ಬೆಳಗಾವಿ: ಕೊರೊನಾ ನಿಯಂತ್ರಣಕ್ಕೆ ಸರ್ಕಾರ ಅಗತ್ಯ ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ಗೃಹ ಸಚಿವ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.
ನಗರದ ಸಾಂಬ್ರಾ ವಿಮಾನ ನಿಲ್ದಾಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವರು, ಬೆಂಗಳೂರು, ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಗಳಲ್ಲಿ ವಿದೇಶದಿಂದ ಬರುವವರ ತಪಾಸಣೆ ನಡೆಸಲಾಗುತ್ತಿದೆ. ಬಸ್ ನಿಲ್ದಾಣ ಸೇರಿದಂತೆ ಇತರೆಡೆಯೂ ತಪಾಸಣೆ ನಡೆಯುತ್ತಿದೆ ಎಂದರು.
ಕೊರೊನಾ ನಿಯಂತ್ರಣಕ್ಕೆ ಸರ್ಕಾರದಿಂದ ಅಗತ್ಯ ಕ್ರಮ: ಗೃಹ ಸಚಿವ ಬೊಮ್ಮಾಯಿ ಹೇಳಿಕೆ ಈ ಭಾಗದ ಸಾಕಷ್ಟು ಜನರು ಬೆಂಗಳೂರಿನ ಐಟಿ ಕಂಪೆನಿಗಳಲ್ಲಿ ಕೆಲಸ ಮಾಡುತ್ತಿದ್ದಾರೆ. ಮನೆಯಲ್ಲಿ ಕುಳಿತು ಕೆಲಸ ಮಾಡುವಂತೆ ಕಂಪನಿಗಳು ತನ್ನ ಉದ್ಯೋಗಿಗಳಿಗೆ ಸೂಚನೆ ನೀಡಿವೆ. ಹೀಗಾಗಿ ಈ ಎಲ್ಲ ಸಿಬ್ಬಂದಿ ಬಸ್ ಮೂಲಕ ತವರಿಗೆ ಬರುತ್ತಿದ್ದು, ಎಲ್ಲರನ್ನೂ ತಪಾಸಣೆ ಮಾಡುವಂತೆ ನಿರ್ದೇಶನ ನೀಡಲಾಗಿದೆ. ಈ ಸಂಬಂಧ ಡಿಜಿ-ಐಜಿಪಿ ನನಗೆ ವರದಿ ನೀಡಿದ್ದು, ಅಗತ್ಯ ಕ್ರಮ ಜರುಗಿಸಲಾಗಿದೆ ಎಂದರು.
ರಾಜ್ಯದಲ್ಲಿ ಕೊರೊನಾ ಎಮರ್ಜೆನ್ಸಿ ಇದೆ. ರೋಗ ನಿಯಂತ್ರಣಕ್ಕೆ ಸೂಕ್ತ ರೀತಿಯ ಕ್ರಮ ಕೈಗೊಳ್ಳಲಾಗಿದೆ. ವೈದ್ಯಕೀಯ, ಆರೋಗ್ಯ, ಶಿಕ್ಷಣ ಇಲಾಖೆ ಎಲ್ಲರೂ ಸಮನ್ವತೆಯಿಂದ ಕೆಲಸ ಮಾಡುತ್ತಿದ್ದಾರೆ. ರಾಜ್ಯದ ಜನತೆ ಕೂಡ ಸರ್ಕಾರದ ಜತೆಗೆ ಕೈ ಜೋಡಿಸಿದ್ದಾರೆ. ಸಾರ್ವಜನಿಕ ಸ್ಥಳಗಳಲ್ಲಿ ಕಾರ್ಯನಿರ್ವಹಿಸುವ ಪೊಲೀಸ್ ಸಿಬ್ಬಂದಿಗೂ ಮುಖಗವಸು ನೀಡಲಾಗುತ್ತಿದೆ. ರಾಜ್ಯದ ಎಲ್ಲಾ ಪೊಲೀಸ್ ಸಿಬ್ಬಂದಿಗೂ ಮಾಸ್ಕ್ ನೀಡಲು ಕ್ರಮ ಜರುಗಿಸಲಾಗುವುದು ಎಂದು ತಿಳಿಸಿದರು.