ಕರ್ನಾಟಕ

karnataka

ETV Bharat / state

ನನ್ನ ಹೇಳಿಕೆ ತಿರುಚಿದ ತೇಜಸ್ವಿ ಸೂರ್ಯ ಸಾರ್ವಜನಿಕವಾಗಿ ಕ್ಷಮೆ ಕೇಳಬೇಕು: ಸಿಎಂ ಸಿದ್ದರಾಮಯ್ಯ

ಬಿಜೆಪಿ ಸಂಸದ ತೇಜಸ್ವಿ ಸೂರ್ಯ ಅವರು ತಪ್ಪರ್ಥ ಬರುವಂತೆ ಹುತಾತ್ಮ ಯೋಧ ಪ್ರಾಂಜಲ್ ಅವರಿಗೆ ಸಂಬಂಧಿಸಿದ ನನ್ನ ಹೇಳಿಕೆಯನ್ನು ತಿರುಚಿ ಸಾಮಾಜಿಕ ಮಾಧ್ಯಮಗಳಲ್ಲಿ ಹರಿಬಿಟ್ಟು ವಿಕೃತಿ ಮೆರೆದಿದ್ದಾರೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ.

CM Siddaramaiah, MP Tejasvi Surya
ಸಿಎಂ ಸಿದ್ದರಾಮಯ್ಯ,ಸಂಸದ ತೇಜಸ್ವಿಸೂರ್ಯ

By ETV Bharat Karnataka Team

Published : Dec 5, 2023, 9:25 PM IST

ಬೆಳಗಾವಿ: ಹುತಾತ್ಮ ಯೋಧ ಪ್ರಾಂಜಲ್ ಮೇಲಿನ ನನ್ನ ಹೇಳಿಕೆಯನ್ನು ತಿರುಚಿದ ಸಂಸದ ತೇಜಸ್ವಿ ಸೂರ್ಯ ಕ್ಷಮೆ ಕೇಳಬೇಕು ಎಂದು ಸಿಎಂ ಸಿದ್ದರಾಮಯ್ಯ ಆಗ್ರಹಿಸಿದ್ದಾರೆ. ಈ ಕುರಿತು ಸಾಮಾಜಿಕ ಜಾಲತಾಣ ಎಕ್ಸ್‌ ಖಾತೆಯಲ್ಲಿ ಬರೆದುಕೊಂಡಿರುವ ಸಿಎಂ, ರಾಜಕೀಯ ದುರುದ್ದೇಶದಿಂದ ಈ ವಿಡಿಯೋವನ್ನು ತಿರುಚಿ ಹಂಚಿಕೊಂಡಿರುವ ತೇಜಸ್ವಿ ಸೂರ್ಯ ಅವರು ಪ್ರಾಂಜಲ್ ಮತ್ತು ಅವರ ಕುಟುಂಬ ವರ್ಗಕ್ಕೆ ಮಾತ್ರವಲ್ಲ, ಸಮಸ್ತ ಯೋಧ ಸಮುದಾಯಕ್ಕೆ ಅವಮಾನ ಮಾಡಿದ್ದಾರೆ. ಈ ಸಂಸದನಲ್ಲಿ ಕಿಂಚಿತ್ತು ಮಾನ ಮರ್ಯಾದೆ ಏನಾದರೂ ಉಳಿದುಕೊಂಡಿದ್ದರೆ ತಾನು ಮಾಡಿರುವ ತಪ್ಪು ಒಪ್ಪಿಕೊಂಡು ಸಾರ್ವಜನಿಕವಾಗಿ ಕ್ಷಮೆ ಕೇಳಬೇಕೆಂದು ಒತ್ತಾಯಿಸಿದ್ದಾರೆ.

