ಬೆಳಗಾವಿ:ಅಭಿಮಾನಿಗಳು ಹಾಗೂ ಜಿಲ್ಲಾ ಬಿಜೆಪಿ ನಾಯಕರ ಮನವಿಗೆ ಮಣೆ ಹಾಕಿರುವ ಬಿಜೆಪಿ ಹೈಕಮಾಂಡ್ ದಿ. ಸುರೇಶ್ ಅಂಗಡಿ ಅವರ ಪತ್ನಿ ಮಂಗಳಾ ಅವರಿಗೆ ಟಿಕೆಟ್ ಘೋಷಣೆ ಮಾಡಿದೆ. ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿಗೆ ಕಾಂಗ್ರೆಸ್ ಟಿಕೆಟ್ ಪಕ್ಕಾ ಆಗಿದ್ದು, ಘಟಾನುಘಟಿ ನಾಯಕರ ಅಖಾಡಲ್ಲಿರುವ ಕಾರಣ ಬೆಳಗಾವಿ ಲೋಕಸಭೆ ಉಪಚುನಾವಣೆ ಕಣ ರಂಗೇರಲಿದೆ.
ಸುರೇಶ್ ಅಂಗಡಿ ಪುತ್ರಿ ಶ್ರದ್ಧಾ ಅವರಿಗೆ ಟಿಕೆಟ್ ಸಿಗಲಿದೆ ಎನ್ನಲಾಗಿತ್ತು. ಆದರೆ ಕಾಂಗ್ರೆಸ್ ಪ್ರಬಲ ಅಭ್ಯರ್ಥಿ ಸತೀಶ್ ಮಣಿಸಲು ಬಿಜೆಪಿ ಅನುಕಂಪ ಅಸ್ತ್ರ ಪ್ರಯೋಗಿಸುತ್ತಿದೆ. ಈ ಕಾರಣಕ್ಕೆ ಸುರೇಶ್ ಅಂಗಡಿ ಅವರ ಕಿರಿಯ ಪುತ್ರಿ ಶ್ರದ್ಧಾ ಬದಲಿಗೆ ಪತ್ನಿ ಮಂಗಳಾ ಅವರಿಗೆ ಟಿಕೆಟ್ ನೀಡಲಾಗಿದೆ. ಅಂಗಡಿ ಕುಟುಂಬಕ್ಕೆ ಬಿಜೆಪಿ ಟಿಕೆಟ್ ನೀಡಿರುವ ಕಾರಣ ಅಭಿಮಾನಿಗಳು ಸಂತಸ ವ್ಯಕ್ತಪಡಿಸಿದ್ದು, ಪಕ್ಷದ ನಾಯಕರಿಗೆ ಅಭಿನಂದನೆ ಸಲ್ಲಿಸಿದ್ದಾರೆ.
ಮಾರ್ಚ್ 29 ರಂದು ನಾಮಪತ್ರ:ಬೆಳಗಾವಿ ಲೋಕಸಭಾ ಉಪಚುನಾವಣೆಗೆ ಕಾಂಗ್ರೆಸ್ನಿಂದ ಜಿಲ್ಲೆಯ ಪ್ರಭಾವಿ ನಾಯಕ ಹಾಗೂ ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿಗೆ ಕಾಂಗ್ರೆಸ್ ಟಿಕೆಟ್ ಅಂತಿಮಗೊಳಿಸಿದೆ. ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ನೇತೃತ್ವದಲ್ಲಿ ಸತೀಶ್ ಜಾರಕಿಹೊಳಿ ಮಾ. 29 ರಂದು ನಾಮಪತ್ರ ಸಲ್ಲಿಸಲಿದ್ದಾರೆ.