ಬೆಳಗಾವಿ : ಗೋಕಾಕ್ ಫಾಲ್ಸ್‌ನಲ್ಲಿ ಪ್ರವಾಸಿಗರ ಸುರಕ್ಷತೆಯ ಬಗ್ಗೆ ಜಿಲ್ಲಾಡಳಿತ ಎಚ್ಚೆತ್ತುಕೊಂಡಿದ್ದು, ಗೋಕಾಕ್ ಫಾಲ್ಸ್ ಗೆ ಎಸ್ಪಿ ಡಾ.ಸಂಜೀವ್ ಪಾಟೀಲ ಭೇಟಿ ನೀಡಿ ಭದ್ರತೆ ಪರಿಶೀಲನೆ ನಡೆಸಿದ್ದಾರೆ. ಈ ವೇಳೆ ಜಲಪಾತದ ಎತ್ತರದಲ್ಲಿ ನಿಂತಿದ್ದ ಪ್ರವಾಸಿಗರನ್ನು ಪೊಲೀಸರು ವಾಪಸ್ ಕಳುಹಿಸಿದರು. ಜಲಪಾತದ ತುದಿಗೆ ತೆರಳದಂತೆ ಪ್ರವಾಸಿಗರಿಗೆ ಎಚ್ಚರಿಕೆ ನೀಡಿದ್ದು, ಬಂಡೆಗಳ ಮೇಲೆ ನಿಂತು ಪೋಟೋ ತೆಗೆಯದಂತೆ ಸೂಚನೆ ನೀಡಿದರು. ಇದೇ ವೇಳೆ ಗೋಕಾಕ್ ಗ್ರಾಮೀಣ ಠಾಣೆ ಪೊಲೀಸರಿಗೆ ಅಗತ್ಯ ಭದ್ರತೆ ಕೈಗೊಳ್ಳುವಂತೆ ಸೂಚಿಸಿದರು.
ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದ ಎಸ್ಪಿ ಡಾ.ಸಂಜೀವ್ ಪಾಟೀಲ, ಪ್ರವಾಸಿಗರು ತುತ್ತತುದಿಗೆ ಹೋಗದಂತೆ ಎಚ್ಚರಿಕೆ ನೀಡಲಾಗಿದೆ. ಸುರಕ್ಷತೆಯ ದೃಷ್ಟಿಯಿಂದ ಕ್ರೈಂಸೀನ್ ಟೇಪ್ ಮತ್ತು ಬ್ಯಾರಿಕೇಡ್ ಅಳವಡಿಸಲಾಗಿದೆ. ಜಲಪಾತದ ಸಮೀಪ ಹೋಗದಂತೆ ಕ್ರಮ ಕೈಗೊಳ್ಳಲಾಗಿದ್ದು, ಹೆಚ್ಚಿನ ಸುರಕ್ಷತೆಗೆ ಕಬ್ಬಿಣದ ಗ್ರಿಲ್ಸ್ ಅಳವಡಿಸುವಂತೆ ಜಿಲ್ಲಾಧಿಕಾರಿಗಳ ಗಮನಕ್ಕೆ ತರಲಾಗಿದೆ. ಪ್ರವಾಸಿಗರು ಸುರಕ್ಷತೆಗಳನ್ನು ಮೀರಿ ವರ್ತಿಸದೇ ಜವಾಬ್ದಾರಿಯಿಂದ ನಡೆದುಕೊಳ್ಳಬೇಕು ಎಂದು ಮನವಿ ಮಾಡಿದರು.