ಬೆಳಗಾವಿ:ಜಿಲ್ಲೆಯಲ್ಲಿ ಕೊರೊನಾ ವೈರಸ್ ಹರಡದಂತೆ ತಡೆಗಟ್ಟಲು ಮೇ 29 ಬೆಳಗ್ಗೆ 6 ರಿಂದ ಮೇ.31 ಬೆಳಿಗ್ಗೆ 6ರವರೆಗೆ ಸಂಪೂರ್ಣ ಲಾಕ್ಡೌನ್ ಘೋಷಿಸಿ ಜಿಲ್ಲಾಧಿಕಾರಿ ಎಂ.ಜಿ.ಹಿರೇಮಠ ಆದೇಶ ಹೊರಡಿಸಿದ್ದಾರೆ.
ಬೆಳಗಾವಿಯಲ್ಲಿ ಮತ್ತೆರಡು ದಿನ ಸಂಪೂರ್ಣ ಲಾಕ್ಡೌನ್; ಡಿಸಿ ಆದೇಶ - ಬೆಳಗಾವಿ ಲಾಕ್ಡೌನ್
ಕೊರೊನಾ ಮಹಾಮಾರಿ ಹತೋಟಿಗೆ ತರುವ ಉದ್ದೇಶದಿಂದ ಬೆಳಗಾವಿಯಲ್ಲಿ ಮತ್ತೆರೆಡು ದಿನ ಲಾಕ್ಡೌನ್ ಘೋಷಣೆ ಮಾಡಿ ಆದೇಶ ಹೊರಡಿಸಲಾಗಿದೆ.
ಜಿಲ್ಲೆಯಾದ್ಯಂತ ಕೋವಿಡ್-19 ಹರಡುವುದನ್ನು ತಡೆಗಟ್ಟಲು ಮೇ31 ಬೆಳಿಗ್ಗೆ 06.00 ಗಂಟೆಯವರೆಗೆ ಸಾರ್ವಜನಿಕರು ಅನಾವಶ್ಯಕವಾಗಿ ಓಡಾಡುವುದನ್ನು ಸಂಪೂರ್ಣವಾಗಿ ನಿಷೇಧಿಸಿ ಆದೇಶಿಸಲಾಗಿದೆ. ಬೆಳಗಾವಿ ಜಿಲ್ಲೆಯಲ್ಲಿ ದಿನೇ ದಿನೇ ಕೋವಿಡ್-19 ಪ್ರಕರಣಗಳು ಹೆಚ್ಚಾಗುತ್ತಿದೆ. ಹೀಗಾಗಿ ಜಿಲ್ಲೆಯಲ್ಲಿ ವಾರಾಂತ್ಯದಲ್ಲಿ ಸಂಪೂರ್ಣ ಲಾಕ್ಡೌನ್ ಘೋಷಣೆ ಮಾಡಲಾಗಿದೆ ಎಂದು ಜಿಲ್ಲಾಧಿಕಾರಿ ತಿಳಿಸಿದ್ದಾರೆ.
ಅಗತ್ಯ ಚಟುವಟಿಕೆಗಳಿಗೆ ಮಾತ್ರ ಅವಕಾಶ:
ಆಸ್ಪತ್ರೆಗಳಿಗೆ ಚಿಕಿತ್ಸೆಗಾಗಿ ಸಂಚರಿಸಲು, ಅಗತ್ಯ ವಸ್ತುಗಳಾದ ಹಾಲು, ಔಷಧಿ ಪೂರೈಕೆ ಮತ್ತು ಖರೀದಿಗೆ ಹಾಗೂ ಅಂತರ್‌ರಾಜ್ಯ ಹಾಗೂ ಅಂತರ್ ಜಿಲ್ಲೆಗಳಿಗೆ ಸಂಚರಿಸುವ ಸರಕು ಮತ್ತು ಸಾಗಾಣಿಕಾ ವಾಹನಗಳಿಗೆ ಮಾತ್ರ ಅವಕಾಶ ನೀಡಲಾಗಿದೆ. ಆದೇಶದಲ್ಲಿ ಸೂಚಿಸಿರುವ ದಿನಗಳಂದು ಈಗಾಗಲೇ ಪೂರ್ವಾನುಮತಿ ಪಡೆದುಕೊಂಡು ನಿಗದಿಪಡಿಸಿರುವಂತಹ ಮದುವೆ ಸಮಾರಂಭಗಳಿಗೆ ಮಾತ್ರ ಅವಕಾಶವಿದೆ ಎಂದು ಜಿಲ್ಲಾಧಿಕಾರಿ ಎಂ.ಜಿ.ಹಿರೇಮಠ ತಿಳಿಸಿದ್ದಾರೆ.
ಆದೇಶ ಉಲ್ಲಂಘಿಸಿದರೆ ಕಾನೂನು ಕ್ರಮ :
ಸಂಪೂರ್ಣ ಲಾಕ್ಡೌನ್ ಆದೇಶವನ್ನು ಉಲ್ಲಂಘಿಸುವವರ ವಿರುದ್ಧ ಭಾರತೀಯ ದಂಡ ಸಂಹಿತೆ 188ರ ಪ್ರಕಾರ ಕ್ರಮ ಜರುಗಿಸಲಾಗುವುದು ಎಂದು ಜಿಲ್ಲಾ ದಂಡಾಧಿಕಾರಿ ಹಾಗೂ ಜಿಲ್ಲಾಧಿಕಾರಿಗಳಾಗಿರುವ ಎಂ.ಜಿ.ಹಿರೇಮಠ ಎಚ್ಚರಿಕೆ ನೀಡಿದ್ದಾರೆ.