ಬೆಳಗಾವಿ:ಬೆಳಗಾವಿ ತಾಲ್ಲೂಕಿನ ಬಸುರ್ತೆ ಗ್ರಾಮದಲ್ಲಿ ಮನೆ ಮುಂದಿನ ಗಿಡದಲ್ಲಿನ ಹೂವು ಕಿತ್ತಿದ್ದಾರೆ ಎಂಬ ಕ್ಷುಲ್ಲಕ ಕಾರಣಕ್ಕೆ ಅಂಗನವಾಡಿಯ ಸಹಾಯಕಿಯ ಮೂಗು ಕತ್ತರಿಸಿದ್ದ ಆರೋಪಿಯನ್ನು ಕೊನೆಗೂ ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಜನವರಿ 1 ರಂದು ಅಂಗನವಾಡಿ ಸಹಾಯಕಿ ಸುಗಂಧಾ ಮೋರೆ ಅವರ ಮೇಲೆ ಕುಡಗೋಲಿನಿಂದ ಮಾರಣಾಂತಿಕ ಹಲ್ಲೆ ಮಾಡಿದ್ದ ಆರೋಪಿ ಕಲ್ಯಾಣಿ ಮೋರೆ (44) ಪರಾರಿಯಾಗಿದ್ದ. ಇಂದು (ಗುರುವಾರ) ಆರೋಪಿಯನ್ನು ಕಾಕತಿ ಪೊಲೀಸರು ಬಂಧಿಸಿದ್ದಾರೆ. ಆರೋಪಿ ವಿರುದ್ಧ ಕಲಂ 326 ಐಪಿಸಿ ಅಡಿಯಲ್ಲಿ ಪ್ರಕರಣ ದಾಖಲಾಗಿತ್ತು. ಮಹಿಳೆಯ ಮೂಗನ್ನು ಕುಡಗೋಲಿನಿಂದ ಕತ್ತರಿಸಿರುವ ಹಿನ್ನೆಲೆಯಲ್ಲಿ ಶ್ವಾಸಕೋಶದಲ್ಲಿ ರಕ್ತ ಹೋಗಿ ಸಾವು ಬದುಕಿನ ಮಧ್ಯೆ ಸಂತ್ರಸ್ತೆ ಸುಗಂಧಾ ನರಳಾಡುತ್ತಿದ್ದು, ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಮುಂದುವರಿದಿದೆ.
ಇತ್ತೀಚಿನ ಘಟನೆ, ಆರೋಪಿ ಬಂಧನಕ್ಕೆ ಆಗ್ರಹಿಸಿದ್ದ ಸಿಐಟಿಯು: ವ್ಯಕ್ತಿಯೊಬ್ಬ ಅಂಗನವಾಡಿಯ ಸಹಾಯಕಿಯ ಮೂಗು ಕತ್ತರಿಸಿದ್ದ ಪ್ರಕರಣವನ್ನು ಖಂಡಿಸಿ ರಾಜ್ಯ ಅಂಗನವಾಡಿ ನೌಕರರ ಸಂಘ (ಸಿಐಟಿಯು)ದ ಜಿಲ್ಲಾ ಸಮಿತಿಯಿಂದ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಲಾಗಿತ್ತು. ಸುಗಂಧಾ ಗಜಾನನ ಮೋರೆ ಎಂಬ ಅಂಗನವಾಡಿ ಸಹಾಯಕಿ ಮೇಲೆ ಕ್ಷುಲ್ಲಕ ಕಾರಣಕ್ಕೆ ವ್ಯಕ್ತಿಯೊಬ್ಬ ಮಾರಣಾಂತಿಕವಾಗಿ ಹಲ್ಲೆ ಮಾಡಿದ್ದನು. ಬೆಳಗಾವಿ ಜಿಲ್ಲೆಯಲ್ಲಿ ಮಹಿಳೆಯರಿಗೆ ರಕ್ಷಣೆಯೇ ಇಲ್ಲದ ಸ್ಥಿತಿ ನಿರ್ಮಾಣವಾಗಿದೆ ಎಂದು ಪ್ರತಿಭಟನಾಕಾರರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದರು.