ಬೆಳಗಾವಿ: ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ವಿರುದ್ಧ 'ಸಿಡಿ'ದೆದ್ದಿರುವ ಮಾಜಿ ಸಚಿವ ರಮೇಶ್ ಜಾರಕಿಹೊಳಿ ಇಂದು (ಗುರುವಾರ) ದೆಹಲಿಗೆ ಪ್ರಯಾಣ ಬೆಳೆಸಿದ್ದಾರೆ. ಮಧ್ಯಾಹ್ನ ಬೆಂಗಳೂರಿಂದ ದೆಹಲಿಗೆ ತೆರಳಿರುವ ಅವರು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ಭೇಟಿಯಾಗಲಿದ್ದಾರೆ ಎಂಬ ಮಾಹಿತಿ ದೊರೆತಿದೆ. ಬಜೆಟ್ ಅಧಿವೇಶನ ಹಿನ್ನೆಲೆಯಲ್ಲಿ ಅಮಿತ್ ಶಾ ಬ್ಯುಸಿಯಾಗಿದ್ದು, ಭೇಟಿ ಸಮಯಕ್ಕಾಗಿ ಕಾಯುತ್ತಿದ್ದಾರೆ ಎನ್ನಲಾಗುತ್ತಿದೆ.
ಇದನ್ನೂ ಓದಿ:ಸಿಡಿ ಪ್ರಕರಣ: ಸಿಬಿಐ ತನಿಖೆ ಕುರಿತು ಸಿಎಂ ಜೊತೆ ಚರ್ಚಿಸಿ ನಿರ್ಧಾರ- ಆರಗ ಜ್ಞಾನೇಂದ್ರ
ತಮ್ಮ ವಿರುದ್ಧ ಬಿಡುಗಡೆಯಾಗಿದ್ದ ಸಿಡಿ ಷಡ್ಯಂತ್ರದ ಹಿಂದೆ ಡಿ.ಕೆ.ಶಿವಕುಮಾರ್ ಕೈವಾಡವಿದೆ ಎಂದು ಆರೋಪ ಮಾಡಿರುವ ಅವರು, ಈ ಬಗ್ಗೆ ತಮ್ಮ ಬಳಿ ಸಾಕ್ಷ್ಯ ಕೂಡ ಇದೆ ಎಂದಿದ್ದಾರೆ. ಹಾಗಾಗಿ ಪ್ರಕರಣವನ್ನು ಸಿಬಿಐ ತನಿಖೆಗೆ ಶಿಫಾರಸು ಮಾಡುವಂತೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸೇರಿದಂತೆ ಕೇಂದ್ರದ ಮೇಲೆಯೂ ಒತ್ತಡ ಹೇರುತ್ತಿದ್ದಾರೆ. ಈ ಬಗ್ಗೆ ಬೊಮ್ಮಾಯಿ ಅವರು ಕೂಡ ನಾವು ನಿಮ್ಮ ಬೆಂಬಲಕ್ಕಿದ್ದೇವೆ, ಸ್ವಲ್ಪ ಸಮಯ ನೀಡಿ ಅಂತ ಅಭಯ ನೀಡಿದ್ದಾರೆ. ಇದರ ಬೆನ್ನಲ್ಲೇ ಇದೀಗ ದೆಹಲಿಗೆ ತೆರಳಿರುವ ಅವರು, ಅಮಿತ್ ಶಾ ಅವರಲ್ಲಿ ಈ ಪ್ರಕರಣವನ್ನು ಆದಷ್ಟು ಬೇಗ ಸಿಬಿಐಗೆ ವರ್ಗಾಯಿಸುವಂತೆ ಮನವಿ ಮಾಡಿಕೊಳ್ಳಲಿದ್ದಾರೆ ಎಂಬ ಮಾಹಿತಿ ಇದೆ.