ಅಥಣಿ(ಬೆಳಗಾವಿ): ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಮಾಜಿ ಸಿಎಂ ಬಿ ಎಸ್ ಯಡಿಯೂರಪ್ಪ ಅವರು ಕೈ ಮಿಲಾಯಿಸಿ ಸಮ್ಮಿಶ್ರ ಸರ್ಕಾರ ಕೆಡವಿ ಬಾಂಬೆಯಲ್ಲಿ 25 ಕೋಟಿ ರೂಪಾಯಿ ಖರ್ಚು ಮಾಡಿದ್ದು, ಏನು ದೇಣಿಗೆ ಕೊಟ್ಟಿದ್ದಾರೆ? ಹಾಲು ಕುಡಿದ ಮಕ್ಕಳು ಬದುಕುವುದಿಲ್ಲ, ಇನ್ನು ವಿಷ ಕುಡಿದ ಮಕ್ಕಳು ಬದುಕುತ್ತಾವಾ ಎಂದು ಜೆಡಿಎಸ್ ರಾಜ್ಯಾಧ್ಯಕ್ಷ ಸಿ ಎಂ ಇಬ್ರಾಹಿಂ ಮಾಜಿ ಸಿಎಂ ಯಡಿಯೂರಪ್ಪ ಮತ್ತು ಸಿದ್ದರಾಮಯ್ಯ ವಿರುದ್ಧ ಹರಿಹಾಯ್ದರು.
ಭಾನುವಾರ ಜಿಲ್ಲೆಯ ಹುಕ್ಕೇರಿ ಮತ್ತು ಚಿಕ್ಕೋಡಿ ಪಟ್ಟಣದಲ್ಲಿ ಮಾಧ್ಯಮಗಳ ಜೊತೆ ಮಾತನಾಡುತ್ತ, ಜೆಡಿಎಸ್ ಪಕ್ಷ ಯಾವುದೇ ಬಿ ಟೀಂ ಅಲ್ಲ, ಸಿದ್ದರಾಮಯ್ಯ ಅವರೇ ರಾಜ್ಯಸಭೆ ಚುನಾವಣೆಯಲ್ಲಿ ಬಿಜೆಪಿಗೆ ಮತ ಹಾಕಿಸಿದ್ದಾರೆ. ಕಾಂಗ್ರೆಸ್ ಪಕ್ಷವೇ ಬಿ ಟೀಂ ಎಂಬುದು ಹಲವಾರು ಬಾರಿ ಸಾಬೀತಾಗಿದೆ ಎಂದು ತಿರುಗೇಟು ಕೊಟ್ಟರು.
ಉತ್ತರ ಕರ್ನಾಟಕ ಭಾಗದಲ್ಲಿ ಅಭ್ಯರ್ಥಿಗಳನ್ನು ಹಾಕಿ 2023ಕ್ಕೆ ಗೆಲುವು ಸಾಧಿಸುವುದು ನಾವೇ. ಮುಂದಿನ ಮುಖ್ಯಮಂತ್ರಿ ಕುಮಾರಸ್ವಾಮಿ ಅವರೇ ಎಂದು ವಿಶ್ವಾಸ ವ್ಯಕ್ತಪಡಿಸಿದರು.