ಬೆಂಗಳೂರು:ಜನವರಿ 26 ರಂದು ಹೊಸದಿಲ್ಲಿಯಲ್ಲಿ ನಡೆಯಲಿರುವ ಗಣರಾಜ್ಯೋತ್ಸವ ಪಥಸಂಚಲನದಲ್ಲಿ ರಾಜ್ಯದ ಸ್ತಬ್ಧಚಿತ್ರ ಪ್ರದರ್ಶನಕ್ಕೆ ಅವಕಾಶ ನಿರಾಕರಣೆ ಮಾಡುವ ಮೂಲಕ ಕೇಂದ್ರ ಸರ್ಕಾರವು ನಾಡಿನ ಏಳು ಕೋಟಿ ಕನ್ನಡಿಗರಿಗೆ ಅಪಮಾನ ಮಾಡಿದೆ ಎಂದು ಸಿಎಂ ಸಿದ್ದರಾಮಯ್ಯ ಆಕ್ಷೇಪ ವ್ಯಕ್ತಪಡಿಸಿದ್ದಾರೆ.
ಎಕ್ಸ್ ಪೋಸ್ಟ್ ಮೂಲಕ ಅಸಮಾಧಾನ ಹೊರಹಾಕಿದ ಅವರು, ಕಳೆದ ವರ್ಷ ಕೂಡ ಮೊದಲಿಗೆ ರಾಜ್ಯದ ಸ್ತಬ್ಧಚಿತ್ರ ಪ್ರದರ್ಶನಕ್ಕೆ ಅವಕಾಶ ನಿರಾಕರಣೆ ಮಾಡಿ, ವಿವಾದದ ಸ್ವರೂಪ ಪಡೆದ ನಂತರ ಅನುಮತಿ ನೀಡಿತ್ತು. ಈ ಬಾರಿ ಮತ್ತೆ ಕನ್ನಡಿಗರನ್ನು ಅವಮಾನಿಸುವ ತನ್ನ ಚಾಳಿಯನ್ನು ಮುಂದುವರೆಸಿದೆ ಎಂದು ಕಿಡಿ ಕಾರಿದರು.
ನವಕರ್ನಾಟಕದ ಅಭಿವೃದ್ಧಿಯ ದೃಷ್ಠಾರ, ಸಾಮಾಜಿಕ ನ್ಯಾಯದ ಹರಿಕಾರ, ನೀರಾವರಿ, ಬ್ಯಾಂಕಿಂಗ್, ಮೂಲಸೌಕರ್ಯದ ಕ್ಷೇತ್ರಗಳ ಅಭಿವೃದ್ಧಿಯ ಮೂಲಕ ಮೈಸೂರನ್ನು ಒಂದು ಮಾದರಿ ರಾಜ್ಯವಾಗಿ ಕಟ್ಟಿದ್ದ ನಾಲ್ವಡಿ ಕೃಷ್ಣರಾಜ ಒಡೆಯರ್ ಅವರ ಸ್ತಬ್ಧಚಿತ್ರ, ಕಿತ್ತೂರು ಚೆನ್ನಮ್ಮ, ಬ್ರಾಂಡ್ ಬೆಂಗಳೂರು ಹಾಗೂ ಕರ್ನಾಟಕದ ನೈಸರ್ಗಿಕ ವ್ಯವಸ್ಥೆ ಒಳಗೊಂಡಂತೆ 4 ಸ್ತಬ್ಧಚಿತ್ರ ಮಾದರಿಗಳಿಗೆ ಅವಕಾಶ ಕೋರಿ ಕೇಂದ್ರಕ್ಕೆ ಮನವಿ ಮಾಡಲಾಗಿತ್ತು. ಆದರೆ, ಕೇಂದ್ರದ ಆಯ್ಕೆ ಸಮಿತಿಯು ನಮ್ಮ ಮನವಿಯನ್ನು ತಿರಸ್ಕರಿಸಿ, ನಾಡಿನ ಅಸೀಮ ಸಾಧನೆ ಮತ್ತು ಮಾದರಿ ಸಾಧಕರನ್ನು ದೇಶಕ್ಕೆ ಪರಿಚಯಿಸುವ ಅವಕಾಶವನ್ನು ಕಸಿದುಕೊಂಡಿದೆ ಎಂದು ದೂರಿದ್ದಾರೆ.