ಬೆಳಗಾವಿ:ಜಿಲ್ಲೆಯ ವಿವಿಧ ವಿಧಾನಸಭೆ ಕ್ಷೇತ್ರಗಳ ಘಟಾನುಘಟಿ ನಾಯಕರು ಬುಧವಾರ ತಮ್ಮ ಬೆಂಬಲಿಗರು ಮತ್ತು ಪಕ್ಷದ ಕಾರ್ಯಕರ್ತರೊಂದಿಗೆ ಬೃಹತ್ ಮೆರವಣಿಗೆ ನಡೆಸಿ ಶಕ್ತಿ ಪ್ರದರ್ಶನ ಮಾಡುವ ಮೂಲಕ ತಮ್ಮ ಉಮೇದುವಾರಿಕೆ ಸಲ್ಲಿಸಿದರು. ಕಿತ್ತೂರು ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಬಾಬಾಸಾಹೇಬ ಪಾಟೀಲ್ ಅವರಿಂದು ಸೋಮವಾರ ಪೇಟೆಯಿಂದ ತೆರೆದ ವಾಹನದಲ್ಲಿ ಚೆನ್ನಮ್ಮನ ಕೂಟ ಮಾರ್ಗವಾಗಿ ರಾಷ್ಟ್ರೀಯ ಹೆದ್ದಾರಿ ಪಕ್ಕದ ಚೆನ್ನಮ್ಮ ವೃತ್ತದವರೆಗೂ ಬೃಹತ್ ರ್ಯಾಲಿ ನಡೆಸಿದರು. ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್, ಕೆಪಿಸಿಸಿ ಸದಸ್ಯೆ ರೋಹಿಣಿ ಪಾಟೀಲ್ ಸೇರಿದಂತೆ ನೂರಾರು ಮುಖಂಡರು ಮತ್ತು ಪಕ್ಷದ ಕಾರ್ಯಕರ್ತರು ಸಾಥ್ ನೀಡಿದರು.
ಲಕ್ಷ್ಮೀ ಹೆಬ್ಬಾಳ್ಕರ್ ಮಾತನಾಡಿ, ಮುಂಬರುವ ದಿನಗಳಲ್ಲಿ ಕಾಂಗ್ರೆಸ್ ಸರ್ಕಾರ ನೂರಕ್ಕೆ ನೂರರಷ್ಟು ಅಧಿಕಾರಕ್ಕೆ ಬರುತ್ತದೆ. ಮಾಜಿ ಡಿಸಿಎಂ ಲಕ್ಷ್ಮಣ ಸವದಿ ಹಾಗೂ ಮಾಜಿ ಮುಖ್ಯಮಂತ್ರಿ ಜಗದೀಶ ಶೆಟ್ಟರ್ ಅವರು ಕಾಂಗ್ರೆಸ್ ಪಕ್ಷ ಸೇರಿರುವುದೇ ಇದಕ್ಕೆ ಸಾಕ್ಷಿ. ಈ ರಾಜ್ಯ, ದೇಶ ಮತ್ತು ರೈತರು ಉಳಿಯಬೇಕೆಂದರೆ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬರಬೇಕು. ಭ್ರಷ್ಟ ಬಿಜೆಪಿ ಸರ್ಕಾರವನ್ನು ರಾಜ್ಯದಿಂದ ಕಿತ್ತೊಗೆಯೋಣ. ಬಾಬಾಸಾಹೇಬ ಪಾಟೀಲರು ಉತ್ತಮ ಅಭ್ಯರ್ಥಿ ಆಗಿದ್ದು, ಎಲ್ಲರಿಗೂ ಕೈ ಮುಗಿದು ವಿನಂತಿ ಮಾಡಿಕೊಳ್ಳುತ್ತೇನೆ. ಬಾಬಾಸಾಹೇಬ ಪಾಟೀಲರನ್ನು ಗೆಲ್ಲಿಸಿ ಎಂದು ಕೇಳಿಕೊಂಡರು. ಬಳಿಕ ರಾಣಿ ಚೆನ್ನಮ್ಮ ಪುತ್ಥಳಿಗೆ ಮಾಲಾರ್ಪಣೆ ಮಾಡಿ ತಹಶೀಲ್ದಾರ್ ಕಚೇರಿಯಲ್ಲಿ ಬಾಬಾಸಾಹೇಬ ಪಾಟೀಲ್ ತಮ್ಮ ನಾಮಪತ್ರ ಸಲ್ಲಿಸಿದರು.
ರಾಮದುರ್ಗ ಕ್ಷೇತ್ರದ ಬಿಜೆಪಿ ಪಕ್ಷದ ಅಚ್ಚರಿಯ ಅಭ್ಯರ್ಥಿ ಚಿಕ್ಕರೇವಣ್ಣ ನಾಮಪತ್ರ ಸಲ್ಲಿಸುವ ಮುನ್ನ ಪಟ್ಟಣದಲ್ಲಿ ಇವತ್ತು ಬೃಹತ್ ರೋಡ್ ಶೋ ನಡೆಸಿ ನಂತರ ತಹಸೀಲ್ದಾರ್ ಕಚೇರಿಯಲ್ಲಿ ತಮ್ಮ ನಾಮಪತ್ರ ಸಲ್ಲಿಕೆ ಮಾಡಿದರು. ಈ ವೇಳೆ ಹಲವು ಬಿಜೆಪಿ ಮುಖಂಡರು, ಸಾವಿರಾರು ಕಾರ್ಯಕರ್ತರು ರೋಡ್ ಶೋನಲ್ಲಿ ಭಾಗಿಯಾಗಿದ್ದರು.