ಬೆಳಗಾವಿ: ವಿಧಾನ ಪರಿಷತ್ ಚುನಾವಣೆಗೆ ಜಿಲ್ಲೆಯಲ್ಲಿ ಒಂದು ಸ್ಥಾನಕ್ಕೆ ಮಾತ್ರ ಕಾಂಗ್ರೆಸ್ ಸ್ಪರ್ಧಿಸಲಿದೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ (KPCC President Satish Jarkiholi) ಸ್ಪಷ್ಟಪಡಿಸಿದ್ದಾರೆ.
ಕಾಂಗ್ರೆಸ್ ಭವನದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಎರಡೂ ಕ್ಷೇತ್ರಗಳಿಗೆ ಸ್ಪರ್ಧಿಸುವುದರಿಂದ ಬಿಜೆಪಿಗೆ ಲಾಭವಾಗಲಿದೆ. ಹೀಗಾಗಿ, ಒಂದು ಕ್ಷೇತ್ರಕ್ಕೆ ಮಾತ್ರ ಸ್ಪರ್ಧಿಸಲಿದ್ದೇವೆ ಎಂದು ತಿಳಿಸಿದರು. ಒಂದು ಸ್ಥಾನ ಗೆಲ್ಲಲು ಸುಮಾರು 2200 ಮತಗಳು ಬೇಕು. ಕಾಂಗ್ರೆಸ್‌ನಿಂದ ಇದಕ್ಕಿಂತ ಹೆಚ್ಚಿನ ಸದಸ್ಯರು ಆಯ್ಕೆಯಾಗಿದ್ದಾರೆ. ಹೀಗಾಗಿ, ಒಂದು ಸ್ಥಾನ ಗೆಲ್ಲಲು ನಮಗೆ ಯಾವುದೇ ಸಮಸ್ಯೆ ಇಲ್ಲ ಎಂದರು.
ಟಿಕೆಟ್ ಗಾಗಿ 8 ಆಕಾಂಕ್ಷಿಗಳಿಂದ ಅರ್ಜಿ:
ಕಾಂಗ್ರೆಸ್‌ನಿಂದ ಟಿಕೆಟ್‌ಗಾಗಿ ಜಿಲ್ಲೆಯಲ್ಲಿ ಒಟ್ಟು 8 ಆಕಾಂಕ್ಷಿಗಳು ಅರ್ಜಿ ಸಲ್ಲಿಸಿದ್ದಾರೆ. ಬೆಳಗಾವಿ ಲೋಕಸಭಾ ವ್ಯಾಪ್ತಿಯಲ್ಲಿನ ಮೂವರು ಹಾಗೂ ಚಿಕ್ಕೋಡಿ ಲೋಕಸಭಾ ವ್ಯಾಪ್ತಿಯಿಂದ ಐವರು ಅರ್ಜಿ ಸಲ್ಲಿಕೆ ಮಾಡಿದ್ದಾರೆ. ಇದೇ 14 ರಂದು ಕೆಪಿಸಿಸಿಯಿಂದ ಶಾಸಕರು ಹಾಗೂ ಮಾಜಿ ಶಾಸಕರ ಸಭೆ ಕರೆಯಲಾಗಿದೆ. ಟಿಕೆಟ್ ಆಕಾಂಕ್ಷಿಗಳು ಕೂಡ ಭಾಗವಹಿಸಲಿದ್ದಾರೆ. ಎಲ್ಲರ ಅಭಿಪ್ರಾಯ ಪಡೆದು, ತೀರ್ಮಾನ ಕೈಗೊಳ್ಳಲಾಗುವುದು. ಗೆಲ್ಲುವವರಿಗೆ ಪ್ರಾಮುಖ್ಯತೆ ನೀಡಲಾಗುವುದು ಎಂದು ತಿಳಿಸಿದರು.
ಮಹಾನಗರ ಪಾಲಿಕೆಗೆ ಅಭ್ಯರ್ಥಿಗಳು ಆಯ್ಕೆಯಾಗಿದ್ದಾರೆ. ಆದರೆ, ಅವರು ಇನ್ನೂ ಪ್ರಮಾಣವಚನ ಸ್ವೀಕರಿಸಿಲ್ಲ. ಸದ್ಯ ಚುನಾವಣೆ ಘೊಷಣೆಯಾಗಿದೆ. ಅವರಿಗೆ ಈಗ ಮೇಲ್ಮನೆ ಚುನಾವಣೆಯಲ್ಲಿ ಮತ ಚಲಾಯಿಸಲು ಅವಕಾಶವಿದೆಯೋ? ಇಲ್ಲವೋ? ಅಥವಾ ಯಾವ ಕ್ರಮಕೈಗೊಳ್ಳಬೇಕು? ಎಂಬುದರ ಕುರಿತು ಜಿಲ್ಲಾಧಿಕಾರಿಗಳು ತಿಳಿಸಬೇಕು. ಈ ಬಗ್ಗೆ ತಾಂತ್ರಿಕವಾಗಿಯೂ ಪರಿಶೀಲಿಸಬೇಕು ಎಂದು ಪ್ರತಿಕ್ರಿಯಿಸಿದರು.