ಬೆಳಗಾವಿ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಇಂದಿನಿಂದ ಎರಡು ದಿನ ಬೆಳಗಾವಿ ಪ್ರವಾಸ ಕೈಗೊಳ್ಳಲಿದ್ದಾರೆ. ಹೀಗಾಗಿ ಸಿಎಂ ಬೊಮ್ಮಾಯಿಗೆ ನೆರೆ ಸಂತ್ರಸ್ತರು, ರೈತರಿಂದ ಪ್ರತಿಭಟನೆ ಬಿಸಿ ತಟ್ಟುವ ಸಾಧ್ಯತೆಯಿದೆ.
ನೆರೆಸಂತ್ರಸ್ತರು, ಕಬ್ಬು ಬೆಳೆಗಾರರು ಇಂದಿನಿಂದ ಅಹೋರಾತ್ರಿ ಪ್ರತಿಭಟನೆಗೆ ನಿರ್ಧರಿಸಿದ್ದಾರೆ. ಸಿಎಂ ಬಸವರಾಜ ಬೊಮ್ಮಾಯಿ ಗಮನ ಸೆಳೆಯುವ ನಿಟ್ಟಿನಲ್ಲಿ ರೈತರು ಪ್ರತಿಭಟನೆ ಹಮ್ಮಿಕೊಂಡಿದ್ದಾರೆ. ಕರ್ನಾಟಕ ರಾಜ್ಯ ರೈತ ಸಂಘ ಹಸಿರು ಸೇನೆ ನೇತೃತ್ವದಲ್ಲಿ ಪ್ರತಿಭಟನೆಯಲ್ಲಿ ಬೆಳಗಾವಿ ಹಾಗೂ ಬಾಗಲಕೋಟೆ ಜಿಲ್ಲೆಯ 200ಕ್ಕೂ ಹೆಚ್ವು ರೈತರು ಭಾಗಿಯಾಗುವ ಸಾಧ್ಯತೆ ಇದೆ.
ಬೆಳಗ್ಗೆ 9 ಗಂಟೆಯಿಂದ ಬೆಳಗಾವಿ ಡಿಸಿ ಕಚೇರಿ ಎದುರು ರೈತರು ಪ್ರತಿಭಟನೆ ನಡೆಸುತ್ತಿದ್ದಾರೆ. ಸಕ್ಕರೆ ಆಯುಕ್ತಾಲಯ ಕಚೇರಿ ಬೆಳಗಾವಿಗೆ ಸ್ಥಳಾಂತರಿಸಬೇಕು ಹಾಗೂ 2019 ಹಾಗೂ 2021ರ ಪ್ರವಾಹದ ನೆರೆಸಂತ್ರಸ್ತರಿಗೆ ಪರಿಹಾರ ನೀಡಬೇಕು, ಕಬ್ಬು ಬೆಳೆಗಾರರಿಂದ ಬಾಕಿ ಉಳಿಸಿಕೊಂಡ ಸಕ್ಕರೆ ಕಾರ್ಖಾನೆಗಳಿಂದ ಹಣ ಬಿಡುಗಡೆಗೆ ಕ್ರಮ ವಹಿಸುವುದು ಸೇರಿದಂತೆ ಈ ಮೂರು ಪ್ರಮುಖ ಬೇಡಿಕೆಗಳನ್ನು ಇಟ್ಟುಕೊಂಡು ಪ್ರತಿಭಟನೆಗೆ ರೈತರು ನಿರ್ಧರಿಸಿದ್ದಾರೆ.