ಬೆಳಗಾವಿ:ಕೊರೊನಾ ವೈರಸ್ ಸೋಂಕು ತಡೆಗೆ ಸರ್ಕಾರ, ಆರೋಗ್ಯ ಇಲಾಖೆ ಅದೆಷ್ಟೇ ಕ್ರಮಗಳನ್ನು ಕೈಗೊಂಡರೂ ಸೋಂಕಿತರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚುತ್ತಲೇ ಇದೆ. ಇನ್ನೊಂದೆಡೆ, ಇನ್ನು ಮುಂದೆ ರಾಜ್ಯದಲ್ಲಿ ಲಾಕ್‌ಡೌನ್ ಜಾರಿ ಇರುವುದಿಲ್ಲ ಎಂದು ಸರ್ಕಾರ ಹೇಳುತ್ತಿದೆ. ಹೀಗಾಗಿ ಜಿಲ್ಲೆಯ ರಾಯಬಾಗ ತಾಲೂಕಿನ ಹಾರೂಗೇರಿ ಪಟ್ಟಣದಲ್ಲಿ ಸ್ವಯಂಪ್ರೇರಿತವಾಗಿ ಲಾಕ್‌ಡೌನ್ ಮಾಡಿಕೊಂಡು ಮಹಾಮಾರಿ ಕೊರೊನಾವನ್ನು ತಡೆಗಟ್ಟುವ ಪ್ರಯತ್ನಕ್ಕೆ ಜನರೇ ಮುಂದಾಗಿದ್ದಾರೆ.
ಕೊರೊನಾ ನಿಯಂತ್ರಣಕ್ಕೆ ಹಾರೂಗೇರಿಯಲ್ಲಿ ಸ್ವಯಂಪ್ರೇರಿತ ಲಾಕ್‌ಡೌನ್
ಹಾರೂಗೇರಿ ಪಟ್ಟಣದ ಮುಖಂಡರು, ವ್ಯಾಪಾರಸ್ಥರು ಹಾಗೂ ಪುರಸಭೆ ಅಧಿಕಾರಿಗಳು ಚರ್ಚೆ ನಡೆಸಿ ಕೊರೊನಾ ತಡೆಗಟ್ಟಲು ಲಾಕ್‌ಡೌನ್ ಅವಶ್ಯಕ ಎಂದು ಒಮ್ಮತದ ನಿರ್ಧಾರಕ್ಕೆ ಬಂದಿದ್ದಾರೆ. ಈ ನಿಟ್ಟಿನಲ್ಲಿ ಸೆ.30 ರಿಂದ ಅ.11 ರವರೆಗೆ ಅಂದರೆ 12 ದಿನಗಳವರೆಗೆ ಸ್ವಯಂಪ್ರೇರಿತ ಲಾಕ್‌ಡೌನ್ ಅನುಸರಿಸುತ್ತಿದ್ದಾರೆ.
ಕೊರೊನಾ ನಿಯಂತ್ರಣಕ್ಕೆ ಸ್ವಯಂ ಪ್ರೇರಿತವಾಗಿ ಲಾಕ್ ಡೌನ್ ಗೆ ಮುಂದಾದ ಹಾರೂಗೇರಿ ಜನ
ಹಾರೂಗೇರಿ ಪಟ್ಟಣದಲ್ಲಿ ಕಳೆದೊಂದು ತಿಂಗಳಲ್ಲಿ ಸಾಕಷ್ಟು ಕೊರೊನಾ ಪ್ರಕರಣಗಳು ಪತ್ತೆಯಾಗಿವೆ. ಕೊರೊನಾ ಸೋಂಕಿನಿಂದ ಪಟ್ಟಣದಲ್ಲಿ ಹತ್ತಕ್ಕೂ ಹೆಚ್ಚು ಜನ ಮೃತಪಟ್ಟಿದ್ದು, ಸಾರ್ವಜನಿಕರಲ್ಲಿ ಆತಂಕ ಮೂಡಿಸಿದೆ.
ಇತ್ತ ಜನರು ಕೂಡ ಸರಿಯಾಗಿ ಮಾಸ್ಕ್ ಬಳಕೆ ಮಾಡದೆ, ಸಾಮಾಜಿಕ ಅಂತರವನ್ನೂ ಕಾಯ್ದುಕೊಳ್ಳದೆ, ಸ್ಯಾನಟೈಸರ್ ಬಳಕೆಯಂತಹ ಮುಂಜಾಗ್ರತಾ ಕ್ರಮಗಳನ್ನು ಪಾಲಿಸುತ್ತಿಲ್ಲ. ಈ ಹಿನ್ನೆಲೆ ಸೋಂಕು ಹರಡುವಿಕೆ ಹೆಚ್ಚಾಗುತ್ತಿದೆ. ಹೀಗಾಗಿ ಲಾಕ್‌ಡೌನ್ ಅಸ್ತ್ರದ ಮೊರೆ ಹೋಗಿದ್ದೇವೆ ಎನ್ನುತ್ತಾರೆ ಪುರಸಭೆ ಮುಖ್ಯಾಧಿಕಾರಿ ಜಿ. ವಿ. ಹಣ್ಣಿಗೇರಿ.