ಹುತಾತ್ಮರಾದ ವೀರಯೋಧ ಪ್ರಾಂಜಲ್ ಅವರ ಕುರಿತಾಗಿರುವುದು ಎಂದು ಗೊತ್ತಾದ ನಂತರ ರಾಜ್ಯ ಸರ್ಕಾರ ಪರಿಹಾರ ನೀಡಲು ಬದ್ಧವೆಂದು ತಿಳಿಸಿದ್ದು ಮಾತ್ರವಲ್ಲ, ಬೇರೆ ಯಾವ ರಾಜ್ಯದಲ್ಲಿಯಾದರೂ ಹುತಾತ್ಮ ಯೋಧರಿಗೆ ಒಂದು ಕೋಟಿ ರೂಪಾಯಿ ಪರಿಹಾರ ನೀಡಿರುವುದು ಗೊತ್ತಾದರೆ ಅಷ್ಟೇ ಮೊತ್ತವನ್ನು ನೀಡಲು ಸಿದ್ಧ ಎಂದು ತಿಳಿಸಿದ್ದೇನೆ. ನಮ್ಮ ಅಧಿಕಾರಿಗಳು ಪರಿಹಾರದ ಚೆಕ್ ಅನ್ನು ಪ್ರಾಂಜಲ್ ಅವರ ಕುಟುಂಬಕ್ಕೆ ನೀಡಿದ್ದಾರೆ ಎಂದು ತಿಳಿಸಿದ್ದಾರೆ.

ಪತ್ರಕರ್ತರ ಮುಂದೆ ನಾನು ನೀಡಿರುವ ಹೇಳಿಕೆ ಪೂರ್ಣ ವಿಡಿಯೋವನ್ನು ಇಲ್ಲಿ ಹಂಚಿಕೊಂಡಿದ್ದೇನೆ. ದೇಶ, ದೇವರು, ಸೈನಿಕರು ಎಲ್ಲವೂ ಭಾರತೀಯ ಜನತಾ ಪಕ್ಷಕ್ಕೆ ರಾಜಕೀಯ ವ್ಯಾಪಾರದ ಸರಕುಗಳು ಮಾತ್ರ ಎನ್ನುವುದನ್ನು ದೇಶದ ಜನರು ಅರ್ಥಮಾಡಿಕೊಂಡಿದ್ದಾರೆ. ಪ್ರಾಂಜಲ್ ಮೃತದೇಹವನ್ನು ಇಲ್ಲಿಗೆ ತಂದಿದ್ದ ದಿನ ಪ್ರಧಾನಿ ನರೇಂದ್ರ ಮೋದಿ ಅವರು ಬೆಂಗಳೂರಿನಲ್ಲಿ ಇದ್ದರೂ ಅಂತಿಮ ದರ್ಶನ ಮಾಡಿ ಹೆತ್ತವರಿಗೆ ಸಾಂತ್ವನ ಹೇಳುವ ಸೌಜನ್ಯ ತೋರಲಿಲ್ಲ. ಇದನ್ನು ನಾವು ವಿವಾದ ಮಾಡಲು ಹೋಗಲಿಲ್ಲ. ಆದರೆ ಈ ಬಿಜೆಪಿ ಸಂಸದ ಒಬ್ಬ ವೀರಯೋಧನ ಬಲಿದಾನವನ್ನು ಕೂಡಾ ತನ್ನ ಸುಳ್ಳು ಸುದ್ದಿಯ ಫ್ಯಾಕ್ಟರಿಗೆ ಸರಕಾಗಿ ಮಾಡಿ ನನ್ನ ಮಾನಹಾನಿಗೆ ಪ್ರಯತ್ನಿಸಿರುವುದು ಅಕ್ಷಮ್ಯ ಅಪರಾಧ. ಇಂತಹ ಸುಳ್ಳುಕೋರರು ನಮ್ಮ ನಾಡಿಗೆ ಕಳಂಕ. ಇವರಿಗೆ ರಾಜ್ಯದ ಜನರೇ ತಕ್ಕ ಪಾಠ ಕಲಿಸಬೇಕು ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಇದನ್ನೂಓದಿ:ಅಲ್ಪಸಂಖ್ಯಾತರನ್ನೂ ಸೇರಿದಂತೆ ಎಲ್ಲರಿಗೂ ರಕ್ಷಣೆ ನೀಡುವುದಾಗಿ ಹೇಳಿದ್ದೇನೆ: ಸಿಎಂ ಸಿದ್ದರಾಮಯ್ಯ

ABOUT THE AUTHOR

...view details