರಾಜ ಪಾಟೀಲ್ ಅವರು ಒತ್ತಾಯಿಸಿದ್ದಾರೆ.