ಚಿಕ್ಕೋಡಿ: ಇತಿಹಾಸ ಗೊತ್ತಿಲ್ಲದ ಬಿಜೆಪಿ ನಾಯಕರು ಬಾಯಿಗೆ ಬಂದಂತೆ ಮಾತನಾಡುತ್ತಿದ್ದಾರೆ, ಮೊದಲು ಇದನ್ನು ನಿಲ್ಲಿಸಬೇಕು. ಸಂವಿಧಾನದಿಂದಲೇ ಸಚಿವ ಸಿ.ಟಿ. ರವಿ ಸೇರಿದಂತೆ ಅನೇಕ ಬಿಜೆಪಿ ನಾಯಕರು ರಾಜಕೀಯದ ಚುಕ್ಕಾಣಿ ಹಿಡಿದಿದ್ದಾರೆ. ಅಧಿಕಾರ ಪಡೆದುಕೊಂಡು ಇದೀಗ ಸಂವಿಧಾನ ಬದಲಾಯಿಸುವ ಬಗ್ಗೆ ಮಾತನಾಡುತ್ತಿದ್ದಾರೆ ಎಂದು ಕಾಂಗ್ರೆಸ್ ಪಕ್ಷದ ಹಿರಿಯ ಮುಖಂಡ ಮಹಾವೀರ ಮೋಹಿತೆ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಪಟ್ಟಣದ ಪ್ರವಾಸಿ ಮಂದಿರದಲ್ಲಿ ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿದ ಅವರು, ಸಂವಿಧಾನ ಜಾರಿ ಸಂದರ್ಭದಲ್ಲಿ ಹಿಂದೂಪರ ಸಂಘಟನೆ ಹಾಗೂ ಆರ್ಎಸ್ಎಸ್ ಸಂಘಟನೆ ಬಲಾಢ್ಯವಾಗಿರಲಿಲ್ಲ. ಅಂತಹ ಸಂದರ್ಭದಲ್ಲಿ ಡಾ.ಬಿ.ಆರ್.ಅಂಬೇಡ್ಕರ್ ಅವರು ಸಂವಿಧಾನವನ್ನು ರಚನೆ ಮಾಡಿದ್ದಾರೆ. ಸಚಿವ ಸಿ.ಟಿ. ರವಿ ಸಂವಿಧಾನದ ಬಗ್ಗೆ ಬೇಜವಾಬ್ದಾರಿ ಹೇಳಿಕೆ ನೀಡುವ ಮೂಲಕ ಜನರ ದಿಕ್ಕು ತಪ್ಪಿಸುವ ಕಾರ್ಯ ಮಾಡುತ್ತಿದ್ದಾರೆ ಎಂದರು.